ಚಿತ್ರದುರ್ಗ: ಬಿಜೆಪಿ ಮುಖಂಡನಿಗೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್(PSI Slapped BJP Leader) ನಡುರಸ್ತೆಯಲ್ಲಿ ಕಪಾಳಮೋಕ್ಷ ಮಾಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ನಗರದ ತುರುವನೂರು ರಸ್ತೆಯ ಖಾಸಗಿ ಹೋಟೆಲ್ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು, ತುಮಕೂರು ಜಿಲ್ಲೆ ಮಧುಗಿರಿ ಬಿಜೆಪಿ ಘಟಕದ ಅಧ್ಯಕ್ಷ ಹನುಮಂತೇಗೌಡ ಗುಂಪಾಗಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪಿಎಸ್‌ಐ ಗಾದಿಲಿಂಗಪ್ಪ ಪ್ರಶ್ನಿಸಿದ್ದಕ್ಕೆ ಮಾತಿಗೆ ಮಾತು ಬೆಳೆದು ಬಿಜೆಪಿ ನಾಯಕ ಅವಾಚ್ಯ ಪದ ಬಳಸಿದರು ಎಂಬ ಕಾರಣಕ್ಕೆ ಪಿಎಸ್‌ಐ ಕಪಾಳಕ್ಕೆ ಬಾರಿಸಿದ್ದಾರೆ ಎನ್ನಲಾಗಿದೆ. ಆ ಬಳಿಕ ಬಿಜೆಪಿ ಕಾರ್ಯರ್ತರ ಗುಂಪು ಮತ್ತು ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಸದ್ಯ ಈ ವಿಡಿಯೋ ವೈರಲ್(Viral Video) ಆಗಿದೆ.
ಆಸ್ಪತ್ರೆಗೆ ದಾಖಲು
ಇನ್ನು ಘಟನೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಿಎಸ್‌ಐ ಗಾದಿಲಿಂಗಪ್ಪ ಅವರ ಕೈ ಬೆರಳಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧುಗಿರಿ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹನುಮಂತೇಗೌಡ, ಪೊಲೀಸರಿಂದಲೇ ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಪ್ರತಿ ಆರೋಪ ಮಾಡಿದ್ದಾರೆ. ಆ ಬಳಿಕ ಹನುಮಂತೇಗೌಡ ಎದೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆಯ ವಿಡಿಯೊ ಮತ್ತು ಬಿವೈ ವಿಜಯೇಂದ್ರ ಟ್ವೀಟ್ ಇಲ್ಲಿದೆ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ ಕೆಲವು ಕೆಳಹಂತದ ಪೊಲೀಸ್ ಅಧಿಕಾರಿಗಳು ಸಾಮಾನ್ಯರು ಹಾಗೂ ಜವಾಬ್ದಾರಿಯುತ ನಾಗರಿಕರ… pic.twitter.com/zf5ZN3pk3J
— Vijayendra Yediyurappa (@BYVijayendra) March 15, 2025
ಬಿಜೆಪಿ ಅಧ್ಯಕ್ಷ ಹನುಮಂತೇಗೌಡರ ಕಾರು ಚಾಲಕ ರಂಗಸ್ವಾಮಿ ಪ್ರಕಾರ, ಪಿಎಸ್‌ಐ ಗಾದಿಲಿಂಗಪ್ಪ ಏಕವಚನದಲ್ಲಿ ಮಾತನಾಡಿದರು. ಹನುಮಂತೇಗೌಡ, ಗೌರವಯುತವಾಗಿ ಮಾತಾಡಿ ಎಂದು ಹೇಳಿದರೂ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಆಗ ನೂಕಾಟ ತಳ್ಳಾಟ ನಡೆದು ಪಿಎಸ್‌ಐ ಹಲ್ಲೆ ಮಾಡಿದರು ಎಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಚಿತ್ರದುರ್ಗದಲ್ಲಿ ಮಧುಗಿರಿ ಬಿಜೆಪಿ ಅಧ್ಯಕ್ಷರಾದ ಹನುಮಂತೇಗೌಡ ಅವರ ಮೇಲೆ ಪಿಎಸ್‌ಐ ಗಾದಿಲಿಂಗಪ್ಪ ಹಲ್ಲೆ ನಡೆಸಿ ಗೂಂಡಾಗಿರಿ ಪ್ರದರ್ಶಿಸಿದ್ದು ಇದನ್ನು ಕರ್ನಾಟಕ ಬಿಜೆಪಿ ಅತ್ಯುಗ್ರವಾಗಿ ಖಂಡಿಸುತ್ತದೆ ಎಂದು ಹೇಳಿದ್ದಾರೆ. ರಾಜಕಾರಣಿಗಳ ಪ್ರಚೋದನೆಯಿಂದ ಈ ಘಟನೆ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ. ಪಿಎಸ್‌ಐ ಗಾದಿಲಿಂಗಪ್ಪ ಅವರನ್ನು ತಕ್ಷಣ ಅಮಾನತು ಮಾಡದಿದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.
ಈ ಸುದ್ದಿಯನ್ನೂ ಓದಿ:Viral Video: ಟಿಕೆಟ್ ಇಲ್ಲದೆ ಎಸಿ ಕೋಚ್‌ನಲ್ಲಿ ಜರ್ನಿ... ಪ್ರಶ್ನಿಸಿದ್ದ ಟಿಟಿಇಗೆ ಧಮ್ಕಿ!ದರ್ಪ ಮೆರೆದ ಕಾನ್‌ಸ್ಟೇಬಲ್ ಪತ್ನಿಯ ವಿಡಿಯೊ ವೈರಲ್
ಬಿಜೆಪಿ ಕಿಡಿ
ಈ ಘಟನೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, " ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ ಕೆಲವು ಕೆಳಹಂತದ ಪೊಲೀಸ್ ಅಧಿಕಾರಿಗಳು ಸಾಮಾನ್ಯರು ಹಾಗೂ ಜವಾಬ್ದಾರಿಯುತ ನಾಗರಿಕರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸಿ ದೈಹಿಕ ಹಲ್ಲೆಗೂ ಮುಂದಾಗುತ್ತಿದ್ದಾರೆ " ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.