ಚಿಕ್ಕಬಳ್ಳಾಪುರ : ಈ ಬಾರಿಯ ನವೆಂಬರ್ 1 ರಂದು ನಡೆಯುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋ ತ್ಸವ ಕಾರ್ಯಕ್ರಮವನ್ನು ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮ ಸಡಗರದೊಂದಿಗೆ ರಾಷ್ಟ್ರೀಯ ಹಬ್ಬಗಳ ಮಾದರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ತಿಳಿಸಿದರು.
ನಗರಹೊರವಲಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಕುರಿತ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳ, ಸಾಹಿತಿಗಳ ಸಲಹೆ ಸೂಚನೆಗಳನ್ನು ಆಲಿಸಿ ಮಾತನಾಡಿದರು.
ಈ ಬಾರಿ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದ್ದು, ಅಂದು ವೇದಿಕೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ, ನಾಡಗೀತೆ, ವಿದ್ಯಾರ್ಥಿಗಳಿಂದ ಸಮೂಹ ಗೀತ ಗಾಯನ ಮತ್ತು ನೃತ್ಯ, ಗೌರವ ವಂದನೆ, ಸಾಧಕರಿಗೆ ಸನ್ಮಾನ, ಪೊಲೀಸ್ ಕವಾಯತು ಕಾರ್ಯಕ್ರಮಗಳನ್ನು ಎಂದಿನಂತೆಯೇ ಆಯೋಜಿಸಲಾಗುವುದು. ಅಲ್ಲದೆ ನಗರದ ಉಪವಿಭಾಗಾಧಿಕಾರಿ ಕಚೇರಿಯಿಂದ ಬಿ.ಬಿ.ರಸ್ತೆಯ ಮೂಲಕ ಕ್ರೀಡಾಂಗಣದವರೆಗೆ ಸ್ಥಬ್ದ ಚಿತ್ರಗಳು ಹಾಗೂ ವಿವಿಧ ಕಲಾ ತಂಡ ಗಳೊಂದಿಗೆ ಅದ್ಧೂರಿ ಮೆರವಣಿಗೆ ನಡೆಸಲಾಗುವುದು.
ಸ್ಥಳೀಯ ಸಾಹಿತಿಗಳನ್ನು ಒಳಗೊಂಡಂತೆ ಪ್ರಮುಖ ಕನ್ನಡ ಸಾಹಿತಿಗಳ ಛಾಯಾಚಿತ್ರಗಳನ್ನು ಹಾಗೂ ಅವರ ಸಂದೇಶಗಳ ಫಲಕಗಳನ್ನು (ಪ್ಲೇಕ್ಸ್) ನಗರದ ಪ್ರಮುಖ ವೃತ್ತಗಳಲ್ಲಿ ಅಳವಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ವೇದಿಕೆ ಸಿದ್ಧತೆ, ಅಲಂಕಾರ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಆಹ್ವಾನ ಪತ್ರಿಕೆಗಳ ಮುದ್ರಣ ಮತ್ತು ವಿತರಣೆ, ಆಂಬುಲೆನ್ಸ್ ವ್ಯವಸ್ಥೆ, ಕಾರ್ಯಕ್ರಮ ನಿರ್ವಹಣೆ, ನಿರೂಪಣೆ, ಕ್ರೀಡಾಂಗಣ ಸ್ವಚ್ಛತೆ ಇನ್ನಿತರೆ ಸಿದ್ಧತಾ ಕಾರ್ಯಗಳನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಮಾಡಿ ಈ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕನ್ನಡ ಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ
ಜಿಲ್ಲಾ ಕೇಂದ್ರದಲ್ಲಿ ಅತ್ಯಂತ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಕನ್ನಡ ಭವನದಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವದ ನವೆಂಬರ್ 1 ರ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಗುವುದು. 70ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಗಿರುವುದರಿಂದ ಕನ್ನಡ ಭವನದಲ್ಲಿ ನವೆಂಬರ್ 1 ರಿಂದ 70 ದಿನ ನಿರಂತರವಾಗಿ ಸಂಜೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತೆ ವಿವಿಧ ಕನ್ನಡಪರ ಸಂಘಟನೆಗಳ ಮುಖ್ಯಸ್ಥರು, ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೈವಾರ ಶ್ರೀನಿವಾಸ್ ರವರು ಸಲಹೆಯನ್ನು ನೀಡಿದ್ದಾರೆ. ಈ ಕುರಿತು ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದರು.
ನವೆಂಬರ್ 1 ರಂದು ನಡೆಯಲಿರುವ ಎಲ್ಲ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಎಲ್ಲಾ ಕನ್ನಡಪರ ಸಂಘಟನೆಗಳ ಮುಖ್ಯಸ್ಥರು ಹಾಗೂ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು ಈ ವೇಳೆ ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷಾ, ನಿಕಟಪೂರ್ವ ಅಧ್ಯಕ್ಷ ಕೈವಾರ ಶ್ರೀನಿವಾಸ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್, ಸರ್ಕಾರಿ ನೌಕರ ಸಂಘದ ಜಿಲ್ಲಾ ಅಧ್ಯಕ್ಷ ಎ.ನಾರಾಯಣಸ್ವಾಮಿ, ಸಾಹಿತಿ ಗೋಪಾಲಗೌಡ ಕಲ್ವಮಂಜಲಿ, ಮುಖಂಡರಾದ ಯಲುವಳ್ಳಿ ಸೊಣ್ಣೆಗೌಡ, ಮಂಚನಬಲೆ ಶ್ರೀನಿವಾಸ್, ಪಿ. ನಾರಾಯಣಸ್ವಾಮಿ, ಚಂದ್ರು, ರವಿಕುಮಾರ್, ಬಾಲು, ಕಸಾಪ ಸದಸ್ಯರು, ವಿವಿಧ ಕನ್ನಡಪರ ಸಂಘಟನೆಗಳ ಮುಖ್ಯಸ್ಥರು, ಸದಸ್ಯರು, ಪದಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.