ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

SIR: ನ.5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ: ನೂರುಲ್ಲಾ

ಎಸ್‌ಐಆರ್ ಪ್ರಕ್ರಿಯೆ ಮೂಲಕ ದೇಶಾದ್ಯಂತ ಕೋಟ್ಯಂತರ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಕರ್ನಾಟಕದಲ್ಲಿಯೂ ಸುಮಾರು ಒಂದು ಕೋಟಿ ಮತದಾರರು ಮತದಾನದ ಹಕ್ಕು ಕಳೆದುಕೊಳ್ಳುವ ಆತಂಕ ಎದುರಾಗಿದೆ. ಇದು ಸಂವಿಧಾನ ನೀಡಿರುವ ಮತದಾನದ ಹಕ್ಕಿನ ಮೇಲೆ ಪರಿಣಾಮ ಬೀರುವ ಪ್ರಕ್ರಿಯೆಯಾಗಿದ್ದು, ಆರಂಭದಿಂದಲೂ ಇದರ ವಿರುದ್ಧ ಹೋರಾಟ ನಡೆಸಲಾಗುತ್ತಿದೆ

ಚಿಕ್ಕಬಳ್ಳಾಪುರ: ಕೇಂದ್ರ ಚುನಾವಣಾ ಆಯೋಗ(Election Commission) ಪ್ರಕಟಿಸಿರುವ ಎಸ್‌ಐಆರ್ (ವಿಶೇಷ ಸಮಗ್ರ ಪರಿಷ್ಕರಣೆ) ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸುವಂತೆ ಆಗ್ರಹಿಸಿ ನ.5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌(Freedom park)ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲಿದ್ದಾರೆ ಎಂದು ಮತ ಕಾವಲು ಸಮಿತಿಯ ಜಿಲ್ಲಾಧ್ಯಕ್ಷ ನೂರುಲ್ಲಾ ತಿಳಿಸಿದರು.

ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆ ಮೂಲಕ ದೇಶಾದ್ಯಂತ ಕೋಟ್ಯಂತರ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಕರ್ನಾಟಕದಲ್ಲಿಯೂ ಸುಮಾರು ಒಂದು ಕೋಟಿ ಮತದಾರರು ಮತದಾನದ ಹಕ್ಕು ಕಳೆದುಕೊಳ್ಳುವ ಆತಂಕ ಎದುರಾಗಿದೆ. ಇದು ಸಂವಿಧಾನ ನೀಡಿರುವ ಮತದಾನದ ಹಕ್ಕಿನ ಮೇಲೆ ಪರಿಣಾಮ ಬೀರುವ ಪ್ರಕ್ರಿಯೆಯಾಗಿದ್ದು, ಆರಂಭದಿಂದಲೂ ಇದರ ವಿರುದ್ಧ ಹೋರಾಟ ನಡೆಸಲಾಗುತ್ತಿದೆ ಎಂದರು.

ನ.1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್(Gyanesh Kumar) ರಾಜೀನಾಮೆಗೆ ಆಗ್ರಹಿಸಿದ್ದವು. ಇದರ ಮುಂದುವರಿದ ಭಾಗವಾಗಿ ನ.5ರಂದು ಬೆಂಗಳೂರಿನಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ಸೇರಿದಂತೆ ವಿವಿಧ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ನೀಡಲಿವೆ. ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: Gyanesh Kumar: ಜ್ಞಾನೇಶ್ ಕುಮಾರ್ ವಜಾಕ್ಕೆ ಕಾಂಗ್ರೆಸ್ ಆಗ್ರಹ, ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎಸ್‌ಐಆರ್ ಅಂತಿಮ ಪಟ್ಟಿಯ ಬದಲಿಗೆ 2025ರ ಮತದಾರರ ಪಟ್ಟಿಯ ಆಧಾರದಲ್ಲಿ ನಡೆಸಬೇಕು. ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಪಟ್ಟಿಯನ್ನು ತಿರಸ್ಕರಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡಬೇಕು ಎಂಬುದು ಒಕ್ಕೂಟದ ಪ್ರಮುಖ ಬೇಡಿಕೆಗಳಾಗಿವೆ ಎಂದು ತಿಳಿಸಿದರು.

ಒಕ್ಕೂಟದ ಮುಖಂಡ ಶ್ರೀರಂಗಾಚಾರಿ ಮಾತನಾಡಿ, ಮತದಾರರ ಪಟ್ಟಿಯಲ್ಲಿನ ಲೋಪಗಳ ಬಗ್ಗೆ ಪ್ರಶ್ನಿಸುವವರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಎಸ್‌ಐಆರ್‌ನಿಂದ ಯಾವುದೇ ಹಾನಿಯಾಗುವುದಿಲ್ಲ ಎಂದು ರಾಜ್ಯ ಸರ್ಕಾರದ ಸಚಿವರೇ ಹೇಳುತ್ತಿರುವುದು ಸರಿಯಲ್ಲ. ಮತದಾರರ ಹಕ್ಕುಗಳ ರಕ್ಷಣೆಗೆ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದರು.

ಎಸ್‌ಐಆರ್ ಘೋಷಣೆಗೂ ಮುನ್ನವೇ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುವಂತೆ ರಾಜ್ಯ ಸರ್ಕಾರವನ್ನು ತಮ್ಮ ಸಂಘಟನೆ ಒತ್ತಾಯಿಸಿತ್ತು. ಆದರೆ, ಅಗತ್ಯ ಮುನ್ನೆಚ್ಚರಿಕೆ ವಹಿಸದ ಕಾರಣ ಈಗ ಅಂತಿಮ ಪಟ್ಟಿಯ ಕುರಿತು ಆತಂಕ ಉಂಟಾಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಪಾತ್ರ ಸೀಮಿತವಾಗಿದ್ದು, ಹಲವು ನಿರ್ಧಾರಗಳಿಗೆ ಕೇಂದ್ರದ ಅನುಮತಿ ಅಗತ್ಯವಾಗಿದೆ. ಹೀಗಾಗಿ ಬಿಎಲ್‌ಒಗಳನ್ನು ಹೊಣೆ ಮಾಡುವುದರಿಂದ ಪ್ರಯೋಜನ ವಿಲ್ಲ. ರಾಜ್ಯ ಸರ್ಕಾರ ಮತದಾರರ ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಡಾ. ಮಹಮ್ಮದ್ ನೂರುಲ್ಲಾ, ಎದ್ದೇಳು ಕರ್ನಾಟಕದ ಶಮೀರ್, ಅಸ್ಗರ್ ಖಾನ್, ಜೀವಿಕ ನಾರಾಯಣಸ್ವಾಮಿ, ನಾರಾಯಣಪ್ಪ ಬಾಗೇಪಲ್ಲಿ, ಶ್ರೀನಿವಾಸ್ ಪಿ., ವೆಂಕಟೇಶ್ ಎಸ್. ಮತ್ತಿತರರು ಇದ್ದರು.