ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ.ಭಾಸ್ಕರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿಯೊಂದು ಇಲಾಖೆಯಲ್ಲಿ ಅಲ್ಪಸಂಖ್ಯಾತರಿಗೆ ಲಭ್ಯವಿರುವ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆ ಸಮರ್ಪಕ ಜಾಗೃತಿ ಮೂಡಿಸಬೇಕು. ಸರ್ಕಾರದ ಸೌಲಭ್ಯಗಳು ನೇರವಾಗಿ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಬಿಂದು ಮಣಿ ಮಾತನಾಡಿ, ಮೌಲಾನಾ ಅಬು ಕಲಾಂ ಆಜಾದ್ ಶಾಲೆಗೆ ಹೊಸ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ ದೊರೆತಿದ್ದು, ನಗರ ವ್ಯಾಪ್ತಿಯ 3 ಕಿಲೋಮೀಟರ್ ಒಳಗೆ ನಿವೇಶನ ಒದಗಿಸುವಂತೆ ಮನವಿ ಮಾಡಲಾಗಿದೆ ಎಂದರು. ಈ ಸಂಬಂಧ ಸ್ಥಳಾವಕಾಶಕ್ಕಾಗಿ ಶಾಸಕ ಪ್ರದೀಪ್ ಈಶ್ವರ್(MLA Pradeep Eshwar) ಅವರಿಗೂ ವಿನಂತಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಉರ್ದು ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆ ಕುಸಿಯುತ್ತಿರುವುದು ಗಮನಾರ್ಹ ವಾಗಿದೆ. ಮುಸ್ಲಿಂ ಸಮುದಾಯದ ಜವಾಬ್ದಾರಿಯುತ ವ್ಯಕ್ತಿಗಳು ಈ ವಿಷಯದಲ್ಲಿ ಆಸಕ್ತಿ ವಹಿಸಿ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ದಾಖಲಿಸುವಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.ಕಸ್ತೂರಬಾ ಹಾಸ್ಟೆಲ್ 75 ವಿದ್ಯಾರ್ಥಿಗಳ ಸಾಮರ್ಥ್ಯ ಹೊಂದಿದ್ದರೂ, ಪ್ರಸ್ತುತ ಕೇವಲ ಒಬ್ಬ ವಿದ್ಯಾರ್ಥಿ ಮಾತ್ರ ಪ್ರವೇಶ ಪಡೆದಿರುವುದು ವಿಷಾದಕರ ಸಂಗತಿ ಎಂದು ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಸದಸ್ಯ ಅಜಮ್ ಪಾಷಾ ಅಲ್ಪಸಂಖ್ಯಾತರು ಎದುರಿಸುತ್ತಿರುವ ಸಮಸ್ಯೆಗಳನ್ನು ಜಿಲ್ಲಾಡಳಿತದ ಗಮನಕ್ಕೆ ತಂದು ಶೀಘ್ರ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದರು.ಸಭೆಯಲ್ಲಿ ಅಲಿಪುರದ ಸದಸ್ಯ ಸಖಿ ಅಹ್ಮದ್,ರಾಕೇಶ್ ಜೈನ್ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.