Chitradurga accident: ಮಂತ್ರಾಲಯಕ್ಕೆ ತೆರಳುತ್ತಿದ್ದ ಟಿಟಿ ವಾಹನ ಪಲ್ಟಿ; 10ಕ್ಕೂ ಹೆಚ್ಚು ಮಂದಿಗೆ ಗಾಯ
Challakere News: ಚಾಮರಾಜನಗರದಿಂದ ಮಂತ್ರಾಲಯಕ್ಕೆ ಪ್ರವಾಸಿಗರು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಚಳ್ಳಕೆರೆ ತಾಲೂಕಿನ ಕೋಡಿಹಳ್ಳಿ ಬ್ರಿಡ್ಜ್ ಬಳಿ ವಾಹನ ಸಾಗುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ.
-
ಚಿತ್ರದುರ್ಗ: ಮಂತ್ರಾಲಯಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೋಡಿಹಳ್ಳಿ ಗೇಟ್ ಸಮೀಪ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಚಾಮರಾಜನಗರದಿಂದ ಮಂತ್ರಾಲಯಕ್ಕೆ ಪ್ರವಾಸಿಗರು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಚಳ್ಳಕೆರೆ ತಾಲೂಕಿನ ಕೋಡಿಹಳ್ಳಿ ಬ್ರಿಡ್ಜ್ ಬಳಿ ವಾಹನ ಸಾಗುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಅಪಘಾತ ಸಂಭವಿಸಿದೆ.
ಮಾಹಿತಿಯ ಪ್ರಕಾರ, ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಸಂದರ್ಭದಲ್ಲಿ ವಾಹನ ನಿಯಂತ್ರಣ ಕಳೆದುಕೊಂಡಿರಬಹುದು ಎನ್ನಲಾಗಿದ್ದು, ಈ ವೇಳೆ ಟಿಟಿ ವಾಹನ ಡಿವೈಡರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಾಹನ ಪಲ್ಟಿಯಾಗಿ ರಸ್ತೆಯಲ್ಲಿ ಬಿದ್ದಿದೆ.
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಹಾಗೂ ವಾಹನದಲ್ಲಿದ್ದವರು ನೆರವಿಗೆ ಧಾವಿಸಿದ್ದಾರೆ. ವಾಹನದಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೆಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ಚಳ್ಳಕೆರೆ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.