Gudibande News: ಗುಡಿಬಂಡೆ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ: ಜನರ ಸಮಸ್ಯೆ ಆಲಿಸಿದ ಜಿ.ಪ್ರಭು
ತಾಲೂಕು ಕಚೇರಿಗೆ ಆಗಮಿಸಿದ ಜಿಲ್ಲಾಧಿಕಾರಿಗಳು ಮೊದಲು ಟಪಾಲು ವಿಭಾಗ, ದಾಖಲೆ ಸಂಗ್ರಹ ಕೊಠಡಿ ಸೇರಿದಂತೆ ವಿವಿಧ ವಿಭಾಗಗಳನ್ನು ಪರಿಶೀಲಿಸಿ, ದಾಖಲೆಗಳ ನಿರ್ವಹಣೆ ಮತ್ತು ಆಡಳಿತಾತ್ಮಕ ಕಾರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಬಳಿಕ ಸಭಾಂಗಣ ದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಸಿದರು.
-
ಗುಡಿಬಂಡೆ: ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಜಿ.ಪ್ರಭು( Chikkaballapur District Collector G. Prabhu) ಅವರು ಗುಡಿಬಂಡೆ ತಾಲೂಕು ಕಚೇರಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಕಚೇರಿಯ ವಿವಿಧ ವಿಭಾಗಗಳ ಕಾರ್ಯನಿರ್ವಹಣೆ ಪರಿಶೀಲಿಸಿದರು. ಭೇಟಿ ವೇಳೆ ಸಾರ್ವಜನಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳ ಕುರಿತು ವಿವರ ವಾಗಿ ಮಾಹಿತಿ ಪಡೆದರು.
ತಾಲೂಕು ಕಚೇರಿಗೆ ಆಗಮಿಸಿದ ಜಿಲ್ಲಾಧಿಕಾರಿಗಳು ಮೊದಲು ಟಪಾಲು ವಿಭಾಗ, ದಾಖಲೆ ಸಂಗ್ರಹ ಕೊಠಡಿ ಸೇರಿದಂತೆ ವಿವಿಧ ವಿಭಾಗಗಳನ್ನು ಪರಿಶೀಲಿಸಿ, ದಾಖಲೆಗಳ ನಿರ್ವಹಣೆ ಮತ್ತು ಆಡಳಿತಾತ್ಮಕ ಕಾರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಬಳಿಕ ಸಭಾಂಗಣದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಸಿದರು.
ಇದನ್ನೂ ಓದಿ: Gudibande News: ಗುಡಿಬಂಡೆ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬಾಲಾಜಿ ಆಯ್ಕೆ
ಸಾರ್ವಜನಿಕರು ಪೋಡಿ, ಬಗರ್ ಹುಕುಂ, ಜಮೀನುಗಳಿಗೆ ರಸ್ತೆ ಸಂಪರ್ಕ, ಸರ್ಕಾರಿ ಭೂಮಿ ಒತ್ತುವರಿ ತೆರವು, ಜಮೀನು ದುರಸ್ತಿ ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಮನವಿಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು ಸಂಬಂಧಿತ ಅಧಿಕಾರಿಗಳಿಗೆ ಅಗತ್ಯ ಮಾಹಿತಿ ಸಂಗ್ರಹಿಸಿ, ಅರ್ಜಿಗಳ ವಿಲೇವಾರಿಯನ್ನು ತ್ವರಿತಗೊಳಿಸುವಂತೆ ಸೂಚನೆ ನೀಡಿದರು.
ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳ ಕ್ರಮಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮ್ಮ ಅಹವಾಲುಗಳಿಗೆ ಶೀಘ್ರ ಪರಿಹಾರ ದೊರೆಯುವ ನಿರೀಕ್ಷೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಸಿಗ್ಬತ್ತುಲ್ಲಾ, ಉಪ ತಹಸೀಲ್ದಾರ್ ತುಳಸಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆರತಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.