ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಕ್ಕತೇಕಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿರುವ ಶಂಕೆಯಿಂದ 80ಕ್ಕೂ ಹೆಚ್ಚು ಮಂದಿ ವಾಂತಿ ಹಾಗೂ ಭೇದಿಯಿಂದ ಅಸ್ವಸ್ಥ ಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಒಂದು ವಾರದಿಂದ ಈ ಸಮಸ್ಯೆ ಮುಂದುವರಿದಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಗ್ರಾಮಸ್ಥರ ಮಾಹಿತಿ ಪ್ರಕಾರ, ಕುಡಿಯುವ ನೀರಿನ ಪೈಪ್‌ಗೆ ಚರಂಡಿ ನೀರು ಸೇರಿರುವ ಸಾಧ್ಯತೆ ಯಿದ್ದು, ಅದೇ ಅಸ್ವಸ್ಥತೆಗೆ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಕೆಲವು ಜಾನುವಾರುಗಳ ಆರೋಗ್ಯದಲ್ಲಿಯೂ ಏರುಪೇರು ಕಂಡುಬಂದಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
ಇದನ್ನೂ ಓದಿ: Shidlaghatta Crime: ಅಕ್ರಮವಾಗಿ ಸಾಗಿಸುತ್ತಿದ್ದ ಗೋಧಿ ಕ್ಯಾಂಟರ್ ಸೆರೆ; ಇಬ್ಬರ ವಿರುದ್ಧ ಪ್ರಕರಣ ದಾಖಲು
ಸಮಸ್ಯೆ ಆರಂಭವಾದಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ, ಸಮಯಕ್ಕೆ ಸೂಕ್ತ ಕ್ರಮ ಕೈಗೊಳ್ಳಲಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಪರಿಣಾಮವಾಗಿ ದಿನದಿಂದ ದಿನಕ್ಕೆ ಅಸ್ವಸ್ಥರ ಸಂಖ್ಯೆ ಹೆಚ್ಚಾಗುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಶಿಡ್ಲಘಟ್ಟ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಮೂರ್ತಿ ನೇತೃತ್ವದ ಆರೋಗ್ಯ ಇಲಾಖೆ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ಜೊತೆಗೆ ಮನೆ ಮನೆಗೆ ಆರೋಗ್ಯ ತಪಾಸಣೆ, ಔಷಧ ವಿತರಣೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳ ಲಾಗಿದೆ.
ನೀರಿನ ಪರೀಕ್ಷಾ ವರದಿ ಬಂದ ಬಳಿಕ ಅಸ್ವಸ್ಥತೆಗೆ ನಿಖರ ಕಾರಣ ತಿಳಿಯಲಿದ್ದು, ಅಷ್ಟರವರೆಗೆ ಗ್ರಾಮಸ್ಥರು ಕುದಿಸಿ ತಣ್ಣಗಾದ ನೀರನ್ನೇ ಸೇವಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ, ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಸ್ಥಳೀಯರು ಸರ್ಕಾರ ಹಾಗೂ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.