ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Save Water: ನೀರಿನ ಮೀಟರ್ ಅಳವಡಿಸಿ ಪೋಲು ತಡೆಗಟ್ಟಿ: ಡಾ.ಎನ್.ಮಂಜುಳಾ

ಯೋಜಿತ ರೀತಿಯಲ್ಲಿ ನೀರು ಪೂರೈಸುವುದರ ಜೊತೆಗೆ ಬಳಕೆಯನ್ನು ನಿಯಂತ್ರಿಸಲು ಹಾಗೂ ಅನಗತ್ಯ ವಾಗಿ ನೀರು ಪೋಲಾಗುವುದನ್ನು ತಡೆಯಲು ಮೀಟರ್ ಅಳವಡಿಕೆ ಪರಿಣಾಮಕಾರಿ ಕ್ರಮವಾಗಿದೆ. ಹೀಗಾಗಿ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡು, ಬಳಕೆಯ ಆಧಾರದ ಮೇಲೆ ಶುಲ್ಕ ವಿಧಿಸುವ ವ್ಯವಸ್ಥೆ ಜಾರಿಗೆ ತರಬೇಕು

ಚಿಕ್ಕಬಳ್ಳಾಪುರ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಳ ಸಂಪರ್ಕಗಳಿಗೆ ನೀರಿನ ಮೀಟರ್ ಅಳವಡಿಸಿ, ಬಳಕೆಯ ಪ್ರಮಾಣಕ್ಕೆ ಅನುಗುಣವಾಗಿ ಶುಲ್ಕ ವಿಧಿಸುವ ವ್ಯವಸ್ಥೆ ಜಾರಿಗೆ ತರುವ ಮೂಲಕ ನೀರಿನ ಪೋಲು ತಡೆಗಟ್ಟಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(Bangalore Water Supply and Sewerage Board) ಅಧ್ಯಕ್ಷೆ ಡಾ.ಎನ್.ಮಂಜುಳಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಕುಡಿಯುವ ನೀರು ಹಾಗೂ ಬರ ಪರಿಸ್ಥಿತಿ ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆಯ ತೀವ್ರ ಕೊರತೆಯಿಂದ ಜಿಲ್ಲೆಯ ಎಲ್ಲ 8 ತಾಲೂಕುಗಳು ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮರ್ಪಕ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಇದನ್ನೂ ಓದಿ: Chinthamani News: ಮುರುಗಮಲ್ಲ ಉರುಸ್ ಮಹೋತ್ಸವ: ದರ್ಗಾದಲ್ಲಿ ಜೆ.ಕೆ.ಕೃಷ್ಣಾರೆಡ್ಡಿ ವಿಶೇಷ ಪೂಜೆ

ಯೋಜಿತ ರೀತಿಯಲ್ಲಿ ನೀರು ಪೂರೈಸುವುದರ ಜೊತೆಗೆ ಬಳಕೆಯನ್ನು ನಿಯಂತ್ರಿಸಲು ಹಾಗೂ ಅನಗತ್ಯವಾಗಿ ನೀರು ಪೋಲಾಗುವುದನ್ನು ತಡೆಯಲು ಮೀಟರ್ ಅಳವಡಿಕೆ ಪರಿಣಾಮಕಾರಿ ಕ್ರಮವಾಗಿದೆ. ಹೀಗಾಗಿ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡು, ಬಳಕೆಯ ಆಧಾರದ ಮೇಲೆ ಶುಲ್ಕ ವಿಧಿಸುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ನಿರ್ದೇಶನ ನೀಡಿದರು.

ಪ್ರಸ್ತುತ ಜಿಲ್ಲೆಯ 38 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಳೆ ಬಾರದಿದ್ದರೆ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ 8884777235 ಸಹಾಯ ವಾಣಿ ಆರಂಭಿಸಲಾಗಿದ್ದು, ಸಾರ್ವಜನಿಕರು ನೀರಿನ ಸಮಸ್ಯೆ ಎದುರಾದಲ್ಲಿ ಸಂಪರ್ಕಿಸುವಂತೆ ಮನವಿ ಮಾಡಿದರು.

1018905

ಸಭೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರು ಪೂರೈಕೆ, ನೀರಿನ ಮೂಲಗಳು, ಮೇವಿನ ಲಭ್ಯತೆ, ಬೆಳೆಹಾನಿ ಸಮೀಕ್ಷೆ, ಬೆಳೆ ವಿಮೆ ನೋಂದಣಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಲಾಯಿತು. ಬರ ಪರಿಸ್ಥಿತಿಯಿಂದ ಜನರು ಹಾಗೂ ರೈತರಿಗೆ ತೊಂದರೆ ಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

1018937_water

ಬಳಿಕ ಡಾ.ಮಂಜುಳಾ ಅವರು ನಾಯನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮೂಲಸೌಕರ್ಯ ಹಾಗೂ ವಿದ್ಯಾರ್ಥಿಗಳಿಗೆ ದೊರೆಯುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿದರು. SIR-2026 ಮತದಾರರ ಪಟ್ಟಿ ಪರಿಷ್ಕರಣೆ ಹಿನ್ನೆಲೆಯಲ್ಲಿ ನಾಯನಹಳ್ಳಿ ಗ್ರಾಮದಲ್ಲಿ ಮನೆ-ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯ ಪರಿಶೀಲನೆ ನಡೆಸಿದರು. ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದರು.

ಅಣಕನೂರು ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೂ ಭೇಟಿ ನೀಡಿ ವಸತಿ, ಆಹಾರ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳನ್ನು ಪರಿಶೀಲಿಸಿ ಅಗತ್ಯ ಸುಧಾರಣೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಜಿ. ಪ್ರಭು, ಜಿಪಂ ಸಿಇಒ ಡಾ. ವೈ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಭಾಸ್ಕರ್, ಉಪ ವಿಭಾಗಾಧಿಕಾರಿ ಡಿ.ಹೆಚ್. ಅಶ್ವಿನ್, ಜಿಪಂ ಉಪ ಕಾರ್ಯದರ್ಶಿ ಅತಿಕ್ ಪಾಷಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.