ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

B.Y. Vijayendra: ಬಿಜೆಪಿ ಅಧಿಕಾರಕ್ಕೆ ಬಂದರೆ ಬಾಗೇಪಲ್ಲಿಯ ಅಭಿವೃದ್ಧಿಗೆ ಹೊಸ ದಿಕ್ಕು: ವಿಜಯೇಂದ್ರ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಟೀಕಿಸಿದ ಅವರು, ರಾಜ್ಯದಲ್ಲಿ ರೈತರ ಸಮಸ್ಯೆ ಗಳಿಗೆ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ. ಬರಗಾಲದ ಸಂದರ್ಭದಲ್ಲಿ ಬಿಜೆಪಿ ಪಾದ ಯಾತ್ರೆ(BJP Padayatra) ನಡೆಸಿ ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದರೂ ಪರಿಹಾರ ಕ್ರಮಗಳು ಸಮರ್ಪಕವಾಗಿ ನಡೆದಿಲ್ಲ ಎಂದು ದೂರಿದರು.

ಬಿಜೆಪಿ ಅಧಿಕಾರಕ್ಕೆ ಬಂದರೆ ಬಾಗೇಪಲ್ಲಿಯ ಅಭಿವೃದ್ಧಿಗೆ ಹೊಸ ದಿಕ್ಕು

-

Profile
Ashok Nayak Oct 2, 2026 10:26 PM

ಬಾಗೇಪಲ್ಲಿ: ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರ 25 ವರ್ಷಗಳ ಸಾರ್ವಜನಿಕ ಜೀವನದ ಸಾಧನೆಯನ್ನು ಸ್ಮರಿಸುವ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿ ರುವ ‘ಸೇವಾ ಸಂಕಲ್ಪ ಯಾತ್ರೆ’ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರ ಉತ್ಸಾಹ ದೊಂದಿಗೆ ನಡೆಯಿತು. ಗಡಿದಿಂ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಸೂರ್ಯ ಕನ್ವೆನ್ಷನ್ ಹಾಲ್‌ವರೆಗೆ ಸುಮಾರು ಎರಡು ಕಿ.ಮೀ. ಪಾದಯಾತ್ರೆ ನಡೆಸಲಾಯಿತು.

ಸೂರ್ಯ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BJP State President B.Y. Vijayendra) ಮಾತನಾಡಿ, ಮೋದಿ ಅವರು ದೇಶದ ಬಡವರು, ಯುವಕರು, ರೈತರು ಹಾಗೂ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ‘ಪ್ರಧಾನಿ ಅಲ್ಲ, ಪ್ರಧಾನ ಸೇವಕ’ ಎಂಬ ಮನೋಭಾವ ದಿಂದ ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹವರ ಮಾರ್ಗದರ್ಶನದಲ್ಲಿ ಪಕ್ಷ ಕಟ್ಟುವ ಸೌಭಾಗ್ಯ ನನ್ನದಾಗಿರುವುದು ಪೂರ್ವಜನ್ಮದ ಪುಣ್ಯ ಎಂದು ಹೇಳಿದರು.

ಇದನ್ನೂ ಓದಿ: B Y Vijayendra: 50 ಲಕ್ಷ ಮತದಾರರನ್ನು ಕೈಬಿಡುವ ಷಡ್ಯಂತ್ರದ ಆರೋಪವನ್ನು ಸಿಎಂ ಸಾಬೀತುಪಡಿಸಲಿ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಟೀಕಿಸಿದ ಅವರು, ರಾಜ್ಯದಲ್ಲಿ ರೈತರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ. ಬರಗಾಲದ ಸಂದರ್ಭದಲ್ಲಿ ಬಿಜೆಪಿ ಪಾದ ಯಾತ್ರೆ(BJP Padayatra) ನಡೆಸಿ ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದರೂ ಪರಿಹಾರ ಕ್ರಮಗಳು ಸಮರ್ಪಕವಾಗಿ ನಡೆದಿಲ್ಲ ಎಂದು ದೂರಿದರು.

ದಲಿತರಿಂದ ಸಾವಿರಾರು ಎಕರೆ ಭೂಮಿ ಹೊಡೆದಿರುವ ಬಗ್ಗೆ ನಾನು ಮಾತನಾಡುವುದಿಲ್ಲ, ಆದರೆ ಕಳೆದ ಮೂರು ವರ್ಷಗಳಲ್ಲಿ ಬಾಗೇಪಲ್ಲಿ ಕ್ಷೇತ್ರಕ್ಕೆ ಶಾಸಕ ಸುಬ್ಬಾರೆಡ್ಡಿ ಎಷ್ಟು ಅನುದಾನ ತಂದಿದ್ದಾರೆ. ಎಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆದಿವೆ ಎಂಬುದನ್ನು ಕ್ಷೇತ್ರದ ಜನರಿಗೆ ತಿಳಿಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

2cbpm1mni (1) BYV 2

ಕಾಂಗ್ರೆಸ್ ಸರಕಾರದ ದುರಾಡಳಿತದಲ್ಲಿ ಬಡವರಿಗೆ ಮನೆ, ಗಂಗಾ ಕಲ್ಯಾಣ, ವಿಕಲಚೇತನರ ಪಿಂಚಣಿ, ವಿಧವಾ ವೇತನ ಸೇರಿದಂತೆ ವಿವಿಧ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂದು ಆರೋಪಿಸಿದರು.

ಅಲೆಮಾರಿ ಸಮುದಾಯಗಳ ಅಭಿವೃದ್ಧಿಗಾಗಿ ಹಿಂದಿನ ಬಿಜೆಪಿ ಸರ್ಕಾರ ವಿವಿಧ ಅಭಿವೃದ್ಧಿ ನಿಗಮಗಳನ್ನು ರಚಿಸಿ ೭೫೦ ಕೋಟಿ ಅನುದಾನ ನೀಡಿತ್ತು. ಪ್ರಸ್ತುತ ಸರ್ಕಾರ ನಿಗಮಗಳ ಹಣ ನುಂಗಿನೀರುಕುಡಿಯುವ ಮೂಲಕ ಈ ಸಮುದಾಯಗಳ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದರು.

ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷಕ್ಕಾಗಿ ದುಡಿಯುತ್ತಿರುವ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಅವಕಾಶ ನೀಡುವಂತೆ ಜಿಲ್ಲಾ ಹಾಗೂ ತಾಲೂಕು ಅಧ್ಯಕ್ಷರಿಗೆ ಸೂಚಿಸಿದರು.

ಆಗ್ನೇಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಂ.ಸುರೇಶ್(K M Suresh) ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸುವ ಮೂಲಕ ಪಕ್ಷದ ಸಂಘಟನೆ ಬಲಪಡಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.

2CBPM1BGP ok

ಬಡತನ ತೊಲಗಬೇಕಾದರೆ ವಿಜಯೇಂದ್ರ ಸಿಎಂ ಆಗಬೇಕು

ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು ಮಾತನಾಡಿ, ರಾಜ್ಯ ಸರ್ಕಾರ ದಲಿತರು, ರೈತರು ಹಾಗೂ ಮಹಿಳೆಯರಿಗೆ ಅನ್ಯಾಯ ಮಾಡುತ್ತಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ರಾಜ್ಯದ ಹಣದಿಂದ ಕಾಂಗ್ರೆಸ್ ಪಕ್ಷವು ಪಕ್ಷ ಸಂಘಟನೆ ಮಾಡಲು ಹೊರಟಿದೆ ಎಂದು ದೂರಿದರು.

ಬಾಗೇಪಲ್ಲಿ ಕ್ಷೇತ್ರದಲ್ಲಿ ಶಾಸಕರಿಂದ ದಲಿತರ ಭೂಮಿಗೆ ಸಂಬಂಧಿಸಿದಂತೆ ಅಕ್ರಮ ನಡೆದಿದೆ ಎಂಬ ಆರೋಪಗಳಿದ್ದು, ಸುಮಾರು ಒಂದು ಸಾವಿರ ಎಕರೆ ಭೂಮಿ ನುಂಗಲಾಗಿದೆ. ಈಬಗ್ಗೆ ದಲಿತ ಸಂಘಟನೆಗಳು ಪ್ರಕರಣ ಬಯಲಿಗಳೆದಿರುವುದು ಗುಟ್ಟಾಗಿ ಉಳಿದಿಲ್ಲ ಎಂದು ಆರೋಪಿಸಿದರು. ಕೃಷ್ಣಾ-ನಂದಿ ನೀರನ್ನು ಬಾಗೇಪಲ್ಲಿಗೆ ಹರಿಸಲು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಒತ್ತಾಯಿಸಿದರು.

ಬಡತನ ನಿರ್ಮೂಲನೆ ಹಾಗೂ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ನರೇಂದ್ರ ಮೋದಿ ಅವರು ಕೇಂದ್ರದಲ್ಲಿ ಹಾಗೂ ಬಿ.ವೈ.ವಿಜಯೇಂದ್ರ ಅವರು ರಾಜ್ಯದಲ್ಲಿ ನಾಯಕತ್ವ ವಹಿಸುವಂತಾಗಬೇಕು ಎಂದು ಮುನಿರಾಜು ಹೇಳಿದ ಅವರು 2028ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ,ರಾಜ್ಯ ಸುಭಿಕ್ಷವಾಗಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯೂ ಸೇರಿದಂತೆ ರಾಜ್ಯದ ಬರಪೀಡಿತ ತಾಲೂಕುಗಳಲ್ಲಿ ತಕ್ಷಣ ಪರಿಹಾರ ಕಾಮಗಾರಿಗಳನ್ನು ಕೈಗೊಂಡು ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು. ಇಲ್ಲದಿದ್ದರೆ ಹೋರಾಟ ಮುಂದುವರಿಯಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

‘ಬಾಗೇಪಲ್ಲಿಯ ಅಭಿವೃದ್ಧಿಗೆ ಬಿಜೆಪಿ ಅಗತ್ಯ’

ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ಮಾತನಾಡಿ, ಬಾಗೇಪಲ್ಲಿ ಕ್ಷೇತ್ರದ ಜನರು ಇಂದಿಗೂ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಬಾಗೇಪಲ್ಲಿ ಪಟ್ಟಣ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಹೊಸ ದಿಕ್ಕು ದೊರೆಯಲಿದೆ ಎಂದು ಹೇಳಿದರು.

2028ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಬಿಜೆಪಿ ನಾಯಕರ ಪಕ್ಷವಲ್ಲ, ಕಾರ್ಯಕರ್ತರ ಪಕ್ಷವಾಗಿದೆ ಎಂದು ಹೇಳಿದರು.

‘ಮೋದಿ 25 ವರ್ಷಗಳ ಸಾರ್ವಜನಿಕ ಬದುಕು’

ಕೆ.ವೈ.ನಾರಾಯಣಸ್ವಾಮಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಜೀವನವನ್ನು ಸ್ಮರಿಸುವ ಸಲುವಾಗಿ ರಾಜ್ಯಾದ್ಯಂತ ಸೇವಾ ಸಂಕಲ್ಪ ಯಾತ್ರೆ ನಡೆಯುತ್ತಿದೆ. ಬಳ್ಳಾರಿಯಿಂದ ವಿಜಯೇಂದ್ರ ಅವರ ನೇತೃತ್ವದಲ್ಲಿ ಆರಂಭಗೊಂಡಿರುವ ಯಾತ್ರೆ ರಾಜ್ಯದ ವಿವಿಧ ಭಾಗಗಳಲ್ಲಿ ಸಂಚರಿಸಲಿದೆ ಎಂದರು.

ಮೋದಿ ಅವರು ದೇಶದಲ್ಲಿ ಡಿಜಿಟಲ್ ಹಾಗೂ ನಗದುರಹಿತ ವ್ಯವಹಾರಕ್ಕೆ ಉತ್ತೇಜನ ನೀಡಿದ್ದು, ಜನಧನ್ ಖಾತೆ, ಉಜ್ವಲ ಯೋಜನೆ ಸೇರಿದಂತೆ ಹಲವು ಯೋಜನೆಗಳ ಮೂಲಕ ಜನಸಾಮಾನ್ಯರಿಗೆ ನೆರವಾಗಿದ್ದಾರೆ ಎಂದು ವಿವರಿಸಿದರು. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಿ ಪಕ್ಷ ಸಂಘಟನೆ ಯನ್ನು ಬಲಪಡಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ರಾಮಚಂದ್ರಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ನಿರ್ಮಲಾ, ಪ್ರತಾಪ್, ಮುನಿಸ್ವಾಮಿ, ಲಕ್ಷ್ಮಿ, ರಾಮಲಿಂಗಪ್ಪ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯ ಕರ್ತರು ಉಪಸ್ಥಿತರಿದ್ದರು.