ಚಿಕ್ಕಬಳ್ಳಾಪುರ: ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಅಕ್ರಮವಾಗಿ ಇ-ಖಾತೆ ಮಾಡಿ ಕೊಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರಸಭೆಯ ಅಧಿಕಾರಿಗಳು ಸೇರಿದಂತೆ ಹಲವರ ವಿರುದ್ಧ ಬೆಂಗಳೂರಿನ ಭೂ ಕಬಳಿಕೆ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ತಾಲ್ಲೂಕಿನ ಅಣಕನೂರು ಗ್ರಾಮದ ಸರ್ವೆ ನಂ.109ರಲ್ಲಿರುವ 24 ಎಕರೆ ಸರ್ಕಾರಿ ಜಮೀನಿಗೆ ಖಾಸಗಿ ವ್ಯಕ್ತಿಗಳ ಹೆಸರಲ್ಲಿ ಇ-ಖಾತೆ ಮಾಡಿರುವ ಪ್ರಕರಣ ಇದೀಗ ಗಂಭೀರ ಕಾನೂನು ಹೋರಾಟಕ್ಕೆ ತಿರುಗಿದೆ.
ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ, ಕಂದಾಯ ನಿರೀಕ್ಷಕ ವೆಂಕಟೇಶ್, ನಿವೃತ್ತ ಕಂದಾಯ ಅಧಿಕಾರಿ ನಟರಾಜ್, ಕರ ವಸೂಲಿಗಾರ ಟಿ.ಎನ್.ವೆಂಕಟೇಶ್ ಹಾಗೂ ಅಕ್ರಮವಾಗಿ ಇ-ಖಾತೆ ಮಾಡಿಸಿಕೊಂಡ ಆರೋಪ ಎದುರಿಸುತ್ತಿರುವ ಭರಣಿ ಮತ್ತು ಚಂದ್ರಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಸಂಬಂಧ ತಾಲ್ಲೂಕು ತಹಶೀಲ್ದಾರ್ ರಶ್ಮಿ ಅವರು ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ. ಸರ್ಕಾರಿ ಆಸ್ತಿಯನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ವರ್ಗಾಯಿಸುವ ರೀತಿಯಲ್ಲಿ ಇ-ಖಾತೆ ಮಾಡಿಕೊಟ್ಟಿರುವ ಆರೋಪದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಪಾತ್ರದ ಕುರಿತು ಕಾನೂನು ಪ್ರಕ್ರಿಯೆ ಆರಂಭವಾಗಿದೆ.
ಇದರ ಬೆನ್ನಲ್ಲೇ, ಅಕ್ರಮ ಇ-ಖಾತೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪ ಎದುರಿಸು ತ್ತಿರುವ ನಗರಸಭೆ ಅಧಿಕಾರಿಗಳ ವಿರುದ್ಧ ದೋಷಾರೋಪ ಪಟ್ಟಿ–1ರಿಂದ 4ರವರೆಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಪೌರಾಡಳಿತ ನಿರ್ದೇಶಕರು ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಇದರಿಂದ ಪ್ರಕರಣ ಎದುರಿಸುತ್ತಿರುವ ಅಧಿಕಾರಿಗಳಿಗೆ ಮತ್ತಷ್ಟು ಆಡಳಿತಾತ್ಮಕ ಹಾಗೂ ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ.
ಪ್ರಗತಿ ಪರಿಶೀಲನಾ ಸಭೆಯಲ್ಲೂ ಪ್ರಸ್ತಾಪ: ಈ ಸರ್ಕಾರಿ ಜಮೀನಿನ ಅಕ್ರಮ ಇ-ಖಾತೆ ಪ್ರಕರಣ ಈ ಹಿಂದೆ ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇತ್ತೀಚೆಗೆ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿಯೂ ಈ ವಿಚಾರ ಪ್ರಸ್ತಾಪವಾಗಿತ್ತು. ಈ ವೇಳೆ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರು ನಗರಸಭೆ ಪೌರಾಯುಕ್ತರನ್ನು ತರಾಟೆಗೆ ತೆಗೆದುಕೊಂಡು, ಪ್ರಕರಣದ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಸರ್ಕಾರಿ ಆಸ್ತಿಯ ರಕ್ಷಣೆಯ ಹೊಣೆ ಹೊತ್ತಿರುವ ಅಧಿಕಾರಿಗಳ ವಿರುದ್ಧವೇ ಅಕ್ರಮ ಇ-ಖಾತೆ ಆರೋಪ ಕೇಳಿ ಬಂದಿರುವುದು ಸಾರ್ವಜನಿಕ ವಲಯದಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿದೆ. ಇದೀಗ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿರುವುದರಿಂದ ಆರೋಪಗಳ ತನಿಖೆ, ಸಂಬಂಧಪಟ್ಟ ಅಧಿಕಾರಿಗಳ ಹೊಣೆಗಾರಿಕೆ ಮತ್ತು ಸರ್ಕಾರಿ ಜಮೀನನ್ನು ಮರಳಿ ಸರ್ಕಾರದ ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಕೈಗೊಳ್ಳುವ ಮುಂದಿನ ಕ್ರಮಗಳ ಬಗ್ಗೆ ಸಾರ್ವಜನಿಕರು ಕುತೂಹಲದಿಂದ ಎದುರು ನೋಡುತ್ತಿದ್ದಾರೆ.