ಚಿಕ್ಕಬಳ್ಳಾಪುರ: ಜಿಲ್ಲೆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿರುವ 443 ಕೆರೆಗಳ ಒಟ್ಟು 1,575 ಎಕರೆ ಭೂಮಿ ಒತ್ತುವರಿಯಾಗಿದ್ದು, ಮನೆಗಳ ನಿರ್ಮಾಣವಾಗಿರುವ ಪ್ರದೇಶಗಳನ್ನು ಹೊರತು ಪಡಿಸಿ ಉಳಿದ ಒತ್ತುವರಿಯನ್ನು ತಕ್ಷಣ ತೆರವುಗೊಳಿಸಿ ಕೆರೆಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ(Eshwar B Khandre) ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ವೈ.ನವೀನ್ ಭಟ್ ಅವರಿಗೆ ಸೂಚನೆ ನೀಡಿದ್ದಾರೆ.
ಗೌರಿಬಿದನೂರಿಗೆ ತೆರಳುವ ಮಾರ್ಗದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಡಿಯಿಂದ ಗೌರಿಬಿದನೂರುವರೆಗೆ ಜಿಲ್ಲಾ ಪಂಚಾಯಿತಿ ಸಿಇಒ ಅವರೊಂದಿಗೆ ಕಾರಿನಲ್ಲೇ ಸಭೆ ನಡೆಸಿದ ಸಚಿವರು, ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಸ್ವಾಧೀನದಲ್ಲಿರುವ ಹಾಗೂ ನಿರ್ವಹಣೆಯಲ್ಲಿರುವ ಕೆರೆಗಳ ಸ್ಥಿತಿಗತಿ ಕುರಿತು ಮಾಹಿತಿ ಪಡೆದು ಹಲವು ನಿರ್ದೇಶನಗಳನ್ನು ನೀಡಿದರು.
ಇದನ್ನೂ ಓದಿ: Eshwar Khandre: ಚಿಂತಾಮಣಿ, ಶಿಡ್ಲಘಟ್ಟದಲ್ಲಿ ಸಮಸ್ಯೆ ಹೆಚ್ಚು; ಖಾಸಗಿ ಕೊಳವೆಬಾವಿ, ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ
ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಒಟ್ಟು 1,332 ಕೆರೆಗಳಿದ್ದು, ಈ ಪೈಕಿ 742 ಕೆರೆಗಳ 2,817 ಎಕರೆ ಪ್ರದೇಶ ಒತ್ತುವರಿಯಾಗಿತ್ತು. ಈವರೆಗೆ 299 ಕೆರೆಗಳ 1,242 ಎಕರೆ ಒತ್ತುವರಿ ತೆರವು ಗೊಳಿಸಲಾಗಿದೆ. ಉಳಿದ ಒತ್ತುವರಿಯನ್ನು ತೆರವುಗೊಳಿಸಿ ಕೆರೆಗಳ ಸಂರಕ್ಷಣೆ ಮಾಡಬೇಕು. ರಾಜ ಕಾಲುವೆಗಳಲ್ಲಿನ ಅಡೆತಡೆಗಳನ್ನು ನಿವಾರಿಸಿ ಮಳೆ ನೀರು ಕೆರೆಗಳಿಗೆ ಹರಿಯುವಂತೆ ಕ್ರಮ ಕೈಗೊಳ್ಳಬೇಕು. ಇದರಿಂದ ಅಂತರ್ಜಲ ಮಟ್ಟ ಹೆಚ್ಚಿಸಲು ಸಾಧ್ಯವಾಗಲಿದೆ. ಸರ್ಕಾರಿ ಜಮೀನು ಭೂಗಳ್ಳರ ಪಾಲಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದರು.
ಇ-ಸ್ವತ್ತು ವಿತರಣೆಯಲ್ಲಿ ವಿಳಂಬ ಬೇಡ: ರಾಜ್ಯೋತ್ಸವದ ಕೊಡುಗೆಯಾಗಿ ಗ್ರಾಮಠಾಣಾ ಆಸ್ತಿಗಳಿಗೆ ಇ-ಸ್ವತ್ತು ನೀಡಲು ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ನವೆಂಬರ್ 2ರಿಂದ ಅರ್ಜಿ ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದೆ. ಈವರೆಗೆ ಸ್ವೀಕೃತವಾಗಿರುವ ಅರ್ಜಿಗಳ ಮಾಹಿತಿ ಪಡೆದ ಸಚಿವರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪಿಡಿಒಗಳ ಸಭೆ ನಡೆಸಿ ಎಲ್ಲ ಅರ್ಹ ಆಸ್ತಿಗಳಿಗೆ ವಿಳಂಬವಿಲ್ಲದೆ ಇ-ಸ್ವತ್ತು ವಿತರಿಸಬೇಕು ಎಂದು ಸೂಚಿಸಿದರು.
ಅರ್ಜಿಗಳು ಬಂದ ತಕ್ಷಣ ಪಿಡಿಒ ಅಥವಾ ಪಂಚಾಯಿತಿ ಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ, ನಿಯಮಾನುಸಾರ ತ್ವರಿತವಾಗಿ ಇ-ಸ್ವತ್ತು ವಿತರಿಸುವಂತೆ ನಿರ್ದೇಶನ ನೀಡಿದರು.
50 ಗ್ರಾಮಗಳಲ್ಲಿ ಸುಸಜ್ಜಿತ ಬಸ್ ತಂಗುದಾಣ: ವಿಬಿಜಿ ರಾಮ್ ಜಿ ಯೋಜನೆಯಡಿ ರಾಜ್ಯದಲ್ಲಿ 1,000 ಬಸ್ ತಂಗುದಾಣಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಯಾಣಿಕರ ಓಡಾಟ ಹೆಚ್ಚಿರುವ 50 ಗ್ರಾಮಗಳನ್ನು ಗುರುತಿಸಿ ಸುಸಜ್ಜಿತ ಬಸ್ ತಂಗುದಾಣ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಮಹಿಳೆಯರಿಗೆ ಸ್ವಯಂ ಉದ್ಯೋಗ ಮತ್ತು ಜೀವನೋಪಾಯ ಕಲ್ಪಿಸುವ ಅಕ್ಕ ಕೆಫೆಗಳ ಮಹತ್ವ ವಿವರಿಸಿದ ಸಚಿವರು, ಜಿಲ್ಲೆಯಲ್ಲಿ ಹೊಸ ಅಕ್ಕ ಕೆಫೆ ಆರಂಭಿಸುವುದರ ಜತೆಗೆ ವಿಬಿಜಿ ರಾಮ್ ಜಿ ಯೋಜನೆ(VBG Ram Ji Project)ಯಡಿ ಸ್ತ್ರೀ ಮಾರ್ಟ್ಗಳನ್ನು ನಿರ್ಮಿಸಲು ಕ್ರಮ ವಹಿಸುವಂತೆ ಸೂಚಿಸಿದರು.
15 ದಿನಗಳಲ್ಲಿ ಕೂಲಿ ಪಾವತಿಗೆ ಸೂಚನೆ: ವಿಬಿಜಿ ರಾಮ್ ಜಿ ಯೋಜನೆಯಡಿ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಗ್ರಾಮಸಭೆಗಳನ್ನು ನಡೆಸಬೇಕು. ಅರ್ಹ ಫಲಾನುಭವಿಗಳಿಗೆ ಕುರಿ ಮತ್ತು ಮೇಕೆ ಕೊಟ್ಟಿಗೆ, ಹಂದಿ ಗೂಡು, ಕೊಳವೆಬಾವಿ ಮರುಪೂರಣ ಗುಂಡಿ ಹಾಗೂ ಕೃಷಿ ಹೊಂಡಗಳನ್ನು ಮಂಜೂರು ಮಾಡಬೇಕು. ಕಾರ್ಮಿಕರಿಗೆ 15 ದಿನಗಳೊಳಗೆ ಕೂಲಿ ಪಾವತಿಯಾಗುವಂತೆ ಕ್ರಮ ವಹಿಸಬೇಕು ಎಂದರು.
ಸಿಇಒ, ಉಪ ಕಾರ್ಯದರ್ಶಿ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಗ್ರಾಮ ಪಂಚಾಯಿತಿಗಳಿಗೆ ಹಠಾತ್ ಭೇಟಿ ನೀಡಿ ರಸ್ತೆ, ಕುಡಿಯುವ ನೀರು, ಬೀದಿ ದೀಪ, ಇ-ಸ್ವತ್ತು, ನಕ್ಷೆ ಮಂಜೂರಾತಿ, ನೈರ್ಮಲ್ಯ, ಕೆರೆ ಅಭಿವೃದ್ಧಿ ಹಾಗೂ ವಿಬಿಜಿ ರಾಮ್ ಜಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಬೇಕು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ಪ್ರಯತ್ನಿಸಬೇಕು ಎಂದು ಸೂಚಿಸಿದರು.
ಬೇಸಿಗೆಯ ನೀರಿನ ಸಮಸ್ಯೆ ಎದುರಿಸಲು ಜಲ ಬಜೆಟಿಂಗ್: ಚಿಕ್ಕಬಳ್ಳಾಪುರ ಜಿಲ್ಲೆ ಮೊದಲಿ ನಿಂದಲೂ ಬರಪೀಡಿತ ಪ್ರದೇಶವಾಗಿದ್ದು, ಈ ಬಾರಿ ಎಲ್ ನಿನೊ ಪ್ರಭಾವದಿಂದ ಮಳೆಯ ಕೊರತೆ ಯಾಗಿದೆ. ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಜಲ ಬಜೆಟಿಂಗ್ ಕೈಗೊಳ್ಳಬೇಕು. ಯಾವ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗಬಹುದು ಎಂಬುದನ್ನು ಮುಂಚಿತವಾಗಿ ಗುರುತಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳ ಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಜಲ ಜೀವನ ಮಿಷನ್ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಅವರು, ಜಿಲ್ಲೆಯಲ್ಲಿ ಒಟ್ಟು 1,640 ಕಾಮಗಾರಿಗಳು ನಡೆಯುತ್ತಿದ್ದು, ಈವರೆಗೆ ಶೇ.68ರಷ್ಟು ಮಾತ್ರ ಪೂರ್ಣಗೊಂಡಿವೆ. ಬಾಕಿ ಕಾಮಗಾರಿ ಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಪ್ರತಿ ಮನೆಗೂ ಕುಡಿಯುವ ನೀರು ತಲುಪುವುದನ್ನು ಖಚಿತ ಪಡಿಸಿಕೊಳ್ಳಬೇಕು ಎಂದರು.
ಅಧಿಕಾರಿಗಳು ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ನಿರೀಕ್ಷಿತ ವೇಗದಲ್ಲಿ ಕಾಮಗಾರಿ ನಡೆಸದ ಗುತ್ತಿಗೆದಾರರಿಗೆ ಅಂತಿಮ ನೋಟಿಸ್ ನೀಡಿ, ಅಗತ್ಯವಿದ್ದಲ್ಲಿ ಹೊಸದಾಗಿ ಟೆಂಡರ್ ಕರೆದು ಮಾರ್ಚ್ ಅಂತ್ಯದೊಳಗೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಇದೇ ವೇಳೆ ಜೀವನೋಪಾಯ ಅಭಿಯಾನದಡಿ ಜಿಲ್ಲೆಯಲ್ಲಿ ಸಾಧಿಸಿರುವ ಪ್ರಗತಿಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.