ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Rakshana Vedike: ಕರ್ನಾಟಕ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಯಾಗಲಿ : ಕರವೇ ಪ್ರತಿಭಟನೆ

ತೃತೀಯ ಭಾಷೆಯಾದ ಹಿಂದಿಯು ಕರ್ನಾಟಕದ ವಿದ್ಯಾರ್ಥಿಗಳಿಗೆ ಅನಗತ್ಯವಾದ ಒತ್ತಡವನ್ನು ಒಡ್ಡುತ್ತಿದೆ. ೨೦೨೪ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೯೦,೭೯೪ ವಿದ್ಯಾರ್ಥಿಗಳು ತೃತೀಯ ಭಾಷೆಯಾದ ಹಿಂದಿಯಲ್ಲಿ ಅನುತ್ತೀರ್ಣರಾಗಿದ್ದಾರೆ. ಇದು ಒಟ್ಟು ವಿದ್ಯಾರ್ಥಿಗಳಲ್ಲಿ ಸುಮಾರು ಶೇ ೨೧ ರಷ್ಟಿದೆ. ೨೦೨೫ರಲ್ಲಿ ಈ ಸಂಖ್ಯೆ ೧.೨ ಲಕ್ಷಕ್ಕಿಂತ ಹೆಚ್ಚಾಗಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಇದು ಅತ್ಯಂತ ಆಘಾತಕಾರಿ ಬೆಳವಣಿಗೆಯಾಗಿದೆ.

ಕರ್ನಾಟಕ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಯಾಗಲಿ

ಕರ್ನಾಟಕ ಶಿಕ್ಷಣ ವ್ಯೆವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರುವಂತೆ ಒತ್ತಾಯಿಸಿ ಕರವೇ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.

Profile Ashok Nayak Jul 6, 2025 9:18 PM

ಚಿಕ್ಕಬಳ್ಳಾಪುರ: ಕರ್ನಾಟಕ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ನಾರಾಯಣಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆಯ ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಕಾರ್ಯಕರ್ತರು ನಗರ ಹೊರವಲಯದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಎಂ.ಆರ್.ಲೋಕೇಶ್ ಕರ್ನಾಟಕ ರಾಜ್ಯದ ಪಠ್ಯಕ್ರಮ ದಲ್ಲಿ ಸಾಧಾರಣವಾಗಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಕನ್ನಡವನ್ನು ದ್ವಿತೀಯ ಭಾಷೆಯಾಗಿ ಇಂಗ್ಲಿಷನ್ನು ಮತ್ತು ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಸಲಾಗುತ್ತಿದೆ. ರಾಜ್ಯ ಪಠ್ಯಕ್ರಮದಲ್ಲಿ ಓದುವ ಮಕ್ಕಳು ಮೂರನೇ ಭಾಷೆಯಾಗಿ ಹಿಂದಿ ಕಲಿಯುವುದು ಕಡ್ಡಾಯವಾಗಿದೆ, ಮಾತ್ರವಲ್ಲ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನೂರು ಅಂಕಗಳಿಗೆ ಹಿಂದಿ ಪರೀಕ್ಷೆಯನ್ನು ಕಡ್ಡಾಯವಾಗಿ ಬರೆಯಬೇಕಿದೆ ಎಂದರು.

ತೃತೀಯ ಭಾಷೆಯಾದ ಹಿಂದಿಯು ಕರ್ನಾಟಕದ ವಿದ್ಯಾರ್ಥಿಗಳಿಗೆ ಅನಗತ್ಯವಾದ ಒತ್ತಡವನ್ನು ಒಡ್ಡುತ್ತಿದೆ. ೨೦೨೪ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೯೦,೭೯೪ ವಿದ್ಯಾರ್ಥಿಗಳು ತೃತೀಯ ಭಾಷೆಯಾದ ಹಿಂದಿಯಲ್ಲಿ ಅನುತ್ತೀರ್ಣರಾಗಿದ್ದಾರೆ. ಇದು ಒಟ್ಟು ವಿದ್ಯಾರ್ಥಿಗಳಲ್ಲಿ ಸುಮಾರು ಶೇ ೨೧ ರಷ್ಟಿದೆ. ೨೦೨೫ರಲ್ಲಿ ಈ ಸಂಖ್ಯೆ ೧.೨ ಲಕ್ಷಕ್ಕಿಂತ ಹೆಚ್ಚಾಗಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಇದು ಅತ್ಯಂತ ಆಘಾತಕಾರಿ ಬೆಳವಣಿಗೆಯಾಗಿದೆ. ಇದು ಹಿಂದಿಯ ಕಡ್ಡಾಯ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಶೈಕ್ಷಣಿಕ ಹೊರೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ ಎಂದರು.

ಇದನ್ನೂ ಓದಿ: Chikkaballapur News: ನಗರಸಭೆ ವತಿಯಿಂದ ಸವಲತ್ತುಗಳ ವಿತರಣೆ ಮಾಡಿದ ಶಾಸಕ ಪುಟ್ಟಸ್ವಾಮಿಗೌಡ

ಹಿಂದಿ ಹೇರಿಕೆಗೆ ಕನ್ನಡದ ಮಕ್ಕಳ ಭವಿಷ್ಯ ಬಲಿಯಾಗುತ್ತಿದೆ.ತ್ರಿಭಾಷಾ ಸೂತ್ರದ ಕುರಿತು ರಾಷ್ಟ್ರ ಕವಿ ಕುವೆಂಪು ಅವರು ಹಿಂದೆಯೇ ತೀಕ್ಷವಾದ ವಿರೋಧ ಸಾರಿದ್ದರು. ಕರ್ನಾಟಕದ ಸಾಂಸ್ಕೃ ತಿಕ ಮತ್ತು ಭಾಷಿಕ ಆಸ್ಮಿತೆಯಲ್ಲಿ ಈ ನೆಲದ ನುಡಿಯಾದ ಕನ್ನಡವು ಕೇಂದ್ರ ಸ್ಥಾನವನ್ನು ಹೊಂದಿದೆ. ಬದಲಾದ ಕಾಲಘಟ್ಟದಲ್ಲಿ ಇಂಗ್ಲಿಷ್ ಭಾಷೆಯು ಜಾಗತಿಕ ವ್ಯವಹಾರಗಳಿಗೆ, ಉನ್ನತ ಶಿಕ್ಷಣ ಮತ್ತು ವೃತ್ತಿ ನಿರ್ವಹಣೆಗೆ ಅಗತ್ಯವಾಗಿದ್ದು, ಇದನ್ನು ಕಲಿಯುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಿದೆ. ಆದರೆ, ಹಿಂದಿಯನ್ನು ಕಡ್ಡಾಯವಾಗಿ ಓದಿಸುವುದರಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಯಾವುದೇ ಗಮನಾರ್ಹ ಲಾಭವಿಲ್ಲ. ತ್ರಿಭಾಷಾ ನೀತಿಯಿಂದ ಕರ್ನಾಟಕಕ್ಕೆ ಯಾವ ಲಾಭವೂ ಇಲ್ಲ. ಇದರಿಂದ ಒಬ್ಬನೇ ಒಬ್ಬ ಕನ್ನಡಿನಿಗೂ ಉದ್ಯೋಗ ದೊರೆತಿಲ್ಲ ಎಂದರು.

ತಮಿಳುನಾಡು ೧೯೬೮ರಿಂದಲೇ ತ್ರಿಭಾಷಾ ನೀತಿಯನ್ನು ತಿರಸ್ಕರಿಸಿ, ತಮಿಳು ಮತ್ತು ಇಂಗ್ಲಿಷ್ ಭಾಷೆಗಳನ್ನು ಒಳಗೊಂಡ ದ್ವಿಭಾಷಾ ನೀತಿಯನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಇತ್ತೀಚೆಗೆ, ಮಹಾರಾಷ್ಟ್ರ ಸರ್ಕಾರವು ಸಹ ತ್ರಿಭಾಷಾ ನೀತಿಯನ್ನು ರದ್ದುಗೊಳಿಸಿ, ಮರಾಠಿ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ನಿರ್ಧಾರವನ್ನು ಕೈಗೊಂಡಿದೆ. ಈ ರಾಜ್ಯಗಳು ತಮ್ಮ ಭಾಷಿಕ ಗುರುತನ್ನು ರಕ್ಷಿಸುವುದರ ಜೊತೆಗೆ ಶೈಕ್ಷಣಿಕ ಗುಣಮಟ್ಟವನ್ನು ಕಾಪಾಡಿಕೊಂಡಿವೆ. ಕರ್ನಾಟಕವು ಈ ಉದಾಹರಣೆಗಳಿಂದ ಸ್ಪೂರ್ತಿಯನ್ನು ಪಡೆದು, ಮಾತೃಭಾಷೆ ಕನ್ನಡ ಉಳಿಸಿಕೊಂಡು ಜೊತೆಗೆ ಆಂಗ್ಲ ಭಾಷೆಯನ್ನು ಜಾಗತಿಕ ಸಂವಹನ ಭಾಷೆಯಾಗಿ ಬಳಕೆ ಮಾಡಲು ಅನುಕೂಲವಾಗುವಂತೆ ದ್ವಿಭಾಷಾ ನೀತಿಗೆ ಆದ್ಯತೆ ನೀಡಬೇಕು. ಕನ್ನಡದಲ್ಲಿ ಶಿಕ್ಷಣ ಪಡೆಯುವುದರಿಂದ ನಾಡಿನ ಸಂಸ್ಕೃತಿ, ಇತಿಹಾಸ, ಮೌಲ್ಯಗಳನ್ನು ಮಕ್ಕಳು ಅರಿಯಲು ಸಹಕಾರಿಯಾಗುತ್ತದೆ. ಇದರೊಂದಿಗೆ ಇಂಗ್ಲೀಷ್ ಭಾಷೆಯನ್ನು ಅಭ್ಯಾಸ ಮಾಡುವುದರಿಂದ ವೃತ್ತಿಪರ ವಿಶ್ವವನ್ನು ವಿಶಾಲಗೊಳಿಸಲು ಅನುಕೂಲ ವಾಗಲಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಕರವೇ ಯುವ ಜಿಲ್ಲಾಘಟಕದ ಅಧ್ಯಕ್ಷ ಎಬಿಕೆ ಬಾಲು, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುಜಾತಮ್ಮ, ಪದಾಧಿಕಾರಿಗಳಾದ ಹರೀಶ್, ನಂದಿವಿನೋದ್, ವೆಂಕಟರೋಣಪ್ಪ, ಮುನಿರಾಜು, ಮಧುಲತಾ, ಲಕ್ಷ್ಮೀ,ಶಾರದಮ್ಮ, ಶ್ರೀನಿವಾಸಯಾದವ್, ಚಿಕ್ಕನಹಳ್ಳಿದೇವರಾಜ್, ಆರ್.ನಾಗರಾಜ್, ಮಂಜುನಾಥ್, ಚೇತನ್ ಕುಮಾರ್, ಜಿಯಾಉಲ್ಲಾ, ಶಬ್ಬೀರ್ ಅಹಮದ್, ಮತ್ತಿತರರು ಇದ್ದರು.