ಶಿಡ್ಲಘಟ್ಟ: ಸರ್ಕಾರದ ಸೇವೆ ಮತ್ತು ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶ ದಿಂದ ರಾಜ್ಯ ಸರಕಾರ ಪ್ರಜಾ ಸೇವೆ(Praja Seva) ಆಂದೋಲನ ಹಮ್ಮಿಕೊಳ್ಳಲಾಗಿದೆ. ಶಿಡ್ಲಘಟ್ಟ ತಾಲೂಕಿನಲ್ಲಿ ಇದು ಎಂಟನೇ ಕಾರ್ಯಕ್ರಮವಾಗಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್(MLA B.N. Ravikumar) ತಿಳಿಸಿದರು.
ತಾಲೂಕಿನ ಚೀಮಂಗಲ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ 'ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ' ತಾಲೂಕು ಮಟ್ಟದ ಪ್ರಜಾ ಸೇವೆ ಆಂದೋ ಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಈವರೆಗೆ ತಾಲೂಕಿನಲ್ಲಿ 1037 ಅರ್ಜಿಗಳು ಸಲ್ಲಿಕೆಯಾಗಿವೆ. ಅವುಗಳಲ್ಲಿ 280 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, ಉಳಿದ ಅರ್ಜಿ ಗಳನ್ನು ಪರಿಶೀಲಿಸಿ ಪರಿಹಾರ ಕಲ್ಪಿಸುವಂತೆ ಜಿಲ್ಲಾಡಳಿತ ತಾಲೂಕು ಆಡಳಿತಕ್ಕೆ ಸೂಚಿಸಿಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: Praja Seva: ಮೂರು ತಿಂಗಳಲ್ಲಿ 80 ಸಾವಿರ ಪೌತಿ ಖಾತೆ ಅರ್ಜಿ ವಿಲೇವಾರಿ: ಜಿಲ್ಲಾಧಿಕಾರಿ ಜಿ.ಪ್ರಭು
ಕ್ಷೇತ್ರದ ಮತದಾರರ ಆಶೀರ್ವಾದದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳ ಪೈಕಿ ಶಿಡ್ಲಘಟ್ಟ ಅತ್ಯಂತ ಹಿಂದುಳಿದ ತಾಲೂಕಾಗಿದೆ.ಇದನ್ನು ಮನಗಂಡು ಸರಕಾರ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಪ್ರಸ್ತುತ ತಾಲೂಕಿನ 41 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಜನರಿಗೆ ಸಮರ್ಪಕ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದರು.
ರಾಜ್ಯದಲ್ಲಿ ರಸ್ತೆ ಅಭಿವೃದ್ಧಿಗಾಗಿ 10 ಸಾವಿರ ಕೋಟಿ ರೂ. ಅನುದಾನ ಲಭ್ಯವಿದೆ ಎಂದು ಜಿಲ್ಲಾಧಿ ಕಾರಿಗಳು ತಿಳಿಸಿದ್ದಾರೆ.ಇದರಲ್ಲಿ ಶಿಡ್ಲಘಟ್ಟ ಕ್ಷೇತ್ರದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ ಅವರು ಈ ಸಂಬಂಧ ಸರ್ಕಾರವನ್ನು ಕೂಡ ಒತ್ತಾಯಿಸುತ್ತೇನೆ ಎಂದರು.
ಕ್ಷೇತ್ರದ ಸುಮಾರು 56 ಸಾವಿರ ಕುಟುಂಬಗಳಿಗೆ ಪ್ರಜಾ ಸೇವೆ ಆಂದೋಲನದ ಮೂಲಕ ವಿವಿಧ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವ ಗುರಿ ಹೊಂದಲಾಗಿದೆ. ಸಾರ್ವಜನಿಕರು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು, ತಮ್ಮ ಸಮಸ್ಯೆಗಳಿಗೆ ಮುಂದಿನ 30 ದಿನಗಳೊಳಗೆ ಪರಿಹಾರ ಕಂಡುಕೊಳ್ಳಲು ಅರ್ಜಿಗಳನ್ನು ಸಲ್ಲಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ಮಾತನಾಡಿ ಜಿಲ್ಲೆಯಲ್ಲಿ ಭೂ ಗ್ಯಾರಂಟಿ ಯೋಜನೆಯಡಿ ಒಂದು ವಾರದಲ್ಲಿ 3600 ಅರ್ಜಿಗಳು ಸ್ವೀಕೃತವಾಗಿದ್ದು ಅವನ್ನು ಶೀಘ್ರವೇ ವಿಲೇ ಮಾಡಲು ಕ್ರಮವಹಿಸಲಾಗಿದೆ. ಗ್ರಾಮಠಾಣಾ ವ್ಯಾಪ್ತಿಯ ಮನೆಗಳಿಗೆ ಯಾವುದೇ ಹಕ್ಕುಪತ್ರಗಳಿರಲಿಲ್ಲ.
ಹೌಸ್ ಲಿಸ್ಟ್ ಹಾಗೂ 2025ಕ್ಕೂ ಮೊದಲು ನಿರ್ಮಿಸಿರುವ ಮನೆಗಳ ವಿದ್ಯುತ್ ಬಿಲ್ ಹಾಗೂ ಸರ್ವೆ ನಂಬರ್ ಹೊಂದಿರುವ ಮನೆಗಳಿಗೂ ಕೇವಲ ೨೨ ದಿನಗಳಲ್ಲಿ ಇ-ಸ್ವತ್ತು ಪಡೆಯಲು ಅವಕಾಶವಿದೆ. ಶಿಡ್ಲಘಟ್ಟದಲ್ಲಿ 700ಕ್ಕೂ ಅಧಿಕ ಅರ್ಜಿಗಳು ಬಂದಿವೆ.ಇನ್ನೂ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗು ವಂತೆ ನೋಡಿಕೊಂಡು ಹಕ್ಕುಪತ್ರ ವಿತರಣೆ ಮಾಡಲಾಗುವುದು. ಸಾರ್ವಜನಿಕರು ಈ ಸೌಲಭ್ಯ ವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ತಿಳಿಸಿದರು.
ವಿಬಿ-ಜಿ ರಾಮ್ ಜಿ ಯೋಜನೆಯ ಸೌಲಭ್ಯಗಳನ್ನು ಗ್ರಾಮೀಣ ಜನರು ಬಳಸಿಕೊಳ್ಳಬೇಕು. ಗ್ರಾಮಗಳಲ್ಲಿರುವ ವೀರಗಲ್ಲುಗಳ ಸಂರಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು. ಬಸ್ ನಿಲ್ದಾಣ, ಉದ್ಯಾನವನ ಹಾಗೂ ವಾಹನ ನಿಲುಗಡೆ ಶೆಡ್ಗಳ ನಿರ್ಮಾಣಕ್ಕೂ ಯೋಜನೆಯಡಿ ಅವಕಾಶವಿದೆ ಎಂದರು.
ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಯೋಜನೆಯ ಮೊದಲ ಮತ್ತು ಎರಡನೇ ಹಂತದಲ್ಲಿ ಕ್ರಮವಾಗಿ 225 ಕೋಟಿ ಹಾಗೂ 132 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಗುಂಡಿಬಿದ್ದಿರುವ ರಸ್ತೆಗಳನ್ನು ಗುರುತಿಸಿ ದುರಸ್ತಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ರಸ್ತೆ ಬದಿಗಳಲ್ಲಿ ತೇಗದ ಮರಗಳನ್ನು ಬೆಳೆಸುವ ಯೋಜನೆಯಿದ್ದು, ಮೂರು ವರ್ಷಗಳ ಅವಧಿ ಯಲ್ಲಿ 400 ಎಕರೆ ಪ್ರದೇಶದಲ್ಲಿ ಸಸಿಗಳನ್ನು ಬೆಳೆಸುವ ಗುರಿ ಹೊಂದಲಾಗಿದೆ. ಮಳೆಗಾಲದಲ್ಲಿ ಗ್ರಾಮ ಪಂಚಾಯಿತಿಗಳಿಗೆ ಅರ್ಜಿ ಸಲ್ಲಿಸಿ ಯೋಜನೆಯ ಸೌಲಭ್ಯ ಪಡೆಯಬಹುದು ಎಂದು ತಿಳಿಸಿದರು.
ಮಕ್ಕಳಲ್ಲಿರುವ ಕಲಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಕ್ಕಳ ಕಲಾ ಉತ್ಸವ ಆಯೋಜಿಸಲಾಗುತ್ತಿದೆ. ಈ ಸ್ಪರ್ಧೆಗಳಲ್ಲಿ ಭಾಗವಹಿಸಿದ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಸೇರಿದಂತೆ ವಿವಿಧ ಸಾಧನೆಗಳನ್ನು ಮಾಡಿದ್ದಾರೆ ಎಂದು ಹೇಳಿದರು.
ಸಭೆಯಲ್ಲಿ ಶಾಸಕ ಬಿ.ಎನ್.ರವಿಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಡಾ.ವೈ.ನವೀನ್ ಭಟ್, ತಹಶೀಲ್ದಾರ್ ಗಗನ್ ಸಿಂಧು, ಇಒ ಹೇಮಾವತಿ, ಸರ್ಕಲ್ ಇನ್ಸ್ಪೆಕ್ಟರ್ ಆನಂದ್ ಕುಮಾರ್, ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ಮುಖಂಡರಾದ ಮೇಲೂರು ಮಂಜುನಾಥ, ಹೆಣ್ಣೂರು ಸುಬ್ರಹ್ಮಣ್ಯ, ಪಟೇಲ್ ನಾರಾಯಣಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.