ಚಿಕ್ಕಬಳ್ಳಾಪುರ: ರಾಷ್ಟ್ರದ ಏಕತೆ, ಅಖಂಡತೆ ಮತ್ತು ಭದ್ರತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಜಾತಿ, ಧರ್ಮ, ಭಾಷೆ ಹಾಗೂ ಪ್ರಾದೇಶಿಕ ಭಿನ್ನತೆಗಳನ್ನು ಮೀರಿ ರಾಷ್ಟ್ರೀಯ ಭಾವೈಕ್ಯತೆ, ಸಹೋದರತ್ವ ಮತ್ತು ಪರಸ್ಪರ ಗೌರವದ ಮನೋಭಾವ ಬೆಳೆಸಿಕೊಳ್ಳುವ ಮೂಲಕ ದೇಶದ ಐಕ್ಯತೆಯನ್ನು ಬಲಪಡಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಪ್ರಭು ಕರೆ ನೀಡಿದರು.
ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.
ದೇಶದ ಏಕತೆ ಮತ್ತು ಸಮಗ್ರತೆ ಕಾಪಾಡುವ ಸಂಕಲ್ಪವನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದಲ್ಲಿ ಎಲ್ಲರೂ ಪರಸ್ಪರ ಸಹಬಾಳ್ವೆ, ಸಹಕಾರ ಮತ್ತು ಸೌಹಾರ್ದತೆಯಿಂದ ಬದುಕುವುದು ಅಗತ್ಯವಾಗಿದೆ. ರಾಷ್ಟ್ರೀಯ ಭಾವೈಕ್ಯತೆಯನ್ನು ಕಾಪಾಡುವ ಮೂಲಕ ಬಲಿಷ್ಠ ಹಾಗೂ ಸುರಕ್ಷಿತ ರಾಷ್ಟ್ರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂಬ ಸಂದೇಶವನ್ನು ರಾಷ್ಟ್ರೀಯ ಏಕತಾ ದಿನ ಸಾರುತ್ತದೆ ಎಂದರು.
ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ರಾಷ್ಟ್ರದ ಏಕತೆ, ಸಮಗ್ರತೆ ಹಾಗೂ ಭದ್ರತೆ ಕಾಪಾಡುವ ಪ್ರತಿಜ್ಞೆ ಸ್ವೀಕರಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಶೋಭಿತಾ, ತಹಸೀಲ್ದಾರ್ ರಶ್ಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.