ಶಿಡ್ಲಘಟ್ಟ: ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಗೊಂದಲಗಳಿಗೆ ಪರಿಹಾರ ಕಂಡುಕೊಂಡು, ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಲು ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಕಾಂಗ್ರೆಸ್(Congress) ಮುಖಂಡ ಕುಂದಲಗುರ್ಕಿ ಮುನೀಂದ್ರ ಒತ್ತಾಯಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ವಿ. ಮುನಿಯಪ್ಪ(V Muniyappa) ಅವರ ಮಾರ್ಗದರ್ಶನದಲ್ಲಿ ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಹಲವು ಕಾರ್ಯಕರ್ತರು ಬಲವಾಗಿ ಕಟ್ಟಿದ್ದಾರೆ. ಆದರೆ ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಂದ ಮುಖಂಡರ ನಡುವೆ ಸಮನ್ವಯದ ಕೊರತೆ ಉಂಟಾಗಿ, ಕಾರ್ಯಕರ್ತರು ನೋವು ಅನುಭವಿಸು ವಂತಾಗಿದೆ ಎಂದರು.
ಇದನ್ನೂ ಓದಿ: Shidlaghatta News: ಮಹನೀಯರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಿಳಿಸುವುದು ಕರ್ತವ್ಯ: ಶ್ರೀಕಾಂತ್
ಪಕ್ಷದ ಮತದಾರರು ಕಾಂಗ್ರೆಸ್ ಪರವಾಗಿದ್ದರೂ, ಅವರನ್ನು ಮುನ್ನಡೆಸುವ ಮುಖಂಡರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸುಮಾರು ಮೂರು ವರ್ಷಗಳಾದರೂ ನಾಮನಿರ್ದೇಶನ ಪ್ರಕ್ರಿಯೆ ಪೂರ್ಣಗೊಳ್ಳದಿರುವುದು ಕಾರ್ಯಕರ್ತರಲ್ಲಿ ನಿರಾಸೆ ಮೂಡಿಸಿದೆ. ಪಕ್ಷಕ್ಕಾಗಿ ದುಡಿದವರಿಗೆ ಸೂಕ್ತ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್ ಹಾಗೂ ಕೆಪಿಸಿಸಿ ಸಮನ್ವಯದಿಂದ ಕಾರ್ಯನಿರ್ವಹಿಸಿ, ಎಲ್ಲ ಮುಖಂಡರನ್ನು ಒಂದೇ ವೇದಿಕೆಗೆ ತರಬೇಕು. ಶೇಷೇಣ ಅವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಒಗ್ಗಟ್ಟಿಗೆ ಶ್ರಮಿಸಬೇಕು. ಕಾಂಗ್ರೆಸ್ ಸ್ಥಾಪನಾ ದಿನದಿಂದಲೇ ಶಿಡ್ಲಘಟ್ಟದಲ್ಲಿ ಸಂಘಟನೆಗೆ ಹೊಸ ಆರಂಭ ಸಿಗಲಿ ಎಂಬುದು ನಮ್ಮ ಆಶಯ ಎಂದು ತಿಳಿಸಿದರು.