0-5 ವರ್ಷದ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಿ: ಜಿಲ್ಲಾಧಿಕಾರಿ ಜಿ. ಪ್ರಭು ಮನವಿ
ಚಿಕ್ಕಬಳ್ಳಾಪುರ: ಪೋಲಿಯೋ ಎಂಬುದು ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯ ಉಂಟುಮಾಡುವ ಗಂಭೀರ ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ತಡೆಗಟ್ಟುವ ಅತ್ಯಂತ ಪರಿಣಾಮಕಾರಿ ಮಾರ್ಗ ಪೋಲಿಯೋ ಲಸಿಕೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.
ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ(National Pulse Polio Campaign) ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯಾದ್ಯಂತ ಆರಂಭವಾದ ಅಭಿಯಾನಕ್ಕೆ ನಗರದ ವಾಪಸಂದ್ರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಪೋಲಿಯೋ ನಿರ್ಮೂಲನೆಗೆ ಸರ್ಕಾರ ನಿರಂತರವಾಗಿ ಕೈಗೊಳ್ಳುತ್ತಿರುವ ಲಸಿಕಾ ಅಭಿಯಾನದಲ್ಲಿ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಾಗಿದೆ. ಜಿಲ್ಲೆಯ ಯಾವುದೇ ಮಗು ಲಸಿಕೆಯಿಂದ ವಂಚಿತ ವಾಗದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆ ಯರು ಹಾಗೂ ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಭಾರತ ಸರ್ಕಾರವು ಜೂ.28ರಂದು ರಾಷ್ಟ್ರೀಯ ಲಸಿಕಾ ದಿನ (ಪೋಲಿಯೋ ಭಾನುವಾರ)ವನ್ನು ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ 0 ರಿಂದ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಬೂತ್‌ಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಎರಡು ಹನಿ ಲಸಿಕೆ ನೀಡಲಾಗುತ್ತಿದೆ.
ಈ ವರ್ಷದ ಅಭಿಯಾನಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 647 ಪೋಲಿಯೋ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, 2,668 ವ್ಯಾಕ್ಸಿನೇಟರ್‌ಗಳು ಸೇವೆಯಲ್ಲಿ ತೊಡಗಿದ್ದಾರೆ. ಸುಮಾರು 1,23,545 ಮಕ್ಕಳಿಗೆ ಪೋಲಿಯೋ ಹನಿ ನೀಡುವ ಗುರಿ ಹೊಂದಲಾಗಿದೆ. ಕಾರ್ಯಕ್ರಮದ ಸುಸೂತ್ರ ಅನುಷ್ಠಾನ ಹಾಗೂ ಮೇಲ್ವಿಚಾರಣೆಗಾಗಿ 141 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಪೋಷಕರು ಅನಿವಾರ್ಯ ಕಾರಣಗಳಿಂದ ಬೂತ್‌ಗೆ ಮಕ್ಕಳನ್ನು ಕರೆ ತರಲು ಸಾಧ್ಯವಾಗದಿದ್ದರೆ, ಬೂತ್ ದಿನದ ನಂತರ ಗ್ರಾಮೀಣ ಪ್ರದೇಶಗಳಲ್ಲಿ ಎರಡು ದಿನ ಹಾಗೂ ನಗರ ಪ್ರದೇಶಗಳಲ್ಲಿ ಮೂರು ದಿನ ಮನೆ-ಮನೆಗೆ ತೆರಳಿ ಮಕ್ಕಳಿಗೆ ಪೋಲಿಯೋ ಹನಿ ನೀಡುವ ವ್ಯವಸ್ಥೆ ಮಾಡಲಾಗಿದೆ. ಜೂ.29ರಿಂದ ಜುಲೈ 1ರವರೆಗೆ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ಜಿಲ್ಲೆಯ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರಯಾಣದಲ್ಲಿರುವ ಅಥವಾ ಸ್ಥಳಾಂತರಗೊಳ್ಳುವ ಕುಟುಂಬಗಳ ಮಕ್ಕಳನ್ನು ಗಮನ ದಲ್ಲಿಟ್ಟುಕೊಂಡು ಜಿಲ್ಲೆಯ ಪ್ರಮುಖ ಬಸ್ ನಿಲ್ದಾಣಗಳು ರೈಲ್ವೆ ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ 36 ಟ್ರಾನ್ಸಿಟ್ ಬೂತ್‌ಗಳನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳ ಮೂಲಕ ಸಂಚರಿ ಸುವ 0 ರಿಂದ 5 ವರ್ಷದ ಎಲ್ಲ ಮಕ್ಕಳಿಗೂ ಪೋಲಿಯೋ ಹನಿ ನೀಡಲಾಗುವುದು ಎಂದು ತಿಳಿಸಿದರು.
ಮಧ್ಯಪ್ರಾಚ್ಯದಲ್ಲಿ, ವಿಶೇಷವಾಗಿ ಇರಾನ್ ಸೇರಿದಂತೆ ಕೆಲವು ದೇಶಗಳಲ್ಲಿನ ಯುದ್ಧ ಸಂಘರ್ಷ ಮತ್ತು ಪಕ್ಕದ ರಾಷ್ಟ್ರಗಳಲ್ಲಿ ಇನ್ನೂ ಪೋಲಿಯೋ ವೈರಸ್ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ, ಭಾರತ ಮುನ್ನೆಚ್ಚರಿಕಾ ಕ್ರಮವಾಗಿ ದೇಶವ್ಯಾಪಿ ವಿಶೇಷ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ನಡೆಸುತ್ತಿದೆ. ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಲ್ಲ ಮಕ್ಕಳಿಗೂ ಉಚಿತವಾಗಿ ಎರಡು ಹನಿ ಪೋಲಿಯೋ ಲಸಿಕೆ ನೀಡಲಾಗುತ್ತಿದೆ. ಭಾರತ 2014ರಿಂದ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದರೂ, ವಿದೇಶಗಳಿಂದ ವೈರಸ್ ಪ್ರವೇಶಿಸುವ ಸಾಧ್ಯತೆಯನ್ನು ತಡೆಯಲು ಈ ಅಭಿಯಾನ ಮುಂದು ವರಿಸಲಾಗಿದೆ. ಜಿಲ್ಲೆಯ ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸ ಬೇಕು ಎಂದು ಕೋರಿದರು.
ಈ ಹಿಂದೆ ಮಕ್ಕಳಿಗೆ ಪೋಲಿಯೋ ಹನಿ ಎಷ್ಟೇ ಬಾರಿ ನೀಡಿದ್ದರೂ, ಪ್ರತಿಯೊಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಸುತ್ತಿನಲ್ಲೂ ಮತ್ತೆ ಎರಡು ಹನಿ ನೀಡುವುದು ಅತ್ಯಗತ್ಯ. ಇದರಿಂದ ಮಕ್ಕಳ ರೋಗನಿರೋಧಕ ಶಕ್ತಿ ಮತ್ತಷ್ಟು ಬಲಗೊಳ್ಳುತ್ತದೆ. ಆದ್ದರಿಂದ ಯಾವುದೇ ಮಗು ಈ ಅವಕಾಶ ದಿಂದ ವಂಚಿತವಾಗಬಾರದು ಎಂದು ಜಿಲ್ಲಾಧಿಕಾರಿಗಳು ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ಮಾತನಾಡಿ,
"ಪ್ರತಿ ಬಾರಿ ಎರಡು ಹನಿಗಳು – ಪೋಲಿಯೋ ವಿರುದ್ಧ ನಿರಂತರ ಗೆಲುವು" ಹಾಗೂ "ಪೋಲಿಯೋ ಕೊನೆಗಾಣಿಸಿ – ಪೋಲಿಯೋ ರಹಿತ ವಿಶ್ವದ ಕನಸು ನನಸಾಗಲಿ" ಎಂಬ ಘೋಷವಾಕ್ಯಗಳೊಂದಿಗೆ ನಡೆಯುತ್ತಿರುವ ಈ ಅಭಿಯಾನವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಸಾರ್ವಜನಿಕರು ಸಹಕರಿಸ ಬೇಕು. ತಮ್ಮ ಸಮೀಪದ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸಿ ಸಮೀಪದ ಪೋಲಿಯೋ ಬೂತ್‌ಗಳ ಮಾಹಿತಿ ಪಡೆದು, ತಮ್ಮ 0-5 ವರ್ಷದ ಜಿಲ್ಲೆಯ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕುಮಾರ್, ತಹಸೀಲ್ದಾರ್ ರಶ್ಮಿ, ತಾಲೂಕು ಅರೋಗ್ಯಧಿಕಾರಿ ಮಂಜುಳ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯ ಕರ್ತೆಯರು ಉಪಸ್ಥಿತರಿದ್ದರು.