ಚಿಕ್ಕಬಳ್ಳಾಪುರ: ಸಾರ್ವಜನಿಕರಿಗೆ ಬ್ಯಾಂಕಿಂಗ್ ಮತ್ತು ವಿಮಾ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ರಾಜ್ಯ ಮಟ್ಟದ ಬ್ಯಾಂಕರ್ಸ್ ಸಮಿತಿ (ಎಸ್ಎಲ್ಬಿಸಿ) ಕರ್ನಾಟಕದ ವತಿಯಿಂದ ಹಣಕಾಸು ಸೇರ್ಪಡೆ ಸ್ಯಾಚುರೇಷನ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅ.21ರಿಂದ ಆರಂಭ ವಾಗಿರುವ ಈ ಅಭಿಯಾನ ಡಿ.31ರವರೆಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಡೆಯಲಿದೆ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅರುಣ್ ಕುಮಾರ್ ತಿಳಿಸಿದ್ದಾರೆ.
ಈ ಅಭಿಯಾನದ ಬೃಹತ್ ಉದ್ಘಾಟನಾ ಕಾರ್ಯಕ್ರಮವನ್ನು ಅ.28ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Chikkaballapur News: ತಂತ್ರಜ್ಞಾನ, ಸುಸ್ಥಿರ ಕೃಷಿಯಲ್ಲಿ ಕೊಡಗಿನ ಪೊನ್ನಾಡ್ ಎಫ್ಪಿಒಗೆ ಸಿಐಐ ಪ್ರಶಸ್ತಿ
ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಅಭಿಯಾನದ ಮೂಲಕ ಅರ್ಹ ಫಲಾನುಭವಿಗಳಿಗೆ ವಿವಿಧ ಬ್ಯಾಂಕಿಂಗ್ ಮತ್ತು ವಿಮಾ ಯೋಜನೆಗಳ ಸೌಲಭ್ಯಗಳನ್ನು ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರಲ್ಲಿ ಡಿಜಿಟಲ್ ವಂಚನೆ ಕುರಿತು ಜಾಗೃತಿ ಮೂಡಿಸುವುದು, ಶೈಕ್ಷಣಿಕ ವಿಡಿಯೊಗಳ ಪ್ರದರ್ಶನ ಹಾಗೂ ಬ್ಯಾಂಕ್ ಅಧಿಕಾರಿಗಳು ಮತ್ತು ಬ್ಯಾಂಕ್ ಮಿತ್ರರ ಸಹಕಾರದಿಂದ ಫಲಾನುಭವಿಗಳ ನೋಂದಣಿಗೆ ನೆರವು ನೀಡುವುದು ಅಭಿಯಾನದ ಪ್ರಮುಖ ಉದ್ದೇಶಗಳಾಗಿವೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ನವೀನ್ ಭಟ್ ವಹಿಸಲಿದ್ದು, ಕಾರ್ಯನಿರ್ವಾಹಕ ನಿರ್ದೇಶಕ ಭವೇಂದ್ರ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಬಾರ್ಡ್ ಪ್ರಧಾನ ವ್ಯವಸ್ಥಾಪಕರು, ಭಾರತೀಯ ರಿಸರ್ವ್ ಬ್ಯಾಂಕ್ನ ಅಧಿಕಾರಿಗಳು ಹಾಗೂ ವಿವಿಧ ಬ್ಯಾಂಕುಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿರ ಲಿದ್ದಾರೆ.
ಅಭಿಯಾನದ ಅವಧಿಯಲ್ಲಿ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಅಡಿಯಲ್ಲಿ 9.77 ಲಕ್ಷ ನೋಂದಣಿ ಹಾಗೂ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಅಡಿಯಲ್ಲಿ 16.78 ಲಕ್ಷ ನೋಂದಣಿಗಳನ್ನು ಮಾಡುವ ಗುರಿಯನ್ನು ಬ್ಯಾಂಕುಗಳು ಹೊಂದಿವೆ.
ಸಾರ್ವಜನಿಕರು ಈ ಅಭಿಯಾನದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಶಿಬಿರಗಳಿಗೆ ಭೇಟಿ ನೀಡುವಾಗ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಹಾಗೂ ಆಧಾರ್ಗೆ ಜೋಡಣೆಯಾಗಿರುವ ಮೊಬೈಲ್ ಫೋನ್ ಕಡ್ಡಾಯವಾಗಿ ತರಬೇಕು ಎಂದು ಅರುಣ್ ಕುಮಾರ್ ಮನವಿ ಮಾಡಿದ್ದಾರೆ.