Praja Seve: ಕಳೆದ ವರ್ಷ 5 ಸಾವಿರಕ್ಕೂ ಅಧಿಕ ಪ್ರಕರಣಗಳ ಇತ್ಯರ್ಥ; ನಿವೇಶನ ರಹಿತರಿಗೆ 1,800 ಎಕರೆ ಪ್ರದೇಶದಲ್ಲಿ ನಿವೇಶನ ಸಿದ್ಧತೆ; ಜಿಲ್ಲೆಯ ಏಳು ಕಡೆ ಆಂದೋಲನ
ಕಳೆದ ಒಂದು ವರ್ಷದಲ್ಲಿ ಜಿಲ್ಲೆಯಲ್ಲಿ ಸುಮಾರು 5,000ಕ್ಕೂ ಅಧಿಕ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಈ ಹಿಂದೆ ಸಾರ್ವಜನಿಕರು ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸಲ್ಲಿಸಿದರೂ, ಅವುಗಳ ವಿಲೇವಾರಿ ಪ್ರಕ್ರಿಯೆ ಹಾಗೂ ಪ್ರಸ್ತುತ ಸ್ಥಿತಿಗತಿ ತಿಳಿದುಕೊಳ್ಳುವುದು ಕಷ್ಟ ವಾಗುತ್ತಿತ್ತು.
-
ಮಂಚೇನಹಳ್ಳಿ: ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡುವುದನ್ನು ತಪ್ಪಿಸಿ, ಅವರ ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡುವ ಉದ್ದೇಶದಿಂದ ಪ್ರಜಾಸೇವೆ(Praja Seve) ಆಂದೋಲನವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲಾಗುತ್ತಿದೆ. ಆನ್ಲೈನ್ ತಂತ್ರಾಂಶದ ಮೂಲಕ ಸ್ವೀಕರಿಸುವ ಅರ್ಜಿಗಳಲ್ಲಿ ಶೇ.100ರಷ್ಟು ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.
ಮಂಚೇನಹಳ್ಳಿ ತಾಲ್ಲೂಕಿನ ಮಂಚೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಉದ್ಘಾಟಿಸಿ ಮಾತನಾಡಿದರು.
ಕಳೆದ ಒಂದು ವರ್ಷದಲ್ಲಿ ಜಿಲ್ಲೆಯಲ್ಲಿ ಸುಮಾರು 5,000ಕ್ಕೂ ಅಧಿಕ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಈ ಹಿಂದೆ ಸಾರ್ವಜನಿಕರು ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸಲ್ಲಿಸಿದರೂ, ಅವುಗಳ ವಿಲೇವಾರಿ ಪ್ರಕ್ರಿಯೆ ಹಾಗೂ ಪ್ರಸ್ತುತ ಸ್ಥಿತಿಗತಿ ತಿಳಿದುಕೊಳ್ಳುವುದು ಕಷ್ಟವಾಗುತ್ತಿತ್ತು.
ಇದೀಗ ಪ್ರಜಾಸೇವೆ ಆಂದೋಲನದ ಆನ್ಲೈನ್ ತಂತ್ರಾಂಶದ ಮೂಲಕ ಅರ್ಜಿಗಳನ್ನು ಸ್ವೀಕರಿಸಿ, ಅವುಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಯಾವುದೇ ಸರ್ಕಾರಿ ಕಚೇರಿಯಲ್ಲಿ ಸಾರ್ವಜನಿಕ ರನ್ನು ಅನಗತ್ಯವಾಗಿ ಅಲೆದಾಡಿಸದೆ, ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಜವಾಬ್ದಾರಿ ಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ ಎಂದರು.
ಮಂಚೇನಹಳ್ಳಿ ತಾಲ್ಲೂಕಿನಲ್ಲಿ ಕಂದಾಯ ಗ್ರಾಮ ಅಭಿಯಾನ(Revenue Village Campaign) ದಡಿ ಸುಮಾರು 6,000 ಹಕ್ಕುಪತ್ರ ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ, 650 ನಿವೇಶನಗಳ ಅಳತೆ ಕಾರ್ಯ ಪೂರ್ಣ ಗೊಂಡಿದ್ದು, 525 ದರ್ಖಾಸ್ತು ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ತಾಲ್ಲೂಕಿನ ಎಲ್ಲ ಕಂದಾಯ ದಾಖಲೆಗಳನ್ನು ಭೂ ಸುರಕ್ಷಾ ಯೋಜನೆಯಡಿ ಡಿಜಿಟಲೀಕರಣಗೊಳಿಸಿ ಸಾರ್ವಜನಿಕ ರಿಗೆ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ ನಿವೇಶನ ಒದಗಿಸುವ ಉದ್ದೇಶದಿಂದ ವಿಶೇಷ ಅಭಿಯಾನದಡಿ ಸುಮಾರು 1,800 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ರಚಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ ಈಗಾಗಲೇ 800 ಎಕರೆ ಜಮೀನನ್ನು ನಿವೇಶನ ಹಂಚಿಕೆಗಾಗಿ ಮಂಜೂರು ಮಾಡಲಾಗಿದೆ. ಅರ್ಹ ನಿವೇಶನ ರಹಿತರಿಗೆ ನಿವೇಶನ ಒದಗಿಸುವ ಕಾರ್ಯ ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದೆ ಎಂದರು.
ಎತ್ತಿನಹೊಳೆ(Ettinahole) ಯೋಜನೆಯ ಪೈಪ್ಲೈನ್ ಕಾಮಗಾರಿಗಳು ಮುಂದಿನ ಜೂನ್–ಜುಲೈ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. 2027ರ ಅಂತ್ಯದ ವೇಳೆಗೆ ಯೋಜನೆಯಡಿ ನಿಗದಿತ ಪ್ರಮಾಣದ ನೀರು ಜಿಲ್ಲೆಗೆ ಲಭ್ಯವಾಗುವ ನಿರೀಕ್ಷೆಯಿದ್ದು, ಪೂರ್ವಸಿದ್ಧತಾ ಕಾಮಗಾರಿಗಳಿಗೆ ವೇಗ ನೀಡಲಾಗಿದೆ. ಇದರಿಂದ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯುವ ಆಶಯವಿದೆ ಎಂದು ಹೇಳಿದರು.
ಕಾರ್ಮಿಕರ ಕಲ್ಯಾಣಕ್ಕಾಗಿ ಪ್ರತಿ ತಾಲ್ಲೂಕಿನಲ್ಲಿ ತಲಾ 2,500ಕ್ಕೂ ಹೆಚ್ಚು ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ಜಿಲ್ಲೆಯ ಎಲ್ಲ ಅಂಗನವಾಡಿಗಳಲ್ಲಿ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಮಕ್ಕಳು ಹಾಗೂ ಅರ್ಹ ಮಹಿಳೆಯರಿಗೆ ಪೌಷ್ಟಿಕ ಆಹಾರ ಒದಗಿಸುವ ಮೂಲಕ ಆರೋಗ್ಯ ಮತ್ತು ಪೌಷ್ಟಿಕತೆಯ ಸುಧಾರಣೆಗೆ ಒತ್ತು ನೀಡಲಾಗಿದೆ ಎಂದರು.
ಪ್ರಜಾಸೇವೆ ಆಂದೋಲನವು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವ ಪ್ರಮುಖ ವೇದಿಕೆಯಾಗಿದೆ. ಅಧಿಕಾರಿಗಳು ಜನರ ಅಹವಾಲುಗಳನ್ನು ಆಲಿಸಿ, ಸಾಧ್ಯವಾದಷ್ಟು ಸಮಸ್ಯೆ ಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ಮುಂದಾಗಬೇಕು. ಸ್ವಾತಂತ್ರ್ಯ ಬಂದು ಎಂಟು ದಶಕಗಳು ಕಳೆದರೂ ನಾಗರಿಕರ ಸಮಸ್ಯೆಗಳು ಮುಂದುವರಿದಿರುವುದಕ್ಕೆ ಕಾರಣಗಳನ್ನು ಪರಿಶೀಲಿಸಬೇಕು. ದೂರುಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡುವುದಷ್ಟೇ ಅಲ್ಲದೆ, ಸಮಸ್ಯೆಗಳ ಮೂಲ ಕಾರಣಗಳನ್ನು ಗುರುತಿಸಿ ಶಾಶ್ವತ ಹಾಗೂ ಗುಣಾತ್ಮಕ ಪರಿಹಾರ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲಾದ್ಯಂತ 656 ಅರ್ಜಿ ಸ್ವೀಕಾರ: ಜಿಲ್ಲೆಯಾದ್ಯಂತ ವಿವಿಧೆಡೆ ನಡೆದ ಪ್ರಜಾಸೇವೆ ಆಂದೋಲನ ದಲ್ಲಿ ಸಂಜೆ 5.30ರ ವೇಳೆಗೆ ಒಟ್ಟು 656 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಪಿಂಚಣಿ ಮಂಜೂರಾತಿ ಸೇರಿದಂತೆ ಕೆಲವು ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಲಾಗಿದೆ. ಉಳಿದ ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ಇತ್ಯರ್ಥಪಡಿಸುವುದಾಗಿ ಅಧಿಕಾರಿಗಳು ಅರ್ಜಿದಾರರಿಗೆ ಭರವಸೆ ನೀಡಿದರು.
ಬಾಗೇಪಲ್ಲಿ ತಾಲ್ಲೂಕಿನ ಪಾತಪಾಳ್ಯ ಹೋಬಳಿಯ ಗ್ರಾಮ ಪಂಚಾಯಿತಿ ಆವರಣ, ಗೌರಿ ಬಿದನೂರು ತಾಲ್ಲೂಕಿನ ತೊಂಡೇಬಾವಿ ಹೋಬಳಿಯ ತರಿದಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಭಾಗ, ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಹೋಬಳಿಯ ಎಸ್.ದೇವಗಾನಹಳ್ಳಿ ಗ್ರಾಮ ಪಂಚಾಯಿತಿ ಆವರಣ, ಚಿಂತಾಮಣಿ ತಾಲ್ಲೂಕಿನ ಕಸಬಾ ಹೋಬಳಿಯ ದೊಡ್ಡಗಂಜೂರು ಸರ್ಕಾರಿ ಪ್ರೌಢಶಾಲೆ ಆವರಣ, ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿ, ಗುಡಿಬಂಡೆ ಹಾಗೂ ಚೇಳೂರು ತಾಲ್ಲೂಕು ಕಚೇರಿ ಆವರಣಗಳಲ್ಲಿಯೂ ಆಂದೋಲನ ಸಭೆಗಳು ಯಶಸ್ವಿಯಾಗಿ ನಡೆದವು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶೋಭಿತಾ, ತಹಶೀಲ್ದಾರ್ ಪೂರ್ಣಿಮಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೊನ್ನಯ್ಯ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ದೇವರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚೇತನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತ ರಿದ್ದರು.