ಚಿಕ್ಕಬಳ್ಳಾಪುರ: ಗಡಿಭಾಗ ಚಿಂತಾಮಣಿ ನಗರದಲ್ಲಿ ನ.19 ಮತ್ತು 20ರಂದು ಎರಡು ದಿನಗಳ ಕಾಲ 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ(Kannada Sahitya Sammelana)ವನ್ನು ಅದ್ದೂರಿ ಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಸಮ್ಮೇಳನದ ಉದ್ಘಾಟನೆ ಹಾಗೂ ಮೆರವಣಿಗೆಯಲ್ಲಿ ಸುಮಾರು 5 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ವೈಭವವನ್ನು ಸಾರುವಂತೆ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಮ್ಮೇಳನದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮ್ಮೇಳನಕ್ಕೆ ಆಗಮಿಸುವ ಸಾರ್ವಜನಿಕ ರಿಗೆ ಊಟ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು. ಭಾಗವಹಿಸುವ ಕಲಾವಿದರಿಗೆ ವಸತಿ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ. ಜಿಲ್ಲೆಯಾದ್ಯಂತ 15ರಿಂದ 20 ಸಾವಿರ ಕರಪತ್ರಗಳನ್ನು ವಿತರಿಸುವುದರ ಜೊತೆಗೆ ಸ್ವಚ್ಛತಾ ವಾಹಿನಿಗಳ ಧ್ವನಿವರ್ಧಕಗಳ ಮೂಲಕ ಪ್ರಚಾರ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ: Kannada Sahitya Parishad: ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ
ಸಮ್ಮೇಳನದ ಯಶಸ್ಸಿಗೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ. ವೇದಿಕೆ ನಿರ್ಮಾಣ, ಕವಿಗೋಷ್ಠಿ, ಪುಸ್ತಕ ಪ್ರದರ್ಶನ, ಮೆರವಣಿಗೆ, ಅಲಂಕಾರ, ಆಸನ ವ್ಯವಸ್ಥೆ, ಪೊಲೀಸ್ ಭದ್ರತೆ, ಆಹ್ವಾನ ಪತ್ರಿಕೆಗಳ ಮುದ್ರಣ ಮತ್ತು ವಿತರಣೆ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಶಿಷ್ಟಾಚಾರ ಪಾಲನೆಯೊಂದಿಗೆ ಕಾರ್ಯಕ್ರಮ ಗಳು ಸುಗಮವಾಗಿ ನಡೆಯುವಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಮಾಜಿ ಸಚಿವ ಹಾಗೂ ಶಾಸಕ ಡಾ.ಎಂ.ಸಿ.ಸುಧಾಕರ್(MLA Dr M C Sudhakar) ಮಾತನಾಡಿ, ಚಿಂತಾಮಣಿಯಲ್ಲಿ ಸಾಹಿತ್ಯ ಸಮ್ಮೇಳನ ಆಯೋಜಿಸಲು ಕಳೆದ 15 ದಿನಗಳಿಂದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತಿನಿಂದ ಈಗಾಗಲೇ 5 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಜಾನಪದ ಕಲಾವಿದ ಗೊಲ್ಲಹಳ್ಳಿ ಶಿವಪ್ರಸಾದ್ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸಲಿದ್ದು, ಮಾಜಿ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಉದ್ಘಾಟನಾ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.
ನ.19ರಂದು ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ, 9.30ರಿಂದ 11 ಗಂಟೆಯವರೆಗೆ ಕನ್ನಡದ ನಾಡು-ನುಡಿಯ ವೈಭವ ಸಾರುವ ಮೆರವಣಿಗೆ ನಡೆಯಲಿದೆ. ಬಳಿಕ ವೇದಿಕೆ ಕಾರ್ಯಕ್ರಮಗಳು ಹಾಗೂ ಕವಿಗೋಷ್ಠಿಗಳು ಜರುಗಲಿವೆ. ಎರಡನೇ ದಿನದ ಸಮಾರೋಪ ಸಮಾರಂಭವು ಕೈವಾರ ಯೋಗಿ ನಾರೇಯಣ ಮಠದ ಧರ್ಮಾಧಿಕಾರಿ ಜಯರಾಮ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಜಿಲ್ಲೆಯ ಜನಪ್ರತಿನಿಧಿಗಳು, ಸಾಹಿತಿಗಳು, ಲೇಖಕರು, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರೊ. ಕೋಡಿರಂಗಪ್ಪ ಮಾತನಾಡಿ, ಎರಡು ದಿನಗಳ ಸಮ್ಮೇಳನದಲ್ಲಿ ಜಿಲ್ಲೆಯ ಹಾಗೂ ನಾಡಿನ ಖ್ಯಾತ ಸಾಧಕರು, ಹಿರಿಯ ಕವಿಗಳು, ಸಾಹಿತಿಗಳು, ಲೇಖಕರು ಮತ್ತು ಕಲಾವಿದರು ಭಾಗವಹಿಸಲಿದ್ದಾರೆ. ಸಾಹಿತ್ಯ ಚರ್ಚೆ, ಕವಿಗೋಷ್ಠಿ, ಸಾಂಸ್ಕೃತಿಕ ನೃತ್ಯ ಪ್ರದರ್ಶನ ಹಾಗೂ ಸಾಮಾಜಿಕ ಪರಿವರ್ತನೆಯ ಆಶಯ ಹೊಂದಿರುವ ನಾಟಕಗಳು ಸಮ್ಮೇಳನದ ವಿಶೇಷ ಆಕರ್ಷಣೆಯಾಗಲಿವೆ. ಜಿಲ್ಲೆಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಕೆ.ಆರ್.ಶೋಭಿತಾ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅತಿಕ್ ಪಾಷಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಆರ್.ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.