ಗುಡಿಬಂಡೆ : ತಾಲೂಕಿನ ಸೋಮೇಶ್ವರ ಗ್ರಾಮದ ಸರ್ವೆ ಸಂಖ್ಯೆ 31ರಲ್ಲಿ ಸುಮಾರು 54 ಎಕರೆ ಗೋಮಾಳ ಹಾಗೂ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಭೂಮಿಯನ್ನು ಅತಿಕ್ರಮಿಸಿ ಸೋಲಾರ್ ಪ್ಲಾಂಟ್ ನಿರ್ಮಿಸಲಾಗಿದೆ ಎಂದು ಆರೋಪಿಸಿರುವ ರೈತರು, ನ್ಯಾಯಕ್ಕಾಗಿ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಅನಿರ್ದಿಷ್ಟಾವಧಿ ಮೌನ ಸತ್ಯಾಗ್ರಹ ಆರಂಭಿಸಿದ್ದಾರೆ.
ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರ ವೆಂಕಟೇಶ್ ಮಾತನಾಡಿ, ಗೋಮಾಳ ಹಾಗೂ ಪರಿಶಿಷ್ಟ ಸಮುದಾಯದ ಭೂಮಿಯಲ್ಲಿ ಸೋಲಾರ್ ಪ್ಲಾಂಟ್ ನಿರ್ಮಿಸಿರುವುದರಿಂದ ಹಲವು ರೈತರಿಗೆ ಅನ್ಯಾಯವಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಆದ್ದರಿಂದ ನ್ಯಾಯ ಸಿಗುವವರೆಗೆ ಅನಿರ್ದಿಷ್ಟಾವಧಿ ಮೌನ ಸತ್ಯಾಗ್ರಹ ಮುಂದುವರಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: Gudibande News: ಜನಪದ ಸಂಸ್ಕೃತಿ ಹಾಗೂ ಕಲೆಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ : ರಂಗಭೂಮಿ ಹಿರಿಯ ಕಲಾವಿದ ಪ್ರಭಾಕರ್ ರಾವ್
ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು. ಹಲವು ವರ್ಷಗಳಿಂದ ವಿವಿಧ ಇಲಾಖೆಗಳಿಗೆ ದೂರು ನೀಡಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಸ್ಥಳೀಯ ಆಡಳಿತವೂ ಪ್ರತಿಭಟನೆಗೆ ಅವಕಾಶ ನೀಡದೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತರು ಮಾತನಾಡಿ, ಆರಂಭದಲ್ಲಿ ಜಮೀನು ಖರೀದಿಸಿ ಉದ್ಯೋಗ ನೀಡುವುದಾಗಿ ಹಾಗೂ ಬದಲಿ ಜಮೀನು ಒದಗಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಈಗ ಯಾವುದೇ ಭರವಸೆ ಈಡೇರಿಸದೆ ನ್ಯಾಯ ಕೇಳಿದರೆ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿದರು.
ನಮಗೆ ನ್ಯಾಯ ದೊರೆಯುವವರೆಗೆ ಹೋರಾಟವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ಸಮಸ್ಯೆ ಪರಿಹರಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾ ಞಕಾರರು ಆಗ್ರಹಿಸಿದರು.