Chikkaballapur News: ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆ ವಿರೋಧಿಸಿ ಪ್ರತಿಭಟನೆ: ಸರ್ಕಾರಿ ಶಾಲೆಗಳ ಉಳಿವಿಗೆ ಜನಾಂದೋಲನಕ್ಕೆ ಕರೆ
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ನವಾಜ್, ಒಂದೇ ಒಂದು ಮಗು ಇದ್ದರೂ ಸರ್ಕಾರಿ ಶಾಲೆ ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವರು ಹೇಳುತ್ತಿದ್ದರೆ, ಮತ್ತೊಂದೆಡೆ ಶಾಲೆಗಳ ವಿಲೀನ ಮತ್ತು ಕೆಪಿಎಸ್ ಶಾಲೆಗಳ ಸ್ಥಾಪನೆಯ ಮೂಲಕ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
-
ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಹೆಸರಿನಲ್ಲಿ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಮ್ಯಾಗ್ನೆಟ್ ಯೋಜನೆ ಜಾರಿಗೊಳಿಸುವ ಮೂಲಕ ರಾಜ್ಯದ ಸುಮಾರು 45 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿ, ಯೋಜನೆ ವಿರೋಧಿಸಿ ಎಐಡಿಎಸ್ಓ ನೇತೃತ್ವದಲ್ಲಿ ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು, ಪೋಷಕರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ನವಾಜ್, ಒಂದೇ ಒಂದು ಮಗು ಇದ್ದರೂ ಸರ್ಕಾರಿ ಶಾಲೆ ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವರು ಹೇಳುತ್ತಿದ್ದರೆ, ಮತ್ತೊಂದೆಡೆ ಶಾಲೆಗಳ ವಿಲೀನ ಮತ್ತು ಕೆಪಿಎಸ್ ಶಾಲೆಗಳ ಸ್ಥಾಪನೆಯ ಮೂಲಕ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: Chikkaballapur News: ನ.12ರಂದು ರೈತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಗೌರಿಬಿದನೂರು ತಾಲೂಕಿನ ಹೊಸೂರಿನಲ್ಲಿ ಕೆಪಿಎಸ್(KPS) ಶಾಲೆ ಸ್ಥಾಪನೆಯಾದ ಬಳಿಕ ಜೋಡಿ ಬಿಸ್ಲಹಳ್ಳಿ, ಕುಂದಲಹಳ್ಳಿ ಸೇರಿದಂತೆ ವಿದ್ಯಾರ್ಥಿಗಳು ಈಗಾಗಲೇ ವ್ಯಾಸಂಗ ಮಾಡುತ್ತಿದ್ದ ಸುತ್ತಮುತ್ತಲಿನ ಗ್ರಾಮಗಳ ಶಾಲೆಗಳನ್ನು ಮುಚ್ಚಿ, ಮಕ್ಕಳನ್ನು ಕೆಪಿಎಸ್ ಶಾಲೆಗೆ ತೆರಳುವಂತೆ ಮಾಡಲಾಗಿದೆ. ಇದರಿಂದ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುವುದಲ್ಲದೆ, ಶಾಲೆಗಳು ಕ್ರಮೇಣ ಅಸ್ತಿತ್ವ ಕಳೆದುಕೊಳ್ಳುವ ಆತಂಕ ಎದುರಾಗಿದೆ ಎಂದರು.
ಏಷ್ಯನ್ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಜೊತೆ ರಾಜ್ಯ ಸರ್ಕಾರವು 2,500 ಕೋಟಿ ರೂ. ಸಾಲದ ಒಪ್ಪಂದ ಮಾಡಿಕೊಂಡಿದ್ದು, ಈ ಒಪ್ಪಂದದ ಷರತ್ತುಗಳು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಭವಿಷ್ಯದ ಬಗ್ಗೆ ಆತಂಕ ಮೂಡಿಸಿವೆ ಎಂದು ತಿಳಿಸಿದರು.
ಕೆಪಿಎಸ್ ಶಾಲೆಗಳನ್ನು ಸ್ಥಾಪಿಸಿ ಸುತ್ತಮುತ್ತಲಿನ ಸರ್ಕಾರಿ ಶಾಲೆಗಳನ್ನು ಮುಚ್ಚುವುದು, ಖಾಸಗಿ ಮತ್ತು ಕಾರ್ಪೊರೇಟ್ ಕಂಪನಿಗಳು ಶಾಲೆಗಳನ್ನು ದತ್ತು ಪಡೆದು ತಮ್ಮ ಅಗತ್ಯಕ್ಕೆ ಅನುಗುಣವಾಗಿ ಪಠ್ಯಕ್ರಮ ರೂಪಿಸುವುದು, ಮುಂದಿನ ದಿನಗಳಲ್ಲಿ ಕೆಪಿಎಸ್ ಶಾಲೆಗಳಿಗೆ ಮಾತ್ರ ಶಿಕ್ಷಕರ ನೇಮಕಾತಿ ಮಾಡುವುದು ಹಾಗೂ 2030ರ ವೇಳೆಗೆ ಕೆಪಿಎಸ್ ಶಾಲೆಗಳನ್ನು ಖಾಸಗಿ ಕಂಪನಿಗಳಿಗೆ ವಹಿಸುವ ಉದ್ದೇಶ ಹೊಂದಲಾಗಿದೆ ಎಂಬ ಆರೋಪಗಳನ್ನು ಮುಂದಿಟ್ಟರು.
ಈ ರೀತಿಯ ಕ್ರಮಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಖಾಸಗೀಕರಣಕ್ಕೆ ಅವಕಾಶ ಮಾಡಿಕೊಟ್ಟು, ಸಾರ್ವಜನಿಕ ಶಿಕ್ಷಣದ ಹೊಣೆಗಾರಿಕೆಯಿಂದ ಸರ್ಕಾರ ಹಿಂದೆ ಸರಿಯುವ ಅಪಾಯವಿದೆ. ಬಡವರು, ಗ್ರಾಮೀಣ ಮಕ್ಕಳು ಮತ್ತು ಸಾಮಾನ್ಯ ಕುಟುಂಬಗಳ ಮಕ್ಕಳಿಗೆ ಶಿಕ್ಷಣದ ಹಕ್ಕು ಹಾಗೂ ಅವಕಾಶ ಗಳನ್ನು ಉಳಿಸಬೇಕಾದರೆ ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು. ಈ ನಿಟ್ಟಿನಲ್ಲಿ ಪ್ರತಿಯೊಂದು ಗ್ರಾಮದಲ್ಲೂ ಸರ್ಕಾರಿ ಶಾಲೆಗಳ ಉಳಿವಿಗಾಗಿ ಬಲಿಷ್ಠ ಜನಾಂದೋಲನ ರೂಪಿಸಬೇಕು ಎಂದು ಕರೆ ನೀಡಿದರು.
ಪ್ರತಿಭಟನೆಯಲ್ಲಿ ಎಐಡಿಎಸ್ಓ ಚಿಕ್ಕಬಳ್ಳಾಪುರ ಜಿಲ್ಲಾ ಸಂಚಾಲಕಿ ತುಳಸಿ, ಬೊಮ್ಮೇನಹಳ್ಳಿ ಗ್ರಾಮದ ನಿವಾಸಿಗಳು, ಪೋಷಕರು ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು.