ಚಿಕ್ಕಬಳ್ಳಾಪುರ : ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಲಭ್ಯವಿರುವ ಅನುದಾನಗಳ ಕ್ರಿಯಾ ಯೋಜನೆ ರೂಪಿಸುವಲ್ಲಿ ಯಾವುದೇ ರೀತಿಯ ವಿಳಂಬವನ್ನು ಸಹಿಸ ಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಪ್ರಭು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ನಗರಸಭೆಯ ಸರ್ ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಆಡಳಿತ ಸಂಸ್ಥೆ ಗಳ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅನುದಾನ ಲಭ್ಯವಿದ್ದರೂ ಕ್ರಿಯಾ ಯೋಜನೆ ರೂಪಿಸುವಲ್ಲಿ ವಿಳಂಬವಾದರೆ ಕಾಮಗಾರಿ ಗಳ ಅನುಷ್ಠಾನ ಹಾಗೂ ಸಾರ್ವಜನಿಕರಿಗೆ ದೊರೆಯಬೇಕಾದ ಮೂಲಸೌಕರ್ಯಗಳ ಅಭಿವೃದ್ಧಿ ತಡವಾಗುತ್ತದೆ ಎಂದು ಹೇಳಿದರು.
15ನೇ ಹಣಕಾಸು ಆಯೋಗ, ರಾಜ್ಯ ಹಣಕಾಸು ಆಯೋಗ, ವಿಶೇಷ ಹಾಗೂ ಯೋಜನಾ ಅನುದಾನ ಮತ್ತು ಅಮೃತ್ ನಗರೋತ್ಥಾನ ಯೋಜನೆಯಡಿ ಲಭ್ಯವಿರುವ ಅನುದಾನಗಳಿಗೆ ಸಂಬಂಧಿಸಿದ ಕಾನೂನುಬದ್ಧ ಕ್ರಿಯಾ ಯೋಜನೆಯನ್ನು ಆ.8ರೊಳಗೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ನಿರ್ದೇಶಿಸಿದರು.
ಕ್ರಿಯಾ ಯೋಜನೆಗಳಿಗೆ ಜಿಲ್ಲಾ ಮಟ್ಟದಲ್ಲಿ ತ್ವರಿತ ಅನುಮೋದನೆ ನೀಡಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಸೆಪ್ಟೆಂಬರ್ 15ರೊಳಗೆ ಕಾರ್ಯಾದೇಶಗಳನ್ನು ನೀಡಬೇಕು. ಕಾರ್ಯಾದೇಶ ಪಡೆದ ಎಲ್ಲ ಕಾಮಗಾರಿಗಳನ್ನು ತಕ್ಷಣ ಆರಂಭಿಸಿ ಅಕ್ಟೋಬರ್ 30ರೊಳಗೆ ಪೂರ್ಣ ಗೊಳಿಸಬೇಕು ಎಂದು ಸೂಚಿಸಿದರು. ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಆ.30 ರೊಳಗೆ ಮುಕ್ತಾಯಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಮಗಾರಿಗಳ ಅನುಷ್ಠಾನದಲ್ಲಿ ಪಾರದರ್ಶಕತೆ ಕಾಪಾಡಲು ಪ್ರತಿ ಪೂರ್ಣಗೊಂಡ ಕಾಮಗಾರಿಯ ಜಿಪಿಎಸ್ ಮಾಹಿತಿ ಹಾಗೂ ಛಾಯಾಚಿತ್ರಗಳನ್ನು ಕಡ್ಡಾಯವಾಗಿ ದಾಖಲೆಯಲ್ಲಿ ಸಂಗ್ರಹಿಸಬೇಕು. ಜಿಲ್ಲಾಡಳಿತ ಕೇಳಿದಾಗ ತಕ್ಷಣ ಮಾಹಿತಿ ಒದಗಿಸುವ ವ್ಯವಸ್ಥೆ ಇರಬೇಕೆಂದು ತಿಳಿಸಿದರು.
ಹಿಂದಿನ ಆರ್ಥಿಕ ವರ್ಷದ ಕಾಮಗಾರಿಗಳಿಗೆ ಪ್ರಸಕ್ತ ಸಾಲಿನ ಅನುದಾನ ಹಂಚಿಕೆ ಮಾಡುವ ಮೊದಲು ಸಂಬಂಧಪಟ್ಟ ಮೇಲಾಧಿಕಾರಿಗಳ ಆಡಳಿತಾತ್ಮಕ ಅನುಮೋದನೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗು ವುದು ಎಂದು ಎಚ್ಚರಿಕೆ ನೀಡಿದರು.
ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯ ಸಾರ್ವಜನಿಕ ಶೌಚಾಲಯಗಳು, ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಆಸ್ತಿಗಳ ನಿರ್ವಹಣೆಯನ್ನು ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಿ, ಲೋಪಗಳು ಕಂಡುಬಂದರೆ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದರು.
ನಗರ ಪ್ರದೇಶಗಳ ಕಟ್ಟಡಗಳ ಮರುಪರಿಶೀಲನೆ ನಡೆಸಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾಲೀಕರ ವಿರುದ್ಧ ಕ್ರಮ ಜರುಗಿಸಬೇಕು. ತೆರಿಗೆ ಸಂಗ್ರಹಣೆ ನಗರ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸ್ಥಿರತೆಗೆ ಅತ್ಯಂತ ಅಗತ್ಯವಾಗಿದ್ದು, ಅಗತ್ಯವಿದ್ದರೆ ಕಾನೂನು ಕ್ರಮಕ್ಕೂ ಮುಂದಾಗಬೇಕು ಎಂದು ಸೂಚಿಸಿ ದರು.
ನಗರಗಳಲ್ಲಿ ಬೀದಿ ವ್ಯಾಪಾರಿಗಳಿಗೆ ವ್ಯವಸ್ಥಿತ ಸ್ಥಳಾವಕಾಶ ಕಲ್ಪಿಸುವ ಉದ್ದೇಶದಿಂದ ವಿಶೇಷ ಬೀದಿ ವ್ಯಾಪಾರ ವಲಯಗಳನ್ನು ಗುರುತಿಸಿ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ್, ಕಾರ್ಯ ಪಾಲಕ ಅಭಿಯಂತರರಾದ ಶ್ರೀದೇವಿ, ಜಿಲ್ಲೆಯ ವಿವಿಧ ನಗರಸಭೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಹಾಗೂ ಸಂಬಂಧಿತ ಅಧಿಕಾರಿಗಳು ಉಪಸ್ಥಿತರಿದ್ದರು. ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಅನುದಾನ ಬಳಕೆ ಹಾಗೂ ಮುಂದಿನ ಕಾರ್ಯ ಯೋಜನೆ ಕುರಿತು ಸಮಗ್ರ ಚರ್ಚೆ ನಡೆಯಿತು.