ಶಿಡ್ಲಘಟ್ಟ: ಬೇಸಿಗೆ ತೀವ್ರವಾಗುತ್ತಿರುವ ಹಿನ್ನೆಲೆ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ತಕ್ಷಣ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ತಹಶೀಲ್ದಾರ್ ಗಗನ ಸಿಂಧು ಹೇಳಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿ, ಯಾವುದೇ ಗ್ರಾಮದಲ್ಲಿ ನೀರಿನ ತೊಂದರೆ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಅಗತ್ಯವಿದ್ದಲ್ಲಿ ಕೊಳವೆಬಾವಿಗಳನ್ನು ತುರ್ತು ಆಧಾರದಲ್ಲಿ ಕೊರೆಸಲು ಕ್ರಮವಹಿಸಿ, ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆ ಮಾಡಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಿದ್ಧತೆ ಮಾಡಿಕೊಳ್ಳ ಬೇಕು ಎಂದರು.
ಇದನ್ನೂ ಓದಿ; Shidlaghatta News: ತಾಲೂಕು ದಂಡಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ: ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ
ಕಾರ್ಯನಿರ್ವಾಹಕ ಅಧಿಕಾರಿ ಹೇಮಾವತಿ ಆರ್ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿ ಕೊಳ್ಳಬೇಕು ಎಂದು ಹೇಳಿದರು. ನೀರಿನ ಟ್ಯಾಂಕ್‌ಗಳ ಸ್ವಚ್ಛತೆ ಹಾಗೂ ದುರಸ್ತಿ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ಸಮಸ್ಯೆ ಇರುವ ಪ್ರದೇಶಗಳಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದು ನೀರು ಪೂರೈಕೆ ಮಾಡುವುದಕ್ಕೂ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಜಾನುವಾರುಗಳಿಗೆ ಮೇವು ಕೊರತೆ ಉಂಟಾಗದಂತೆ ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೆ ತರಬೇಕು ಎಂದು ಸೂಚಿಸಿದರು.
ಈ ಸಭೆಯಲ್ಲಿ ಆಡಳಿತಾಧಿಕಾರಿ ಅಬಿದ ಎಸ್.ಎಸ್,ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ತಾಲ್ಲೂಕು ಯೋಜನಾಧಿಕಾರಿ ಅನಿಲ್ ಕುಮಾರ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.