ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಭವನದ ಎದುರು ಒಳಮೀಸಲು ಜಾರಿಗೆ ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಭಾರಿ ಪ್ರತಿಭಟನೆ(Protest) ನಡೆಸಲಾಯಿತು.
ನಗರ ಹೊರವಲಯ ಜಿಲ್ಲಾಡಳಿತ ಭವನದ ಎದುರು ಬುಧವಾರ ಸುಪ್ರೀಂ ಕೋರ್ಟ್ ತೀರ್ಪಿನಂತೆ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವುದು ಹಾಗೂ ಉದ್ಯೋಗ ನೇಮಕಾತಿಗಳಲ್ಲೂ ಅದನ್ನು ಅಳವಡಿಸುವಂತೆ ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಭಾರಿ ಪ್ರತಿಭಟನೆ ನಡೆಸಿ ರಾಜ್ಯ ಸರಕಾರವನ್ನು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಡಿ.ವಿ. ನಾರಾಯಣಸ್ವಾಮಿ, ಚುನಾವಣೆ ಸಂದರ್ಭಗಳಲ್ಲಿ ಮನೆ ಬಾಗಿಲಿಗೆ ಬಂದು ಮತ ಕೇಳಿ ಅಧಿಕಾರಕ್ಕೆ ಬರುವ ಸರ್ಕಾರ, ಮೀಸಲಾತಿ ವಿಚಾರ ಬಂದಾಗ ಕಾಲ ಹರಣ ಮಾಡುತ್ತಿದೆ. ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೊಳಿಸುವ ವಿಚಾರದಲ್ಲಿ ಸರ್ಕಾರ ಮೀನಮೇಷ ಎಣಿಸುತ್ತಿದೆ ಎಂದು ದೂರಿದರು.
ಇದನ್ನೂ ಓದಿ: Anganwadi workers protest: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂಧಾನ ಯಶಸ್ವಿ; ಪ್ರತಿಭಟನೆ ಹಿಂಪಡೆದ ಅಂಗನವಾಡಿ ನೌಕರರು
ಕಳೆದ 35 ವರ್ಷಗಳಿಂದ ನಾವು ಹೋರಾಟ ನಡೆಸುತ್ತಿದ್ದರೂ ಸರ್ಕಾರಗಳು ಯಾವುದೇ ಸ್ಪಂದನೆ ತೋರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದೇವೆ. ಸರ್ಕಾರ ನೀಡಿರುವ ಭರವಸೆಯಂತೆ ಒಳ ಮೀಸಲಾತಿ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಹಾಗೂ ಬಂದ್‌ಗೆ ಮುಂದಾಗುತ್ತೇವೆ ಎಂದು ಎಚ್ಚರಿಸಿದರು. ಅಹಿಂದ ಎಂಬ ಹೆಸರಿನಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರಿಶಿಷ್ಟರ ಹಕ್ಕುಗಳ ಬಗ್ಗೆ ನಿಜವಾದ ಕಾಳಜಿ ಇಲ್ಲ.ನಮ್ಮನ್ನು ಕೇವಲ ಮತ ಬ್ಯಾಂಕ್‌ಗೆ ಬಳಸಿಕೊಳ್ಳಲಾಗುತ್ತಿದೆ. 27ರಂದು ಒಳ ಮೀಸಲಾತಿ ಕುರಿತು ತೀರ್ಮಾನ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಅನಿವಾರ್ಯವಾಗಲಿದೆ ಎಂದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಬಾಲಕುಂಟಹಳ್ಳಿ ಗಂಗಾದರಪ್ಪ ಮಾತನಾಡಿ, ಅಧಿಕಾರಕ್ಕೆ ಬರುವ ಮುನ್ನ ಒಳ ಮೀಸಲಾತಿ ಜಾರಿ ಮಾಡುವುದಾಗಿ ಭರವಸೆ ನೀಡಿದ್ದ ಸರ್ಕಾರ,ನಂತರ ಮೌನ ವಹಿಸಿದೆ. ಸುಪ್ರೀಂ ಕೋರ್ಟ್ ಆದೇಶ ಬಂದ ಬಳಿಕವೂ ರಾಜ್ಯ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳದೆ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ದರು. ಈ ತಿಂಗಳ 27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಖಚಿತವಾಗಿ ತೀರ್ಮಾನ ಕೈಗೊಳ್ಳಬೇಕು.ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಸಿದ್ಧರಾಗುತ್ತೇವೆ ಎಂದು ಹೇಳಿದರು.
ಮಾದಿಗ ದಂಡೋರ ಜಾಗೃತಿ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಪ್ಪ ಅವರು, 35 ವರ್ಷದ ಹೋರಾಟದ ಫಲವಾಗಿ ಒಳ ಮೀಸಲಾತಿ ವರ್ಗೀಕರಣದಲ್ಲಿ ಶೇ.6 ರಷ್ಟು ಪಾಲು ಮಾದಿಗರಿಗೆ ಸಿಕ್ಕಿದೆ. ಅದರಂತೆ ಮೀಸಲಾತಿ ನೀಡಬೇಕು. 27ರಂದು ನಡೆಯ ಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲೇ ಅಂತಿಮ ತೀರ್ಮಾನ ಮಾಡಿ ಜಾರಿಗೊಳಿಸ ಬೇಕು. ಇಲ್ಲವಾದರೆ ಶಾಸಕ-ಸಚಿವರ ಮನೆ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.
ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಮುದಾಯದ ಮುಖಂಡ ಕೃಷ್ಣಮೂರ್ತಿ ಮಾತನಾಡಿ, ಮೂರು ದಶಕಗಳಿಂದ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದೇವೆ. ಈ ಹಿಂದೆ ನೀಡಲಾದ ಆಶ್ವಾಸನೆಯಂತೆ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಬೇಕು 27ರಂದು ಕರೆದಿರುವ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಒಳ ಮೀಸಲಾತಿ ಕುರಿತು ಘೋಷಣೆ ಮಾಡಿದರೆ ಸ್ವಾಗತಿಸುತ್ತೇವೆ. ಇಲ್ಲವಾದರೆ ರಾಜ್ಯಾದ್ಯಂತ ಮಾದಿಗ ಸಂಘಟನೆಗಳ ವತಿಯಿಂದ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ್ರತಿಭಟನೆ ನಂತರ ಅಪರ ಜಿಲ್ಲಾಧಿಕಾರಿ ಭಾಸ್ಕರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕೊಡಗಲ್ ರಮೇಶ್, ಮುನಿಕೃಷ್ಣಪ್ಪ, ಕೂತ್ತನೂರು ಮುನಿಯಪ್ಪ, ಕೃಷ್ಣಪ್ಪ, ರಮನ ಅಕ್ಕೇಶ್, ರಾಮಾಂಜಿನಪ್ಪ, ಕಾಳಪ್ಪ, ದೇವದಾಸ, ಎಂ ಸುರೇಶ್, ಪೋಜಪ್ಪ, ಸತ್ಯನಾರಾಯಣ, ಸುರೇಶ್, ಹೆಚ್.ಶ್ರೀನಿವಾಸ್, ಎಪಿಎಸ್ ಆನಂದ್, ಅಣ್ಣಮ್ಮ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.