ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

MLA Pradeep Eshwar: ಕ್ಷೇತ್ರದ ಅಭಿವೃದ್ಧಿಗೆ ಹಲವು ಕಾರ್ಯಕ್ರಮ: ಶಾಸಕ ಪ್ರದೀಪ್ ಈಶ್ವರ್

ಕಳೆದ ಮೂರು ವರ್ಷಗಳಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಮಂದಿ ವಿವಿಧ ಸಮಸ್ಯೆಗಳನ್ನು ಕ್ಯೂಆರ್ ಕೋಡ್ ಮೂಲಕ ದಾಖಲಿಸಿದ್ದು, ರಸ್ತೆ, ಕಸ ವಿಲೇವಾರಿ, ಕುಡಿಯುವ ನೀರು, ನೀರಿನ ಟ್ಯಾಪ್ ದುರಸ್ತಿ, ಪಿಂಚಣಿ, ವಿಧವಾ ವೇತನ ಹಾಗೂ ಬೀದಿ ದೀಪ ಸೇರಿದಂತೆ ಹಲವು ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ ಎಂದು ಶಾಸಕ ಪ್ರದೀಪ್ ಈಶ್ವರ್(MLA Pradeep Eshwar) ತಿಳಿಸಿದರು.

ಕ್ಷೇತ್ರದ ಅಭಿವೃದ್ಧಿಗೆ ಹಲವು ಕಾರ್ಯಕ್ರಮ: ಶಾಸಕ ಪ್ರದೀಪ್ ಈಶ್ವರ್

-

Profile
Ashok Nayak Oct 3, 2026 9:49 PM

ಚಿಕ್ಕಬಳ್ಳಾಪುರ: ಕ್ಷೇತ್ರದ ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ತ್ವರಿತವಾಗಿ ಸ್ಪಂದಿಸುವ ಉದ್ದೇಶದಿಂದ ಕ್ಯೂಆರ್ ಕೋಡ್(QR Code) ಮೂಲಕ ದೂರು ಸ್ವೀಕರಿಸುವ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಮಂದಿ ವಿವಿಧ ಸಮಸ್ಯೆಗಳನ್ನು ಕ್ಯೂಆರ್ ಕೋಡ್ ಮೂಲಕ ದಾಖಲಿಸಿದ್ದು, ರಸ್ತೆ, ಕಸ ವಿಲೇವಾರಿ, ಕುಡಿಯುವ ನೀರು, ನೀರಿನ ಟ್ಯಾಪ್ ದುರಸ್ತಿ, ಪಿಂಚಣಿ, ವಿಧವಾ ವೇತನ ಹಾಗೂ ಬೀದಿ ದೀಪ ಸೇರಿದಂತೆ ಹಲವು ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ ಎಂದು ಶಾಸಕ ಪ್ರದೀಪ್ ಈಶ್ವರ್(MLA Pradeep Eshwar) ತಿಳಿಸಿದರು.

ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೂ ಆದ್ಯತೆ ನೀಡಲಾಗಿದೆ. ರಸ್ತೆ ನಿರ್ಮಾಣ, ಕುಡಿಯುವ ನೀರಿನ ಸಮಸ್ಯೆ, ಚರಂಡಿ ಹಾಗೂ ವಿವಿಧ ಸಾರ್ವಜನಿಕ ಮೂಲಸೌಕರ್ಯ ಗಳ ಕುರಿತು ಬಂದ ಮನವಿಗಳನ್ನು ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ತಂದು ಪರಿಹಾರ ಕಲ್ಪಿಸುವ ಕೆಲಸ ಮಾಡಲಾಗಿದೆ. ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ನೇರವಾಗಿ ತಿಳಿದುಕೊಳ್ಳಲು ಕಾರ್ಯಕರ್ತರ ಮೂಲಕವೂ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: MLA Pradeep Eshwar: ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ; ಸಾಮಾನ್ಯ ಕಾರ್ಯಕರ್ತರಿಗೂ ಸ್ಥಾನ ಕಲ್ಪಿಸಿದ ನಿರ್ಧಾರಕ್ಕೆ ರಾಜಕೀಯ ಮಹತ್ವ

ಆರೋಗ್ಯ ಸೇವೆಗೆ ಆದ್ಯತೆ

ಕ್ಷೇತ್ರದ ಜನರಿಗೆ ತುರ್ತು ಆರೋಗ್ಯ ಸೇವೆ ದೊರೆಯುವಂತೆ ಆಂಬ್ಯುಲೆನ್ಸ್ ಸೇವೆಯನ್ನು ಬಳಸಿ ಕೊಳ್ಳಲಾಗುತ್ತಿದೆ. ಆಂಬ್ಯುಲೆನ್ಸ್ ಮೂಲಕ ರೋಗಿಗಳನ್ನು ಅವರ ಮನೆಗಳಿಂದ ಆಸ್ಪತ್ರೆಗೆ ಕರೆದೊ ಯ್ಯುವ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 15 ನಿಮಿಷಗಳೊಳಗೆ ರೋಗಿಗಳ ನೆರವಿಗೆ ಧಾವಿಸುವ ರೀತಿಯಲ್ಲಿ ಸೇವೆ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಸೇವೆಯ ನಿರ್ವಹಣೆಗೆ ಕಾಲ್ ಸೆಂಟರ್ ವ್ಯವಸ್ಥೆ ರೂಪಿಸಲಾಗಿದ್ದು, ರಾತ್ರಿ ಪಾಳಿಯಲ್ಲಿ ಇಬ್ಬರು ಹಾಗೂ ಹಗಲು ಪಾಳಿಯಲ್ಲಿ ಇಬ್ಬರು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದುವರೆಗೆ ಸುಮಾರು 15 ಸಾವಿರ ರೋಗಿಗಳು ಈ ಸೌಲಭ್ಯ ಪಡೆದುಕೊಂಡಿದ್ದಾರೆ ಎಂದು ಅವರು ಹೇಳಿದರು. ವಿಕ್ಟೋರಿ ಯಾ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ಬರುವ ರೋಗಿಗಳ ಯೋಗಕ್ಷೇಮ ವಿಚಾರಿಸುವ ಕೆಲಸವೂ ನಡೆಯುತ್ತಿದೆ ಎಂದು ತಿಳಿಸಿದರು.

ಶಿಕ್ಷಣ ಕ್ಷೇತ್ರಕ್ಕೂ ಒತ್ತು

ಕ್ಷೇತ್ರದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ನೀಟ್ ಮತ್ತು ಜೆಇಇ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜು ಗೊಳಿಸಲು ತರಬೇತಿ ನೀಡಲಾಗುತ್ತಿದ್ದು, ಪ್ರತಿ ಗ್ರಾಮದಿಂದ ಇಬ್ಬರು ಅಥವಾ ಮೂವರು ವಿದ್ಯಾರ್ಥಿಗಳಿಗೆ ತರಬೇತಿ ದೊರೆಯುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ತಿಳಿಸಿದರು.

ಸರ್ಕಾರಿ ಶಾಲೆಗಳ ಶೈಕ್ಷಣಿಕ ಫಲಿತಾಂಶ ಸುಧಾರಿಸುವ ಉದ್ದೇಶದಿಂದ ಕಳೆದ ವರ್ಷ 93 ಪರೀಕ್ಷೆ ಗಳನ್ನು ತಮ್ಮ ಟ್ರಸ್ಟ್ ವತಿಯಿಂದ ನಡೆಸಲಾಗಿದೆ. ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಗುರುತಿಸಿ, ಪರೀಕ್ಷಾ ಸಿದ್ಧತೆ ಹಾಗೂ ಫಲಿತಾಂಶ ಸುಧಾರಣೆಗೆ ಅಗತ್ಯವಾದ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ಹೇಳಿದರು.

ಗ್ರಾಮೀಣ ಸಾರಿಗೆ ವ್ಯವಸ್ಥೆ

ಕ್ಷೇತ್ರದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಳೆದ ಮೂರು ವರ್ಷಗಳಲ್ಲಿ ಸುಮಾರು 40 ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ತೆರಳುವವರಿಗೆ ಸಾರಿಗೆ ಸಂಪರ್ಕ ಸುಧಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ಯುವಜನರೊಂದಿಗೆ ಸಂವಾದ

ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಯುವಕರೊಂದಿಗೆ ಸಂವಾದ ನಡೆಸಲಾಗುತ್ತಿದೆ. ಗ್ರಾಮದಲ್ಲಿ ಎಷ್ಟು ಮಂದಿ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ, ವಿದ್ಯಾರ್ಥಿಗಳ ಶೈಕ್ಷಣಿಕ ಪರಿಸ್ಥಿತಿ ಹೇಗಿದೆ ಹಾಗೂ ಭವಿಷ್ಯದ ಉದ್ಯೋಗಾವಕಾಶಗಳ ಬಗ್ಗೆ ಯುವಕರೊಂದಿಗೆ ಚರ್ಚಿಸಲಾಗುತ್ತಿದೆ. ಯುವಜನರ ಶಿಕ್ಷಣ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಅಗತ್ಯತೆಗಳನ್ನು ಗುರುತಿಸಿ ಮುಂದಿನ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಪ್ರದೀಪ್ ಈಶ್ವರ್ ಹೇಳಿದರು.

ಗ್ರಾಮವಾರು ಅಭಿವೃದ್ಧಿ ಮಾಹಿತಿ

ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲಿ ನಡೆಯುತ್ತಿರುವ ಕಾಮಗಾರಿಗಳು, ಮಂಜೂರಾಗಿರುವ ಅನುದಾನ, ಜನರ ಪ್ರಮುಖ ಸಮಸ್ಯೆಗಳು ಹಾಗೂ ಹಿಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ದೊರೆತ ಮತಗಳ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ. ಮುಂದಿನ ಅವಧಿಯಲ್ಲಿ ಯಾವ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬುದರ ಕುರಿತು ನೀಲನಕ್ಷೆ ರೂಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಕ್ಷೇತ್ರದ ಜನರು ಕೇಳುವ ‘ಏನು ಕೆಲಸ ಮಾಡಿದ್ದೀರಿ?’ ಎಂಬ ಪ್ರಶ್ನೆಗೆ ದಾಖಲೆಗಳ ಮೂಲಕ ಉತ್ತರ ನೀಡಲು ಸಿದ್ಧವಿದ್ದೇನೆ. ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಲಾಗಿದ್ದು, ಸಾರ್ವಜನಿಕರಿಗೆ ಮಾಹಿತಿ ನೀಡಲು ಸಿದ್ಧ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

“ಮುಂದಿನ ಜನ್ಮದಲ್ಲಿ ದಲಿತರ ಮನೆಯಲ್ಲಿ ಹುಟ್ಟುತ್ತೇನೆ”

ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಿಸುವಂತಹ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ. ಮುಂದಿನ ಜನ್ಮ ಎಂಬುದು ಇದ್ದರೆ ದಲಿತನಾಗಿ, ದಲಿತರ ಮನೆಯಲ್ಲಿಯೇ ಹುಟ್ಟುತ್ತೇನೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

“ಬೇರೆಯವರಿಗೆ ಮುಂದಿನ ಚುನಾವಣೆ ಮುಖ್ಯವಾಗಿರಬಹುದು; ನನಗೆ ಮುಂದಿನ ಪೀಳಿಗೆ ಮುಖ್ಯ. ಬಾಬಾಸಾಹೇಬ್ ಅಂಬೇಡ್ಕರ್ ಅವರೇ ನನ್ನ ದೇವರು ಹಾಗೂ ಸರ್ವಸ್ವ. ಅವರ ಆದರ್ಶಗಳನ್ನು ಪಾಲಿಸಿಕೊಂಡು ದಲಿತರು ಹಾಗೂ ಹಿಂದುಳಿದ ಸಮುದಾಯಗಳ ಪರವಾಗಿ ಹೋರಾಟ ಮಾಡುತ್ತಿದ್ದೇನೆ. ಮುಂದಿನ ಜನ್ಮದಲ್ಲೂ ದಲಿತನಾಗಿಯೇ ಹುಟ್ಟಿ ಅವರ ಪರ ಹೋರಾಡುತ್ತೇನೆ. ಶೋಷಣೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದು ನನ್ನ ನಿಲುವು ಹಾಗೂ ಸಂಕಲ್ಪ” ಎಂದು ಅವರು ಹೇಳಿದರು.