ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Caste Census: ಜಾತಿ ಸಮೀಕ್ಷೆ ಕಾರ್ಯ ಚುರುಕುಗೊಳಿಸಿ; ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

CM Siddaramaiah: ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಜಾತಿ ಸಮೀಕ್ಷೆ ಕಾರ್ಯ ಚುರುಕುಗೊಳಿಸಿ; ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

-

Prabhakara R Prabhakara R Sep 26, 2025 3:52 PM

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ (Caste Census) ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಮಾತನಾಡಿದರು.

ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು.

ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ನಡೆಸಬೇಕಾಗಿದ್ದು, ಇದುವರೆಗೆ 2,76,016 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಅಕ್ಟೋಬರ್‌ 7ರ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳ್ಳಬೇಕು ಎಂದು ಸೂಚಿಸಿದರು.

ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕ್ರಮ ಕೈಗೊಳ್ಳಬೇಕು.

ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ‌ಇದು ಕೇವಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮೀಕ್ಷೆಯಲ್ಲ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿಗದಿತ ಗುರಿಯ ಪ್ರಗತಿ ಬಗ್ಗೆ ಪ್ರತಿ ದಿನ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.

ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಬೇಕು. ಅಗತ್ಯವಿರುವ ಕಡೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೂ ಈ ಕುರಿತು ಸಂಪರ್ಕದಲ್ಲಿರಬೇಕು. ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್‌ ಅಧಿಕಾರಿಯಾಗಿ ನೇಮಕ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಮಟ್ಟದಲ್ಲಿ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದರೆ ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿರುವ ಐಟಿ ತಂತ್ರಜ್ಞರ ನೆರವನ್ನು ಪಡೆದುಕೊಳ್ಳಬೇಕು. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಇಂದಿನಿಂದ ಆರಂಭವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 50ಲಕ್ಷ ಮನೆಗಳಿದ್ದು, ಆದಷ್ಟು ಬೇಗನೆ ಗಣತಿ ಕಾರ್ಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಪ್ರತಿಯೊಂದು ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಗುಡ್ಡಗಾಡು ಪ್ರದೇಶಗಳ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ಸಮೀಕ್ಷೆ ಕೇಂದ್ರಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ. ಜನರು ಕೇಂದ್ರಕ್ಕೆ ಬಂದು ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆನ್‌ಲೈನ್‌ ಮೂಲಕ ಸಹ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮೀಕ್ಷೆ ಸಂದರ್ಭದಲ್ಲಿ ಮನೆಗಳಿಗೆ ಬೀಗ ಹಾಕಿದ್ದರೆ, ಅಂತಹ ಮನೆಗಳಲ್ಲೂ ಗಣತಿ ಕಾರ್ಯವನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು.

ಈ ಸುದ್ದಿಯನ್ನೂ ಓದಿ | Caste Census‌: ರಾಜ್ಯ ಸರ್ಕಾರಕ್ಕೆ ಬಿಗ್‌ ರಿಲೀಫ್‌; ಜಾತಿ ಗಣತಿ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್‌ ನಕಾರ

ಪ್ರತಿ ದಿನ ಜಿಲ್ಲಾವಾರು ಕನಿಷ್ಠ ಶೇಕಡಾ 10ರಷ್ಟು ಸಮೀಕ್ಷೆ ಗುರಿಯನ್ನು ಸಾಧಿಸಬೇಕು. ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಮೀಕ್ಷೆ ಪ್ರಗತಿಯ ಪರಿಶೀಲನೆ ನಡೆಸಬೇಕು ಮತ್ತು ಸಕ್ರಿಯವಾಗಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದರು.