ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

S N Subbareddy: ರಾಷ್ಟ್ರೀಯ ಹಬ್ಬಗಳಲ್ಲಿ ಜನರ ಪಾಲ್ಗೊಳ್ಳುವಿಕೆ ಹೆಚ್ಚಲಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ರಾಷ್ಟ್ರೀಯ ಹಬ್ಬಗಳು ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿವೆ ಎಂಬ ಮನೋ ಭಾವ ಬದಲಾಗಬೇಕು. ಜನರು ರಾಜಕೀಯ ಹಾಗೂ ಸಿನಿಮಾ ಕಾರ್ಯಕ್ರಮಗಳಿಗೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ರಾಷ್ಟ್ರೀಯ ಹಬ್ಬಗಳಿಗೂ ನೀಡಬೇಕು. ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ಮೂಲಕ ದೇಶಾಭಿಮಾನವನ್ನು ವ್ಯಕ್ತಪಡಿಸಬೇಕು

ಪಟ್ಟಣದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ 80ನೇ ಸ್ವಾತಂತ್ಯ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿದರು.

ಗುಡಿಬಂಡೆ: ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನವನ್ನು ಸ್ಮರಿಸುವ ರಾಷ್ಟ್ರೀಯ ಹಬ್ಬಗಳು ಕೇವಲ ಸರ್ಕಾರಿ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆಯ ಜನೋತ್ಸವಗಳಾಗಬೇಕು ಎಂದು ಶಾಸಕ ಎಸ್.ಎನ್. ಸುಬ್ಬಾ ರೆಡ್ಡಿ(MLA S N Subbareddy) ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹಬ್ಬಗಳ ಆಚರಣೆಯಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಹೆಚ್ಚಾದಾಗ ಮಾತ್ರ ಸ್ವಾತಂತ್ರ್ಯ ಹೋರಾಟಗಾರರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.

ರಾಷ್ಟ್ರೀಯ ಹಬ್ಬಗಳು ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿವೆ ಎಂಬ ಮನೋಭಾವ ಬದಲಾಗಬೇಕು. ಜನರು ರಾಜಕೀಯ ಹಾಗೂ ಸಿನಿಮಾ ಕಾರ್ಯಕ್ರಮಗಳಿಗೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ರಾಷ್ಟ್ರೀಯ ಹಬ್ಬಗಳಿಗೂ ನೀಡಬೇಕು. ಇಂತಹ ಕಾರ್ಯಕ್ರಮ ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ಮೂಲಕ ದೇಶಾಭಿಮಾನವನ್ನು ವ್ಯಕ್ತಪಡಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: MLA S N Subbareddy: ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ; ಪ್ರತಿಭಟನೆ ವೇಳೆ ಯುವ ಮುಖಂಡನ ಆತ್ಮಹತ್ಯೆ ಯತ್ನ ವಿಫಲ

ಇನ್ನೂ ಗುಡಿಬಂಡೆಯ ಅಭಿವೃದ್ದಿಗೆ ನಾನು ಸದಾ ಮುಂದಿರುತ್ತೇನೆ. ಅಭಿವೃದ್ದಿಯ ವಿಚಾರದಲ್ಲಿ ನಾನು ಎಂದೂ ರಾಜಕೀಯ ಮಾಡೋಲ್ಲ. ಚುನಾವಣೆ ಸಮಯದಲ್ಲಿ ಮಾತ್ರ ರಾಜಕೀಯ ಮಾಡೊಣ, ಚುನಾವಣೆ ಮುಗಿದ ಬಳಿಕ ನಾವೆಲ್ಲರೂ ಒಂದಾಗಿ ತಾಲೂಕು ಅಭಿವೃದ್ದಿಗೆ ಶ್ರಮಿಸೋ ಣ. ವಿರೋಧ ಪಕ್ಷದವರಾದರೂ ಸರಿ ಅಭಿವೃದ್ದಿ ವಿಚಾರದಲ್ಲಿ ನನ್ನೊಂದಿಗೆ ಚರ್ಚೆ ಮಾಡಿ, ಇಲ್ಲ ಅಭಿವೃದ್ದಿಯ ಕುರಿತು ನನಗೆ ಪತ್ರದ ಮೂಲಕ ತಿಳಿಸಿ. ತಾಲೂಕು ಅಭಿವೃದ್ದಿಗೆ ನಿಮ್ಮೆಲ್ಲರ ಸಹಕಾರ ನನಗೆ ತುಂಬಾನೆ ಮುಖ್ಯ ಎಂದರು.

ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಸೋಮೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಾಮಕೃಷ್ಣ, ಇಂದಿನ ಯುವಜನತೆ ದೇಶದ ಬಗ್ಗೆ ಅಭಿಮಾನ ಹಾಗೂ ಗೌರವ ಬೆಳೆಸಿಕೊಳ್ಳಬೇಕು. ಭಾರತಕ್ಕೆ ಸ್ವಾತಂತ್ರ್ಯ ಹೇಗೆ ದೊರೆಯಿತು, ಅದಕ್ಕಾಗಿ ಸ್ವಾತಂತ್ರ್ಯ ಹೋರಾಟಗಾರರು ಎದುರಿಸಿದ ಕಷ್ಟಗಳು ಹಾಗೂ ಮಾಡಿದ ತ್ಯಾಗ, ಬಲಿದಾನ ಎಂತಹದ್ದು ಎಂಬುದನ್ನು ಯುವಜನತೆ ಅರಿತುಕೊಳ್ಳಬೇಕು. ದೇಶದ ಭವಿಷ್ಯ ಯುವಜನತೆಯ ಕೈಯಲ್ಲಿದ್ದು, ರಾಷ್ಟ್ರದ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದರು.

ಸ್ವಾತಂತ್ರ್ಯ ಹೋರಾಟಗಾರರ ಧೈರ್ಯ, ಸಾಹಸ, ದೇಶಪ್ರೇಮ ಹಾಗೂ ತ್ಯಾಗದ ಮನೋಭಾವವನ್ನು ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದೇಶದ ಪ್ರಗತಿಯಲ್ಲಿ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳಿಗೆ ನೃತ್ಯ ರೂಪಕ ಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ವಿದ್ಯಾರ್ಥಿಗಳ ದೇಶಭಕ್ತಿ ಪ್ರದರ್ಶನ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದಿತು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಸಿಗ್ಬತ್ತುಲ್ಲಾ, ತಾಪಂ ಇಒ ನಾಗಮಣಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ವಿಕಾಸ್, ಉಪಾಧ್ಯಕ್ಷ ಗಂಗರಾಜು, ಆರಕ್ಷಕ ವೃತ್ತ ನಿರೀಕ್ಷಕ ಮುನಿಕೃಷ್ಣ, ಪಪಂ ಮುಖ್ಯಾಧಿ ಕಾರಿ ಆರತಿ, ಬಿಇಒ ಕಾಳೇಗೌಡ, ಸರ್ಕಾರಿ ನೌಕರರ ಸಂಘದ ಮುನಿಕೃಷ್ಣಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಾಲಾಜಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕಂದಾಯ ಇಲಾಖೆಯ ಸಿಬ್ಬಂದಿ, ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.