ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಡೇಟ್‌ ಫಿಕ್ಸ್‌; ಹೈಕೋರ್ಟ್​​ ಆದೇಶ

ತೀವ್ರ ಕುತೂಹಲ ಕರಳಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯ ಅಂಚೆ ಮತಗಳ ಮರು ಎಣಿಕೆಗೆ ಅಂತಿಮವಾಗಿ ದಿನಾಂಕ ನಿಗದಿಯಾಗಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇ 2 ರಂದು ಮರು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಐಡಿಎಸ್‌ಜಿ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ನಡೆಯಲಿದೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಡೇಟ್‌ ಫಿಕ್ಸ್‌

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Apr 26, 2026 1:04 PM

ಚಿಕ್ಕಮಗಳೂರು: ತೀವ್ರ ಕುತೂಹಲ ಕರಳಿಸಿರುವ ಚಿಕ್ಕಮಗಳೂರು (Sringeri assembly constituency) ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯ ಅಂಚೆ ಮತಗಳ ಮರು ಎಣಿಕೆಗೆ ಅಂತಿಮವಾಗಿ ದಿನಾಂಕ ನಿಗದಿಯಾಗಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇ 2 ರಂದು ಮರು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಐಡಿಎಸ್‌ಜಿ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ನಡೆಯಲಿದೆ. ಮರುಎಣಿಕೆ ಪ್ರಕ್ರಿಯೆಗೆ ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಎಡಿಸಿ ಗೌರವ್ ಶೆಟ್ಟಿ ಅವರನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗಿದ್ದು, ನಾಲ್ವರು ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಮತ ಎಣಿಕೆ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಬೆಳಗ್ಗೆ 8 ಗಂಟೆಗೆ ಮರುಎಣಿಕೆ ಪ್ರಾರಂಭವಾಗಲಿದೆ ಎಂದು ತಿಳಿಸಲಾಗಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಂತರದಿಂದ ಜಯಗಳಿಸಿದ್ದರು. ಆ ಚುನಾವಣೆಯಲ್ಲಿ ಒಟ್ಟು 2,811 ಅಂಚೆ ಮತಗಳು ಚಲಾವಣೆಯಾಗಿದ್ದವು. ಅವುಗಳಲ್ಲಿ 279 ಅಂಚೆ ಮತಗಳನ್ನು ತಿರಸ್ಕರಿಸಲಾಗಿತ್ತು. ಈ ತಿರಸ್ಕೃತ ಮತಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಮಾಜಿ ಶಾಸಕ ಜೀವರಾಜ್, ಮರು ಎಣಿಕೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್, ಏಪ್ರಿಲ್ 6 ರಂದು ತಿರಸ್ಕೃತ ಅಂಚೆ ಮತಗಳನ್ನು ಮರು ಎಣಿಕೆ ಮಾಡುವಂತೆ ಐತಿಹಾಸಿಕ ಆದೇಶ ನೀಡಿತ್ತು.

ಶೃಂಗೇರಿ ಶಾಸಕರಾಗಿ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ, 279 ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಆದೇಶ ಹೊರಡಿಸಿತ್ತು. ಅಲ್ಲದೆ 2 ವಾರಗಳಲ್ಲಿ ಮರುಪರಿಶೀಲನೆ ನಡೆಸಿ ಫಲಿತಾಂಶ ಪ್ರಕಟಿಸಲು ನಿರ್ದೇಶನ ನೀಡಿತ್ತು. ಇನ್ನು ಮತ ಮರುಎಣಿಕೆ ವೇಳೆ ಏಜೆಂಟ್‌ಗಳು, ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಸೋತ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಹಾಜರಾಗುವ ನಿರೀಕ್ಷೆಯಿದೆ ಆಕ್ಷೇಪ ಸಲ್ಲಿಸಲು ನೀಡಿದ್ದ ಗಡುವು ಏಪ್ರಿಲ್ 20ಕ್ಕೆ ಅಂತ್ಯಗೊಂಡಿದ್ದು, ಸದ್ಯ ಜಿಲ್ಲಾಡಳಿತ ಮರು ಎಣಿಕೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.