ಶಿಡ್ಲಘಟ್ಟ: ಫುಟ್ಪಾತ್‌ಗಳು ಪಾದಚಾರಿಗಳ ಸುರಕ್ಷಿತ ಸಂಚಾರಕ್ಕಾಗಿ ಮೀಸಲಾಗಿದ್ದು, ವ್ಯಾಪಾರ ಅಥವಾ ಇತರೆ ಉದ್ದೇಶಗಳಿಗೆ ಅತಿಕ್ರಮಿಸಿಕೊಳ್ಳುವುದು ಸಹಿಸಲಾಗುವುದಿಲ್ಲ. ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಫುಟ್ಪಾತ್ ಮತ್ತು ರಸ್ತೆ ಒತ್ತುವರಿಗಳನ್ನು ತೆರವುಗೊಳಿಸಬೇಕು. ಇಲ್ಲವಾದರೆ ನೋಟಿಸ್ ಜಾರಿ, ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಠಾಣೆಯ ಪಿಎಸ್‌ಐ ಸುನಿಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಫುಟ್ಪಾತ್ ಮತ್ತು ರಸ್ತೆ ಒತ್ತುವರಿಗಳನ್ನು ತೆರವುಗೊಳಿಸಲು ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ ಎಂದು ತಿಳಿಸಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ಅಂಗಡಿಗಳು ಹಾಗೂ ವ್ಯಾಪಾರಿಗಳು ಫುಟ್ಪಾತ್‌ಗಳನ್ನು ಅತಿಕ್ರಮಿಸಿ ಕೊಂಡಿರುವ ಪರಿಣಾಮ ಪಾದಚಾರಿಗಳು ರಸ್ತೆಯಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿದ್ದು, ಅಪಘಾತಗಳ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಸಾರ್ವಜನಿಕ ರಿಗೆ ಸ್ವಯಂಪ್ರೇರಿತವಾಗಿ ಒತ್ತುವರಿ ತೆರವುಗೊಳಿಸಲು ಅವಕಾಶ ನೀಡಲಾಗಿದೆ ಎಂದು ಹೇಳಿದರು.
ಸೂಚನೆ ಪಾಲಿಸದವರ ವಿರುದ್ಧ ನಗರಸಭೆಯ ಸಹಯೋಗದೊಂದಿಗೆ ನೋಟಿಸ್ ಜಾರಿ, ದಂಡ ವಿಧಿಸುವುದರ ಜೊತೆಗೆ ಸಂಬಂಧಿತ ಕಾನೂನುಗಳಡಿ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಪರ್ಯಾಯ ಪಾರ್ಕಿಂಗ್ ವ್ಯವಸ್ಥೆಯನ್ನೂ ಜಾರಿಗೆ ತರಲಾಗುತ್ತಿದೆ. ಒಂದು ದಿನ ರಸ್ತೆಯ ಎಡಭಾಗದಲ್ಲಿ ಹಾಗೂ ಮತ್ತೊಂದು ದಿನ ಬಲಭಾಗದಲ್ಲಿ ವಾಹನ ನಿಲುಗಡೆ ಮಾಡುವ ವ್ಯವಸ್ಥೆ ಜಾರಿಯಾಗಲಿದ್ದು, ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶಿಡ್ಲಘಟ್ಟವನ್ನು ಒತ್ತುವರಿರಹಿತ ಹಾಗೂ ಸಂಚಾರ ಸ್ನೇಹಿ ನಗರವನ್ನಾಗಿ ರೂಪಿಸುವ ಉದ್ದೇಶ ದಿಂದ ಮುಂದಿನ ದಿನಗಳಲ್ಲಿಯೂ ನಿರಂತರ ಕಾರ್ಯಾಚರಣೆ ನಡೆಸಲಾಗುವುದು ಎಂದು ಪಿಎಸ್‌ಐ ಸುನಿಲ್ ಕುಮಾರ್ ಹೇಳಿದರು.