ಚಿಕ್ಕಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗಳನ್ನು ತಕ್ಷಣವೇ ಹಿಂಪಡೆಯುವಂತೆ ಆಗ್ರಹಿಸಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕ ಗುರುವಾರ ಸ್ಟಿಕರ್ ಅಂಟಿಸುವ ಮೂಲಕ ಪ್ರತಿಭಟನೆ ನಡೆಸಿತು.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥಗೌಡ ಅವರ ಸೂಚನೆಯಂತೆ ನಡೆದ ಪ್ರತಿಭಟನೆಗೆ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಹಾಗೂ ಜಿಲ್ಲಾ ಉಸ್ತುವಾರಿ ದಿವ್ಯಾ ಚಾಲನೆ ನೀಡಿದರು. ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಸ್ಟಿಕರ್ ಅಂಟಿಸಿ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿದರು.
ಇದನ್ನೂ ಓದಿ; Chikkaballapur News: ಪಸುಪಲೋಡು ಸರ್ಕಾರಿ ಶಾಲೆಗೆ ಎಸ್‌ಡಿಎಂಸಿ ನೂತನ ಪದಾಧಿಕಾರಿಗಳ ಆಯ್ಕೆ
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದಿವ್ಯಾ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ಶಾಂತಿಯುತವಾಗಿ ಪ್ರತಿ ಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿ, ಅವರ ವಿರುದ್ಧವೇ ಎಫ್‌ಐಆರ್ ದಾಖಲಿಸಿರು ವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ ಎಂದು ಆರೋಪಿಸಿದರು. ಪ್ರಶ್ನೆಪತ್ರಿಕೆ ಸೋರಿಕೆಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್(Dharmendra Pradhan) ರಾಜೀನಾಮೆ ನೀಡಿರುವುದು ಮಾತ್ರ ಸಾಕಾಗುವುದಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah)ಕೂಡ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಯುವ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ ಮಾತನಾಡಿ, ತಮ್ಮ ಭವಿಷ್ಯವನ್ನು ಉಳಿಸಿಕೊಳ್ಳಲು ನ್ಯಾಯಕ್ಕಾಗಿ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆಯೇ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ಹೇಳಿದರು. ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗಳನ್ನು ತಕ್ಷಣವೇ ಹಿಂಪಡೆಯಬೇಕು. ಇಲ್ಲವಾದಲ್ಲಿ ಯುವ ಕಾಂಗ್ರೆಸ್ ರಾಜ್ಯಾದ್ಯಂತ ಉಗ್ರ ಹೋರಾಟ ರೂಪಿಸಲಿದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಮೇಶ್, ಜಿಲ್ಲಾ ಉಪಾಧ್ಯಕ್ಷ ವಿನಯ್ ಬಂಗಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಕ್ಷಿತ್ ರೆಡ್ಡಿ, ನವೀನ್, ಆರಿಫ್, ಅಶೋಕ್, ಮಂಜುಳ, ಧರ್ಮತೇಜ್ ಸೇರಿದಂತೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.