ಚಿಕ್ಕಬಳ್ಳಾಪುರ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ತನಿಖಾ ಸಂಸ್ಥೆ ಗಳನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟಿಸಿದ ಕಾಂಗ್ರೆಸ್ಸಿಗರು, ಬಿಜೆಪಿಯು ದ್ವೇಷ ರಾಜಕಾರಣ ಮಾಡುವುದನ್ನು ಬಿಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸುವುದಾಗಿ ಎಚ್ಚರಿಸಿದರು.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೇಶವರೆಡ್ಡಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಮೊದಲಾದ ತನಿಖಾಸಂಸ್ಥೆಗಳನ್ನು ದುರುಪಯೋಗಪಡಿಸಿ ಕೊಂಡು ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ನೀಡುತ್ತಿದೆ ಎಂಬುದಕ್ಕೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯದ ಸುಳ್ಳು ಆರೋಪ ಪಟ್ಟಿ ಯನ್ನು ನ್ಯಾಯಾಲಯ ತಿರಸ್ಕರಿಸಿರುವುದೇ ಸಾಕ್ಷಿಯಾಗಿದೆ ಎಂದು ಕಿಡಿಕಾರಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಯಾವುದೇ ಅಕ್ರಮ ನಡೆದಿಲ್ಲದಿದ್ದರೂ ಭ್ರಷ್ಟಾಚಾರ, ಹಣ ಕಾಸು ಅಕ್ರಮ ವರ್ಗಾವಣೆ ಸೇರಿದಂತೆ ವಿವಿಧ ಆರೋಪಗಳನ್ನು ಹೊರಿಸಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಪದೇ ಪದೇ ವಿಚಾರಣೆಗೆ ಹಾಜರಾಗುವಂತೆ ಮಾಡಿದ್ದರು. ಬಿಜೆಪಿ ತನ್ನ ದ್ವೇಷ ರಾಜಕಾರಣವನ್ನು ಕೈಬಿಟ್ಟು ದೇಶವನ್ನು ಕಾಡುತ್ತಿರುವ ನಿರುದ್ಯೋಗದ ಸಮಸ್ಯೆ ಸೇರಿ ಇನ್ನಿತರೆ ಜ್ವಲಂತ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಪಕ್ಷವು ಜನರಿಗೆ ಕೇವಲ ಸುಳ್ಳು ಭರವಸೆಗಳನ್ನು ನೀಡುವ ಪಕ್ಷವಾಗಿದೆ. ಆದರೆ ಕಾಂಗ್ರೆಸ್ ಪಕ್ಷ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹಾನ್ ನಾಯಕರನ್ನು ನೀಡಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ದೇಶದ ಏಕತೆ ಮತ್ತು ಅಖಂಡತೆಗೆ ತಮ್ಮ ಪ್ರಾಣವನ್ನೇ ಅರ್ಪಿಸಿದ ಮಹಾನಿಯರು ಬಿಜೆಪಿ ಪಕ್ಷವು ಚುನಾವಣಾ ಸಮಯದಲ್ಲಿ ಸುಳ್ಳು ಭರವಸೆಗಳನ್ನು ನೀಡುವು ದನ್ನು ರೂಢಿಯಾಗಿಸಿಕೊಂಡಿದೆ.
ಪ್ರತಿಭಟನೆಯಲ್ಲಿ ಮುಖಂಡರಾದ ಯಲುವಹಳ್ಳಿ ಎನ್.ರಮೇಶ್, ಲಾಯರ್ ನಾರಾಯಣಸ್ವಾಮಿ, ಪಟ್ರೇನಹಳ್ಳಿ ಕೃಷ್ಣ, ಅಡ್ಡಗಲ್ ಶ್ರೀಧರ್, ನಾಯನಹಳ್ಳಿ ನಾರಾಯಣಸ್ವಾಮಿ, ಕೆ.ಎಂ.ಮುನೆಗೌಡ, ನಾಗಭೂಷಣ್, ರಕ್ಷಿತ್ ರೆಡ್ಡಿ, ನಾಗೇಶ್ ರೆಡ್ಡಿ, ಕುಬೇರ್ ಅಚ್ಚು, ಸುಧಾ ವೆಂಕಟೇಶ್, ಅಜಾಂ, ಹಮೀಮ್, ಬಾಬಾ ಜಾನ್, ಡಾನ್ಸ್ ಶ್ರೀನಿವಾಸ್, ಕೃಷ್ಣಪ್ಪ, ಅಂಗರೇಖನಹಳ್ಳಿ ರವಿ ಇದ್ದರು.
*
ಜನರಿಗಾಗಿ ಕೆಲಸ ಮಾಡುವ ನಾಯಕರ ವಿರುದ್ಧ ಬಿಜೆಪಿ ಅಪಪ್ರಚಾರ ನಡೆಸುತ್ತಿದೆ.ನ್ಯಾಷನಲ್ ಹೆರಾಲ್ಡ್ ಪ್ರಕರಣದ ಹೆಸರಿನಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಸಿಲುಕಿಸಿ ಕಿರುಕುಳ ನೀಡಲಾಗುತ್ತಿದೆ.ಈಡಿ ಸಲ್ಲಿಸಿದ್ದ ಆರೋಪಪಟ್ಟಿಯನ್ನು ನ್ಯಾಯಾಲಯ ತಿರಸ್ಕರಿಸಿರುವುದು ಬಿಜೆಪಿಗೆ ತಕ್ಕ ಉತ್ತರವಾಗಿದೆ ಸುಳ್ಳು ಪ್ರಕರಣಗಳಿಗೆ ಆಯುಷ್ಯ ಇಲ್ಲ ಎಂಬು ದಕ್ಕೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬAಧಿಸಿದ ನ್ಯಾಯಾಲಯದ ಆದೇಶವೇ ಸಾಕ್ಷಿ
-ಯಲುವಳ್ಳಿ ಎನ್ ರಮೇಶ್- ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು.