ಶಿಡ್ಲಘಟ್ಟ: ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಉದ್ದೇಶದಿಂದ ಸೆ.26ರಂದು ಜಂಗಮಕೋಟೆ ಹೋಬಳಿಯ ಹೊಸಪೇಟೆ ಗ್ರಾಮ ಪಂಚಾಯಿತಿ ಆವರಣದಲ್ಲಿ ನಾಲ್ಕನೇ ವಾರದ ಪ್ರಜಾ ಸೇವೆ ಆಂದೋಲನ(Praja Seva Andolana) ಆಯೋಜಿಸಲಾಗಿದೆ ಎಂದು ತಹಸೀಲ್ದಾರ್ ಗಗನ ಸಿಂಧು ತಿಳಿಸಿದರು.
ನಗರದ ತಾಲೂಕು ಆಡಳಿತ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತವೇ ಜನರ ಬಳಿಗೆ ಬರುತ್ತಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ತಮ್ಮಲ್ಲೇ ಇಟ್ಟುಕೊಳ್ಳದೆ ಪ್ರಜಾ ಸೇವೆ ಆಂದೋಲನದ ಮೂಲಕ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆಯಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ: Praja Seva: ಕರ್ತವ್ಯದಲ್ಲಿ ಎಚ್ಚರ ವಹಿಸಿ, ಇಲ್ಲವಾದರೆ ಕ್ರಮ: ಡಿಸಿ ಜಿ. ಪ್ರಭು
ಜಂಗಮಕೋಟೆ ಹೋಬಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬೇಕು. ಕಂದಾಯ, ಕುಡಿಯುವ ನೀರು, ರಸ್ತೆ, ಚರಂಡಿ, ಪಿಂಚಣಿ, ದಾಖಲೆಗಳು ಸೇರಿದಂತೆ ವಿವಿಧ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಬಹುದು ಎಂದರು.
ಈಗಾಗಲೇ ನಡೆದ ಪ್ರಜಾ ಸೇವೆ ಕಾರ್ಯಕ್ರಮಗಳಲ್ಲಿ ಒಟ್ಟು 210 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಅವುಗಳನ್ನು ಪರಿಶೀಲಿಸಿ ನಿಯಮಾನುಸಾರ ವಿಲೇವಾರಿ ಮಾಡಲಾಗುವುದು. ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸರ್ಕಾರಿ ಸೇವೆ ಪಡೆಯುವುದು ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದ್ದು, ಸಮಸ್ಯೆ ಪರಿಹಾರಕ್ಕಾಗಿ ಕಾಯದೆ ಪ್ರಜಾ ಸೇವೆ ಆಂದೋಲನದ ವೇದಿಕೆಯನ್ನು ಬಳಸಿಕೊಂಡು ಅಹವಾಲುಗಳನ್ನು ಅಧಿಕಾರಿಗಳ ಗಮನಕ್ಕೆ ತರಬೇಕು. ಕಾರ್ಯಕ್ರಮದ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಗಗನ ಸಿಂಧು ಹೇಳಿದರು.