ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Muda Case: ಮುಡಾ ಹಗರಣ; ತನಿಖೆ ಮುಂದುವರಿಸಲು ಲೋಕಾಯುಕ್ತಕ್ಕೆ ಕೋರ್ಟ್‌ ಸೂಚನೆ, ಮೇ 7ಕ್ಕೆ ವಿಚಾರಣೆ ಮುಂದೂಡಿಕೆ

Muda Case: ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರಿಗೆ ತನಿಖೆಗೆ ಮುಂದುವರಿಸಲು ಸೂಚಿಸಿದ್ದು, ಸಂಪೂರ್ಣ ವರದಿ ಸಲ್ಲಿಸಿದ ಬಳಿಕ ಮುಂದಿನ ಆದೇಶ ನೀಡಲಿದೆ. ಇನ್ನು ಇದೇ ಪ್ರಕರಣ ಸಂಬಂಧ ಇ.ಡಿ.ಗೆ ತಕರಾರು ಅರ್ಜಿ ಸಲ್ಲಿಸಲು ಕೋರ್ಟ್ ಅನುಮತಿ ನೀಡಿದೆ.

ಮುಡಾ ಹಗರಣ; ತನಿಖೆ ಮುಂದುವರಿಸಲು ಲೋಕಾಯುಕ್ತಕ್ಕೆ ಕೋರ್ಟ್‌ ಸೂಚನೆ

Profile Prabhakara R Apr 15, 2025 4:12 PM

ಬೆಂಗಳೂರು: ಮುಡಾ ಹಗರಣಕ್ಕೆ (Muda Case) ಸಂಬಂಧಿಸಿ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸದ್ಯಕ್ಕೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಆದರೆ, ಹಗರಣದ ಕುರಿತು ತನಿಖೆ ಮುಂದುವರಿಸಲು ಲೋಕಾಯುಕ್ತಕ್ಕೆ ಸೂಚನೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಿದೆ. ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದು, ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದರು. ಇದರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ತಕಾರಾರು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಧೀಶ ಸಂತೋಷ್ ಗಜಾನನ ಭಟ್ ಅವರು, ಪ್ರಕರಣ ಸಂಬಂಧ ಯಾವುದೇ ತೀರ್ಪು ನೀಡಿಲ್ಲ. ಬದಲಿಗೆ ಲೋಕಾಯುಕ್ತ ಪೊಲೀಸರಿಗೆ ತನಿಖೆಗೆ ಮುಂದುವರಿಸಲು ಸೂಚಿಸಿದ್ದು, ಸಂಪೂರ್ಣ ವರದಿ ಸಲ್ಲಿಸಿದ ಬಳಿಕ ಮುಂದಿನ ಆದೇಶ ನೀಡಲಿದೆ. ಇನ್ನು ಇದೇ ಪ್ರಕರಣ ಸಂಬಂಧ ಇಡಿ ಸಹ ತಕರಾರು ಅರ್ಜಿ ಸಲ್ಲಿಸಲು ಕೋರ್ಟ್ ಅನುಮತಿ ನೀಡಿದೆ.

ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. 50:50 ಅನುಪಾತದಡಿ ನಿವೇಶನಗಳನ್ನು ಸರಿಯಾಗಿ ಹಂಚಿಕೆ ಮಾಡದೆ ಬೇಕಾಬಿಟ್ಟಿ ಹಂಚಿಕೆ ಮಾಡಲಾಗಿದ್ದು, ಅಂದಾಜು 5,000 ಕೋಟಿ ರೂ.ನಷ್ಟು ಭಾರಿ ಅಕ್ರಮ ನಡೆದಿದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನೂ ಓದಿ | Caste Census: ಜಾತಿ ಗಣತಿ ವರದಿ ಜಾರಿಯಾದ್ರೆ ಸರ್ಕಾರ ಬಿದ್ದೇ ಬೀಳುತ್ತೆ: ಒಕ್ಕಲಿಗರ ಸಂಘ ಎಚ್ಚರಿಕೆ

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ. 464ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಪ್ರಾಧಿಕಾರವು ಬಳಸಿಕೊಂಡಿತ್ತು. ಇದಕ್ಕೆ ಪರಿಹಾರದ ಬದಲಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ 14 ನಿವೇಶನಗಳನ್ನು ಮಂಜೂರು ಮಾಡಲಾಗಿತ್ತು. ಇದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿತ್ತು. ನಂತರ ತನಗೆ ಪ್ರಾಧಿಕಾರ ನೀಡಿದ್ದ 14 ಸೈಟುಗಳನ್ನು ವಾಪಸ್ ನೀಡುವುದಾಗಿ ಪಾರ್ವತಿ ಸಿದ್ದರಾಮಯ್ಯ ಘೋಷಿಸಿದ್ದರು.

ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ, ಸಂಬಂಧಿ ಹಾಗೂ ಜಮೀನಿನ ಮಾಲೀಕರ ವಿರುದ್ಧ ಮೈಸೂರು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು. ನಂತರ, ನಾಲ್ವರು ಅಕ್ರಮ ಎಸಗಿರುವ ಸಂಬಂಧ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ ಎಂದು ಲೋಕಾಯುಕ್ತ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ 'ಬಿ' ರಿಪೋರ್ಟ್ ಸಲ್ಲಿಸಿದ್ದರು. ಅಂದರೆ, ಆರೋಪ ಸಾಬೀತಾಗಿಲ್ಲ ಎಂದು ವರದಿ ನೀಡಲಾಗಿತ್ತು. ಈ 'ಬಿ' ರಿಪೋರ್ಟ್ ಅನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದರು.