ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜೀತ ವಿಮುಕ್ತರಿಗೆ ನಿವೇಶನ, ವಸತಿ ವ್ಯವಸ್ಥೆ ಕಲ್ಪಿಸಲು ಆದ್ಯತೆ: ಜಿಲ್ಲಾಧಿಕಾರಿ ಜಿ. ಪ್ರಭು

ಸಮಾಜದ ದುರ್ಬಲ ವರ್ಗಗಳ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿವೇಶನ ರಹಿತ ಮತ್ತು ವಸತಿ ರಹಿತ ಕುಟುಂಬಗಳ ನಿಖರ ಮಾಹಿತಿಯನ್ನು ತಾಲೂಕು ವಾರು ಸಂಗ್ರಹಿಸಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಒಂದು ವಾರದ ಒಳಗೆ ಸಲ್ಲಿಸಬೇಕು.

ಜೀತ ವಿಮುಕ್ತರಿಗೆ ನಿವೇಶನ, ವಸತಿ ವ್ಯವಸ್ಥೆ ಕಲ್ಪಿಸಲು ಆದ್ಯತೆ

ಜೀತ ವಿಮುಕ್ತರಿಗೆ ನಿವೇಶನ ಮಂಜೂರು ಮಾಡುವುದರ ಜೊತೆಗೆ ಅವರಿಗೆ ಆದ್ಯತೆ ಮೇರೆಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಪ್ರಭು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. -

Profile
Ashok Nayak Jul 15, 2026 11:13 PM

ಚಿಕ್ಕಬಳ್ಳಾಪುರ : ಜೀತ ವಿಮುಕ್ತರಿಗೆ ನಿವೇಶನ ಮಂಜೂರು ಮಾಡುವುದರ ಜೊತೆಗೆ ಅವರಿಗೆ ಆದ್ಯತೆ ಮೇರೆಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅವರು ಅಧಿಕಾರಿ ಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಾಜದ ದುರ್ಬಲ ವರ್ಗಗಳ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿವೇಶನ ರಹಿತ ಮತ್ತು ವಸತಿ ರಹಿತ ಕುಟುಂಬಗಳ ನಿಖರ ಮಾಹಿತಿಯನ್ನು ತಾಲೂಕು ವಾರು ಸಂಗ್ರಹಿಸಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಒಂದು ವಾರದ ಒಳಗೆ ಸಲ್ಲಿಸಬೇಕು. ಈ ಮಾಹಿತಿಯ ಆಧಾರದ ಮೇಲೆ ಅರ್ಹ ಫಲಾನುಭವಿಗಳಿಗೆ ನಿವೇಶನ ಹಾಗೂ ವಸತಿ ಯೋಜನೆಗಳ ಸೌಲಭ್ಯಗಳನ್ನು ಆದ್ಯತೆ ಮೇರೆಗೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಇದನ್ನೂ ಓದಿ: Chikkaballapur News: ರಾಮಮಂದಿರದಲ್ಲಿ ನೂರಾರು ಕೋಟಿ ಅವ್ಯವಹಾರದ ಆರೋಪ: ಸುಪ್ರೀಂ ಕೋರ್ಟ್ ತನಿಖೆಗೆ ಮುಂದಾಗಿದ್ದು, ಪ್ರಧಾನಿಗಳು ಮೌನ ಮುರಿದು ಸತ್ಯ ಹೇಳಲಿ: ಲಾಯರ್ ನಾರಾಯಣಸ್ವಾಮಿ ಆಗ್ರಹ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ದಲಿತ ಕುಂದುಕೊರತೆ ಸಭೆಗಳನ್ನು ಕಡ್ಡಾಯವಾಗಿ ಹಾಗೂ ನಿಯಮಿತವಾಗಿ ನಡೆಸಬೇಕು ಎಂದು ಸೂಚಿಸಿದರು. ಈ ಸಭೆಗಳ ಮೂಲಕ ಪರಿಶೀಲನೆಯನ್ನು ನಡೆಸಿ ಸಂಬಂಧಿತ ಇಲಾಖೆಗಳು ತ್ವರಿತ ಪರಿಹಾರ ಕಲ್ಪಿಸಬೇಕು.

ಗ್ರಾಮೀಣ ಪ್ರದೇಶಗಳಲ್ಲಿ ಮೂಲ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕಿದ್ದು, ಜಿಲ್ಲೆಯ ಎಲ್ಲ ಗ್ರಾಮಗಳಿಗೆ ಸ್ಮಶಾನಕ್ಕಾಗಿ ಅಗತ್ಯ ಭೂಮಿಯನ್ನು ಗುರುತಿಸಿ ಒದಗಿಸಬೇಕು ಈ ಕಾರ್ಯದಲ್ಲಿ ಯಾವುದೇ ವಿಳಂಬಕ್ಕೆ ಅವಕಾಶ ನೀಡದೆ ಸಂಬಂಧಿತ  ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ಹಾಗೂ ನ್ಯಾಯಾಂಗ ಪ್ರಕ್ರಿಯೆಯು ತ್ವರಿತಗತಿಯಲ್ಲಿ ಪೂರ್ಣಗೊಳ್ಳುವಂತೆ ಕ್ರಮವಹಿಸಬೇಕು ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಸರ್ಕಾರಿ ವಕೀಲರೊಂದಿಗೆ ನಿರಂತರ ಸಮನ್ವಯ ಸಾಧಿಸಿ ಪ್ರಕರಣಗಳ ಶೀಘ್ರ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ರಚಿಸಲಾಗಿರುವ ಕಾವಲು ಸಮಿತಿಗಳು ಚುರುಕಾಗಿ ಕಾರ್ಯನಿರ್ವಹಿಸಬೇಕು. ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸುವ ಮೂಲಕ ಪೋಕ್ಸೋ ಪ್ರಕರಣ ಗಳು ಹಾಗೂ ಬಾಲ್ಯ ವಿವಾಹಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಶಾಲೆಗಳು, ಕಾಲೇಜುಗಳಲ್ಲಿ, ಗ್ರಾಮ ಸಭೆಗಳು ಹಾಗೂ ಸಾರ್ವಜನಿಕ ಕಾರ್ಯ ಕ್ರಮಗಳ ಮೂಲಕ ಮಕ್ಕಳ ಹಕ್ಕುಗಳು, ಮಹಿಳಾ ಸುರಕ್ಷತೆ ಮತ್ತು ಕಾನೂನುಗಳ ಕುರಿತು ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ವ್ಯಾಪ್ತಿಯಲ್ಲಿರುವ ಎಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಅತ್ಯಂತ ಹೆಚ್ಚಿನ ಆದ್ಯತೆ ನೀಡಬೇಕು ಎಲ್ಲಾ ವಸತಿ ಶಾಲೆ ಮತ್ತು ನಿಲಯಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು.

ವಿದ್ಯಾರ್ಥಿಗಳ ಆಗಮನ, ನಿರ್ಗಮನ ಸೇರಿದಂತೆ ದೈನಂದಿನ ಚಲನ-ವಲನದ ಮಾಹಿತಿಯನ್ನು ದಾಖಲಿಸುವ ವಹಿಯನ್ನು ಸಮರ್ಪಕವಾಗಿ ನಿರ್ವಹಿಸಲಾಗುತ್ತಿದೆಯೇ ಎಂಬು ದನ್ನು ಮೇಲಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಸುರಕ್ಷತೆಗೆ ಸಂಬಂಧಿಸಿದ ಯಾವುದೇ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಮಾಜಿಕ ಕಲ್ಯಾಣ ಇಲಾಖೆಗಳ ವ್ಯಾಪ್ತಿಯಲ್ಲಿರುವ ವಸತಿ ನಿಲಯಗಳು, ಶಾಲಾ ಕಟ್ಟಡಗಳು ಹಾಗೂ ಇತರೆ ನಿರ್ಮಾಣ ಕಾಮಗಾರಿಗಳಿಗೆ ವಿಶೇಷ ಒತ್ತು ನೀಡಿ ನಿಗದಿತ ಅವಧಿಯೊಳಗೆ ಪೂರ್ಣ ಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು. ಕಾಮಗಾರಿಗಳ ಗುಣಮಟ್ಟ ಹಾಗೂ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಶೀಘ್ರವಾಗಿ ಒದಗಿಸುವಂತೆ ನಿರ್ದೇಶನ ನೀಡಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಕಲ್ಯಾಣ, ಸುರಕ್ಷತೆ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಗಹನವಾದ ಸಮಸ್ಯೆಗಳ ಅಧಿಕಾರಿಗಳ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ತೇಜಾನಂದರೆಡ್ಡಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದ್ದರು.