ಚಿಕ್ಕಬಳ್ಳಾಪುರ: ಪ್ರಜಾಪ್ರಭುತ್ವ ವ್ಯವಸ್ಥೆಯ ಆಶಯಗಳು, ಸಂಸದೀಯ ಕಲಾಪಗಳ ಕಾರ್ಯ ವೈಖರಿ ಹಾಗೂ ಕಾನೂನು ರಚನೆಯ ಪ್ರಕ್ರಿಯೆಯನ್ನು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಪರಿಚಯಿಸುವುದರ ಜೊತೆಗೆ ಅವರಲ್ಲಿ ನಾಯಕತ್ವ, ವಾಕ್ಚಾತುರ್ಯ, ಜವಾಬ್ದಾರಿ ಮತ್ತು ಸಂಸದೀಯ ಮೌಲ್ಯಗಳನ್ನು ಬೆಳೆಸಲು ಅಣಕು ಯುವ ಸಂಸತ್ ಪರಿಣಾಮಕಾರಿ ವೇದಿಕೆಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಪಂಚಾಯಿತಿಯ ಸರ್.ಎಂ. ವಿಶ್ವೇಶ್ವರಯ್ಯ ಸಭಾಂಗಣ ದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವ ಸಂಸತ್ ಅಧಿವೇಶನದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಇಂದಿನ ಯುವಜನತೆಯೇ ನಾಳಿನ ದೇಶದ ಶಿಲ್ಪಿಗಳು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿ ಗಳ ಜವಾಬ್ದಾರಿ, ಸಂಸತ್ತಿನ ಕಲಾಪಗಳು, ಕಾನೂನುಗಳ ರಚನೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಯುವ ವಿಧಾನವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಇಂತಹ ಅಣಕು ಸಂಸತ್ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಭವಿಷ್ಯದಲ್ಲಿ ಜವಾಬ್ದಾರಿಯುತ ನಾಗರಿಕ ರಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾಧಿಕಾರಿ ಜಿ. ಪ್ರಭು ಮಾತನಾಡಿ, ವಿದ್ಯಾರ್ಥಿಗಳು ಪಠ್ಯಪುಸ್ತಕದ ಶಿಕ್ಷಣಕ್ಕೆ ಮಾತ್ರ ಸೀಮಿತ ವಾಗದೆ ದೇಶದ ಆಡಳಿತ ವ್ಯವಸ್ಥೆ, ಸಾಮಾಜಿಕ ಸಮಸ್ಯೆಗಳು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ತಿಳಿದುಕೊಳ್ಳಬೇಕು. ಸಾರ್ವಜನಿಕ ವೇದಿಕೆಯಲ್ಲಿ ಆತ್ಮವಿಶ್ವಾಸದಿಂದ ವಿಷಯ ಮಂಡಿಸು ವುದು, ನಾಯಕತ್ವ ಗುಣ ಮತ್ತು ವಿಮರ್ಶಾತ್ಮಕ ಚಿಂತನೆ ಬೆಳೆಸಿಕೊಳ್ಳಲು ಯುವ ಸಂಸತ್ ಸಹಕಾರಿಯಾಗಿದೆ.
ತಾಲ್ಲೂಕು ಮಟ್ಟದಲ್ಲಿ ನಡೆದ ಯುವ ಸಂಸತ್ ಅಧಿವೇಶನಗಳಲ್ಲಿ ಉತ್ತಮವಾಗಿ ವಿಷಯ ಮಂಡಿಸಿದ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗಿದೆ. ಇಲ್ಲಿ ಅತ್ಯುತ್ತಮವಾಗಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಯುವ ಸಂಸತ್‌ನಲ್ಲಿ ಅವಕಾಶ ಕಲ್ಪಿಸಲಾಗು ವುದು. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ ಈ ಕಾರ್ಯ ಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಗೆ ಬ್ಯಾಂಕಿಂಗ್ ಸೇರಿದಂತೆ ವಿವಿಧ ಆಡಳಿತ ಸಂಸ್ಥೆಗಳಿಗೆ ಭೇಟಿ ನೀಡಿ ಕಾರ್ಯವೈಖರಿ ತಿಳಿದುಕೊಳ್ಳುವ ಮೂಲಕ ಅನುಭವಾತ್ಮಕ ಜ್ಞಾನ ಬೆಳೆಸಿಕೊಳ್ಳಬೇಕು. ಪುಸ್ತಕದ ಜ್ಞಾನದೊಂದಿಗೆ ಸಾಮಾಜಿಕ ವ್ಯವಸ್ಥೆಯ ಅರಿವು ಹೊಂದಿದಾಗ ಸಮಗ್ರ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್ ಮಾತನಾಡಿ, ಅಣಕು ಸಂಸತ್‌ನಲ್ಲಿ ಸ್ಪೀಕರ್, ಮುಖ್ಯಮಂತ್ರಿ, ಸಚಿವರು ಹಾಗೂ ವಿರೋಧ ಪಕ್ಷದ ನಾಯಕರ ಪಾತ್ರ ನಿರ್ವಹಿಸಿದ ವಿದ್ಯಾರ್ಥಿಗಳು ಸಾರ್ವಜನಿಕ ಹಿತಾಸಕ್ತಿಯ ಹಲವು ವಿಷಯಗಳನ್ನು ಚರ್ಚಿ ಸುವ ಮೂಲಕ ನೈಜ ಸಂಸದೀಯ ಕಲಾಪದ ವಾತಾವರಣವನ್ನು ಸೃಷ್ಟಿಸಿದ್ದಾರೆ. ಇಂದು ನಿರ್ವಹಿಸಿದ ಸಾಂವಿಧಾನಿಕ ಹುದ್ದೆಗಳನ್ನು ಮುಂದಿನ 20 ವರ್ಷಗಳಲ್ಲಿ ನೈಜವಾಗಿ ಅಲಂಕರಿಸುವ ಗುರಿಯೊಂದಿಗೆ ವಿದ್ಯಾರ್ಥಿಗಳು ಶ್ರಮಿಸಬೇಕು. ಉತ್ತಮ ಶಿಕ್ಷಣ ಮತ್ತು ಪರಿಶ್ರಮದ ಮೂಲಕ ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಎಂದು ಹಾರೈಸಿದರು.
ಯುವ ಸಂಸತ್‌ನಲ್ಲಿ ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎತ್ತಿನಹೊಳೆ ಯೋಜನೆ, ಎಚ್.ಎನ್. ವ್ಯಾಲಿ, ಕೆ.ಸಿ. ವ್ಯಾಲಿ ಯೋಜನೆಗಳ ಮೂರನೇ ಹಂತದ ಶುದ್ಧೀಕರಣ, ನೀರಾವರಿ ಯೋಜನೆಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಹಾಲಿನ ದರ ಹೆಚ್ಚಳ ಸೇರಿದಂತೆ ಜಿಲ್ಲೆಯ ಮತ್ತು ರಾಜ್ಯದ ಜನರು ಎದುರಿಸುತ್ತಿರುವ ಹಲವು ಜ್ವಲಂತ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಸಂಸತ್ತಿನ ಕಲಾಪದ ಮಾದರಿಯಲ್ಲಿ ಪ್ರಸ್ತಾಪಿಸಿ ಚರ್ಚಿಸಿದರು.
ಕಾರ್ಯಕ್ರಮದಲ್ಲಿ ಮಕ್ಕಳ ಸಹಾಯವಾಣಿ ಕುರಿತ ಬಿತ್ತಿಪತ್ರ ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ, ಪದವಿಪೂರ್ವ ಶಿಕ್ಷಣ ಇಲಾಖೆ ಯ ಉಪನಿರ್ದೇಶಕ ಪಂಡರಿನಾಥ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿ. ರಮೇಶ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಕರು, ಉಪನ್ಯಾಸಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.