ಚಿಕ್ಕಬಳ್ಳಾಪುರ: ಬರದ ಪರಿಸ್ಥಿತಿಯಲ್ಲಿ ರೈತರು ಹಾಗೂ ಗ್ರಾಮೀಣ ಜನರಿಗೆ ಅಗತ್ಯ ಸಾಲ ಸೌಲಭ್ಯ ಗಳು ಸಕಾಲದಲ್ಲಿ ದೊರೆಯುವಂತೆ ಬ್ಯಾಂಕ್‌ಗಳು ಮತ್ತು ಸಂಬಂಧಿಸಿದ ಇಲಾಖೆಗಳು ಸಮನ್ವಯ ದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾ ಧಿಕಾರಿ ಡಾ.ವೈ.ನವೀನ್ ಭಟ್ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್‌ನ ಸರ್ ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ರೈತರಿಗೆ ಕೃಷಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಸಾಲ ಸೌಲಭ್ಯ ಕಲ್ಪಿಸುವಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಪ್ರಮುಖವಾಗಿದೆ. ಅರ್ಹ ರೈತರಿಗೆ ಕೆಸಿಸಿ ಸೌಲಭ್ಯ ತಲುಪಿಸಲು ಬ್ಯಾಂಕ್‌ಗಳು ಹಾಗೂ ಇಲಾಖೆಗಳು ವಿಶೇಷ ಅಭಿಯಾನ ಕೈಗೊಳ್ಳಬೇಕು ಎಂದರು.
ಕೃಷಿಯ ಜತೆಗೆ ತೋಟಗಾರಿಕೆ, ರೇಷ್ಮೆ ಹಾಗೂ ಹಾಲು ಉತ್ಪಾದನೆಯಲ್ಲಿ ತೊಡಗಿರುವ ರೈತರಿಗೂ ಕೆಸಿಸಿ ಸಾಲ ದೊರೆಯುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಜಿಲ್ಲೆಯ ಸುಮಾರು 87 ಸಾವಿರ ಜಾನುವಾರು ಪಾಲಕ ರೈತರು ಸೇರಿದಂತೆ ಅರ್ಹರಿಗೆ ಲಭ್ಯವಿರುವ ಸಾಲ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಕೆಸಿಸಿ ಮೂಲಕ ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ದೊರೆಯುವುದರಿಂದ ಬೀಜ, ರಸಗೊಬ್ಬರ, ಕೀಟನಾಶಕ ಹಾಗೂ ಕೃಷಿ ಕಾರ್ಮಿಕ ವೆಚ್ಚ ಸೇರಿದಂತೆ ಅಗತ್ಯ ಖರ್ಚುಗಳನ್ನು ನಿರ್ವಹಿಸಲು ರೈತರಿಗೆ ಅನುಕೂಲವಾಗಲಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಇದರ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಜಮೆಯಾಗುವ ಹಣವನ್ನು ಯಾವುದೇ ಕಾರಣಕ್ಕೂ ಸಾಲದ ಕಂತು ಅಥವಾ ಬಡ್ಡಿಗೆ ಜಮೆ ಮಾಡಬಾರದು. ಸರ್ಕಾರದ ಉದ್ದೇಶದಂತೆ ಆ ಹಣವನ್ನು ಕುಟುಂಬದ ಅಗತ್ಯಗಳಿಗೆ ಬಳಸಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಸಾಲ ಯೋಜನೆಯ ಪ್ರಗತಿ, ಸರ್ಕಾರದ ಪ್ರಾಯೋಜಿತ ಯೋಜನೆಗಳಡಿ ಸಾಲ ವಿತರಣೆ ಹಾಗೂ ವಸೂಲಿ, ಅನುತ್ಪಾದಕ ಸಾಲಗಳ ಸ್ಥಿತಿ, ಮುದ್ರಾ, ಸ್ವನಿಧಿ, ವಿಶ್ವಕರ್ಮ, ಜನಧನ್ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲಾಯಿತು.
ಸಾಮಾಜಿಕ ಭದ್ರತಾ ಯೋಜನೆಗಳ ಗುರಿ ಸಾಧನೆಗೂ ಒತ್ತು ನೀಡುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದ ಅವರು, ಬರದ ಸಂದರ್ಭದಲ್ಲಿ ಜನರಿಗೆ ಆರ್ಥಿಕ ನೆರವು ಒದಗಿಸುವ ನಿಟ್ಟಿನಲ್ಲಿ ಇಲಾಖೆಗಳು ಹಾಗೂ ಬ್ಯಾಂಕ್‌ಗಳು ಪರಿಣಾಮಕಾರಿ ಸಮನ್ವಯ ಸಾಧಿಸಬೇಕು ಎಂದರು.
ಸಭೆಯಲ್ಲಿ ಆರ್‌ಬಿಐ, ಲೀಡ್ ಬ್ಯಾಂಕ್, ನಬಾರ್ಡ್, ಕೃಷಿ, ತೋಟಗಾರಿಕೆ, ರೇಷ್ಮೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಿಬ್ಬಂದಿ ಉಪಸ್ಥಿತರಿದ್ದರು.