Shidlaghatta News: ಎಸ್‌ಐಆರ್ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅಗತ್ಯ, ಮತದಾನದ ಹಕ್ಕು ಉಳಿಸಿಕೊಳ್ಳಿ: ತಹಶೀಲ್ದಾರ್ ಗಗನ ಸಿಂಧು
ಜಂಟಿ ಕೃಷಿ ನಿರ್ದೇಶಕರು ಹಾಗೂ ಮತದಾರರ ನೋಂದಣಾಧಿಕಾರಿ ಎಸ್.ಎಸ್. ಅಬೀದ್ ಮಾತನಾಡಿ, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹ ಹೆಸರುಗಳು ಉಳಿಯದಂತೆ ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿದೆ. ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಬಿಎಲ್‌ಒ ಗಳಿಗೆ ಸಲ್ಲಿಸಿ ಸಹಕರಿಸಿದರೆ ಮಾತ್ರ ಶುದ್ಧ ಮತ್ತು ನಿಖರ ಮತದಾರರ ಪಟ್ಟಿ ಸಿದ್ಧಪಡಿಸಲು ಸಾಧ್ಯವಾಗು ತ್ತದೆ
-
ಶಿಡ್ಲಘಟ್ಟ: ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಐಆರ್)-2028ರ ಪ್ರಕ್ರಿಯೆ ಯಶಸ್ವಿಯಾಗಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. 18 ವರ್ಷ ಪೂರೈಸಿದ ಪ್ರತಿಯೊಬ್ಬ ಅರ್ಹ ನಾಗರಿಕರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಹೊಸ ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ ಸೇರಿದಂತೆ ಅಗತ್ಯ ದಾಖಲೆಗಳನ್ನು ನಿಗದಿತ ಅವಧಿ ಯೊಳಗೆ ಬಿಎಲ್‌ಒಗಳಿಗೆ ಸಲ್ಲಿಸಿ ಮತದಾನದ ಹಕ್ಕು ಉಳಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಗಗನ ಸಿಂಧು ಹೇಳಿದರು.
ನಗರದ ನೆಹರು ಕ್ರೀಡಾಂಗಣದಲ್ಲಿ ಸೋಮವಾರ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದಕ್ಕೂ ಮುನ್ನ ನಗರದ ತಾಲ್ಲೂಕು ಕಚೇರಿಯಿಂದ ತಹಶೀಲ್ದಾರ್ ಗಗನ ಸಿಂಧು, ಜಂಟಿ ಕೃಷಿ ನಿರ್ದೇಶಕರು ಹಾಗೂ ಮತದಾರರ ನೋಂದಣಾಧಿಕಾರಿ ಎಸ್.ಎಸ್. ಅಬೀದ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೇಮಾವತಿ ಆರ್, ನಗರಸಭೆ ಪೌರಾಯುಕ್ತೆ ಅಮೃತ ಜಿ, ಸಿಡಿಪಿಓ ವಿದ್ಯಾ ವಸ್ತ್ರದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಜಾಥಾ ನೆಹರು ಕ್ರೀಡಾಂಗಣ ತಲುಪಿತು. ಜಾಥಾದಲ್ಲಿ ಅಧಿಕಾರಿಗಳು, ಬಿಎಲ್‌ಒಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಮತದಾನದ ಮಹತ್ವ ಸಾರುವ ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಿದರು.
ಇದನ್ನೂ ಓದಿ: Shidlaghatta Crime: ಅಕ್ರಮವಾಗಿ ಸಾಗಿಸುತ್ತಿದ್ದ ಗೋಧಿ ಕ್ಯಾಂಟರ್ ಸೆರೆ; ಇಬ್ಬರ ವಿರುದ್ಧ ಪ್ರಕರಣ ದಾಖಲು
ಜಂಟಿ ಕೃಷಿ ನಿರ್ದೇಶಕರು ಹಾಗೂ ಮತದಾರರ ನೋಂದಣಾಧಿಕಾರಿ ಎಸ್.ಎಸ್. ಅಬೀದ್ ಮಾತನಾಡಿ, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹ ಹೆಸರುಗಳು ಉಳಿಯದಂತೆ ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿದೆ. ಸಾರ್ವಜನಿಕರು ಅಗತ್ಯ ದಾಖಲೆ ಗಳನ್ನು ಬಿಎಲ್‌ಒಗಳಿಗೆ ಸಲ್ಲಿಸಿ ಸಹಕರಿಸಿದರೆ ಮಾತ್ರ ಶುದ್ಧ ಮತ್ತು ನಿಖರ ಮತದಾರರ ಪಟ್ಟಿ ಸಿದ್ಧಪಡಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮತದಾರರ ಜಾಗೃತಿ ಪ್ರತಿಜ್ಞೆ ಬೋಧಿಸಲಾಯಿತು. ಬಳಿಕ ವಿದ್ಯಾರ್ಥಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿ "SIR" ಎಂಬ ಮಾನವ ಸರಪಳಿ ರಚಿಸಿದ್ದು, ಡ್ರೋನ್ ಚಿತ್ರೀಕರಣ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೇಮಾವತಿ ಆರ್, ನಗರಸಭೆ ಪೌರಾಯುಕ್ತೆ ಅಮೃತ ಜಿ, ಸಿಡಿಪಿಓ ವಿದ್ಯಾ ವಸ್ತ್ರದ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಬಿಎಲ್‌ಒಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.