Jaljeevan Mission: ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಿ: ಜಿ.ಪಂ. ಸಿಇಒ ಸೂಚನೆ
ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಉಪ ಕಾರ್ಯದರ್ಶಿ ಅವರ ನೇತೃತ್ವದಲ್ಲಿ ಅ.11ರಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿರ್ದೇಶನ ನೀಡಲಾಯಿತು.
-
ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕರಿಂದ ಸ್ವೀಕೃತವಾಗುವ ದೂರುಗಳನ್ನು 15ರಿಂದ 20 ದಿನಗಳೊಳಗೆ ಕಡ್ಡಾಯವಾಗಿ ಇತ್ಯರ್ಥಪಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಉಪ ಕಾರ್ಯದರ್ಶಿ ಅವರ ನೇತೃತ್ವದಲ್ಲಿ ಅ.11ರಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಳು ಹಾಗೂ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿರ್ದೇಶನ ನೀಡಲಾಯಿತು.
ಕುಡಿಯುವ ನೀರು, ನೈರ್ಮಲ್ಯ ಹಾಗೂ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರದೆ, ಸರ್ಕಾರದ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪಿಸುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಉಪ ಕಾರ್ಯದರ್ಶಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: Jain Mission Hospital: ಏ.12ಕ್ಕೆ 3 ಜೈನ್ ಮಿಷನ್ ಆಸ್ಪತ್ರೆಯ ಹೊಸ ಬ್ಲಾಕ್‌ಗಳ ಲೋಕಾರ್ಪಣೆ : ಸಂತೋಷ್ ಹೆಗ್ಡೆ ಭಾಗಿ
ಕುಡಿಯುವ ನೀರು, ನೈರ್ಮಲ್ಯಕ್ಕೆ ಮೊದಲ ಆದ್ಯತೆ
ಜಲಜೀವನ್ ಮಿಷನ್(Jaljeevan Mission) ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದರ ಜತೆಗೆ ಬೋರ್‌ವೆಲ್‌ಗಳ ನಿರ್ವಹಣೆ ಹಾಗೂ ಶುದ್ಧ ಕುಡಿಯುವ ನೀರಿನ ನಿರಂತರ ಪೂರೈಕೆಗೆ ಹೆಚ್ಚಿನ ಗಮನಹರಿಸಬೇಕು. ಗ್ರಾಮೀಣ ಜನರಿಗೆ ಕುಡಿಯುವ ನೀರಿನ ಕೊರತೆ ಯಾಗದಂತೆ ಮುನ್ನೆಚ್ಚರಿಕೆ ವಹಿಸಿ, ಸಮಸ್ಯೆಗಳು ಎದುರಾದ ತಕ್ಷಣ ಪರಿಹಾರ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.
ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಗ್ರಾಮಗಳ ಸ್ವಚ್ಛತೆ, ನೈರ್ಮಲ್ಯ ಹಾಗೂ ಘನತ್ಯಾಜ್ಯ ವಿಲೇವಾರಿ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಗ್ರಾಮ ಪಂಚಾಯಿತಿಗಳು ಸ್ವಚ್ಛತಾ ಕಾರ್ಯಗಳ ಮೇಲೆ ನಿರಂತರ ನಿಗಾ ಇರಿಸಿ, ಸಾರ್ವಜನಿಕ ಆರೋಗ್ಯಕ್ಕೆ ಪೂರಕವಾದ ವಾತಾವರಣ ನಿರ್ಮಿಸಬೇಕು ಎಂದು ನಿರ್ದೇಶಿಸಲಾಯಿತು.
ಕಾಮಗಾರಿಗಳ ಪ್ರಗತಿಗೆ ಕ್ಷೇತ್ರ ಭೇಟಿ ಕಡ್ಡಾಯ
ಕೆಡಿಪಿ ಸಭೆಗಳನ್ನು ನಿಯಮಿತವಾಗಿ ನಡೆಸುವುದರ ಜತೆಗೆ ಅಧಿಕಾರಿಗಳು ಕ್ಷೇತ್ರ ಭೇಟಿ ಕೈಗೊಂಡು ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಹಾಗೂ ಪ್ರಗತಿಯನ್ನು ಪರಿಶೀಲಿಸಬೇಕು. ಕಾಮಗಾರಿಗಳ ಜಿಯೋ-ಟ್ಯಾಗಿಂಗ್ ಪ್ರಕ್ರಿಯೆಯನ್ನು ಚುರುಕುಗೊಳಿಸಿ, ಅನುಷ್ಠಾನದ ಪ್ರತಿಯೊಂದು ಹಂತದಲ್ಲೂ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ತಿಳಿಸಲಾಯಿತು.
ವಿಬಿಜಿ ರಾಮ್ ಜಿ (VBG Ram G) ಯೋಜನೆಯಡಿ ಶಾಲಾ ಕಾಂಪೌಂಡ್ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಂಬಂಧಿಸಿದ ನೋಡಲ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಕಾಮಗಾರಿಗಳಲ್ಲಿ ವಿಳಂಬವಾಗದಂತೆ ಮೇಲ್ವಿಚಾರಣೆ ನಡೆಸಿ, ನಿಗದಿತ ಗುರಿಗಳನ್ನು ಕಾಲಮಿತಿಯೊಳಗೆ ಸಾಧಿಸುವಂತೆ ಸೂಚನೆ ನೀಡಲಾಯಿತು.
ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ
ಗ್ರಾಮ ಪಂಚಾಯಿತಿಗಳು ಸ್ಥಳೀಯ ಸ್ವಯಂ ಆಡಳಿತದ ಪ್ರಮುಖ ಘಟಕಗಳಾಗಿದ್ದು, ಜನರ ದೈನಂದಿನ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಸಾರ್ವಜನಿಕರ ದೂರುಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸುವುದರ ಜತೆಗೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸರ್ಕಾರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು. ಜನರಿಗೆ ಉತ್ತಮ ಸೇವೆ ಒದಗಿಸುವ ಮೂಲಕ ಗ್ರಾಮ ಪಂಚಾಯಿತಿಗಳ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು.