ಶಿಡ್ಲಘಟ್ಟ: ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿ ಮೂರು ತಿಂಗಳ ಗರ್ಭಿಣಿ ಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಬಾಲಕಿಯ ಮೇಲೆ ಕಳೆದ ಒಂದು ವರ್ಷದಿಂದ ಚಂದ್ರು ಎಂಬಾತ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪೋಕ್ಸೋ ಕಾಯ್ದೆ(POCSO Act)ಯಡಿ ಪ್ರಕರಣ ದಾಖಲಾಗಿದೆ.
ಪೋಷಕರು ಕುರಿ ಮೇಯಿಸಲು ತೆರಳುತ್ತಿದ್ದ ವೇಳೆ ಬಾಲಕಿ ಒಬ್ಬಳೇ ಇರುವ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಆರೋಪಿ, ಹಲವು ಬಾರಿ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ: POCSO: ಬಾಲ ಕಾರ್ಮಿಕತೆ, ಪೋಕ್ಸೋ ಪ್ರಕರಣ ತಡೆಗೆ ತಂಡದ ರೀತಿ ಕೆಲಸ ಮಾಡಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುಳ ಸಲಹೆ
ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ ಬಾಲಕಿ ಈ ವಿಷಯವನ್ನು ಕುಟುಂಬದವರಿಗೆ ತಿಳಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಮೂರು ತಿಂಗಳಿಂದ ಮುಟ್ಟು ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡ ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯಕೀಯ ಪರೀಕ್ಷೆಯಲ್ಲಿ ಆಕೆ ಮೂರು ತಿಂಗಳ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.
ದಿಬ್ಬೂರಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಸದ್ಯ ನೊಂದ ಬಾಲಕಿಯನ್ನು ಜಿಲ್ಲಾ ಬಾಲಕಿಯರ ಬಾಲಮಂದಿರದ ಆಶ್ರಯಕ್ಕೆ ಒಪ್ಪಿಸಲಾಗಿದೆ.