ಗೌರಿಬಿದನೂರು: ತಾಲೂಕಿನಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿ ಸಲು ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಪೂರ್ವಸಿದ್ಧತೆ ಕೈಗೊಂಡು, ಸಾರ್ವಜನಿಕರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಬೇಕು ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ (MLA KH Puttaswamy Gowda)ಸೂಚಿಸಿದರು.
ನಗರದ ತಾಲೂಕು ಕಚೇರಿಯಲ್ಲಿ ನಡೆದ ಬರ ನಿರ್ವಹಣೆಯ ಟಾಸ್ಕ್‌ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಕೆಲವು ವರ್ಷಗಳಲ್ಲಿ ಉತ್ತಮ ಮಳೆಯಾಗಿದ್ದರೂ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ನಾಲ್ಕೈದು ವರ್ಷಗಳಿಗೊಮ್ಮೆ ಬರ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದ್ದು, ಅದನ್ನು ಸಮರ್ಥ ವಾಗಿ ಎದುರಿಸಲು ತಾಲೂಕು ಆಡಳಿತ ಸಜ್ಜಾಗಿರಬೇಕು ಎಂದು ಹೇಳಿದರು.
ರಾಜ್ಯ ಸರ್ಕಾರ ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಸಭೆ ನಡೆಸಿದ್ದು, ಶೀಘ್ರದಲ್ಲೇ ಬರ ಹಾಗೂ ಪರಿಹಾರ ಘೋಷಣೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಬರ ಪರಿಹಾರಕ್ಕಾಗಿ ಬಿಡುಗಡೆಯಾಗುವ ಅನುದಾನವನ್ನು ಅಗತ್ಯ ಕಾಮಗಾರಿಗಳಿಗೆ ಸಮರ್ಪಕವಾಗಿ ಬಳಸಬೇಕು. ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತಹಸೀಲ್ದಾರ್ ಅರವಿಂದ್ ಮಾತನಾಡಿ, ಯಾವುದೇ ಸಮಸ್ಯೆ ಎದುರಾದ ತಕ್ಷಣ ತಾಲೂಕು ಆಡಳಿತದ ಗಮನಕ್ಕೆ ತರಬೇಕು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಉಳಿದು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಮೂಲಕ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳ ಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ತಾಪಂ ಇಒ ಜಿ.ಕೆ. ಹೊನ್ನಯ್ಯ, ಪೌರಾಯುಕ್ತ ಕೆ.ಜೆ. ರಮೇಶ್, ಪೊಲೀಸ್ ವೃತ್ತ ನಿರೀಕ್ಷಕ ಅಂಜನ್‌ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.