ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Alva's Nudisiri-Virasat 2027: ಜ.6ರಿಂದ 10ರವರೆಗೆ ಆಳ್ವಾಸ್ ವಿರಾಸತ್, ಆಳ್ವಾಸ್ ನುಡಿಸಿರಿ 2027: ಡಾ.ಎಂ. ಮೋಹನ ಆಳ್ವ

Alva's Nudisiri 2027: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಮತ್ತು ಕನ್ನಡ ನಾಡು-ನುಡಿ, ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿಗಳು ಈ ಬಾರಿ ಒಟ್ಟಿಗೆ ಜ.6ರಿಂದ 10ರ ತನಕ ನಡೆಯಲಿದೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ.

ಮಂಗಳೂರು, ಅ.09: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಮತ್ತು ಕನ್ನಡ ನಾಡು-ನುಡಿ, ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿಗಳು ಈ ಬಾರಿ ಒಟ್ಟಿಗೆ ಜ.6ರಿಂದ 10ರ ತನಕ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ತಿಳಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಳ್ವಾಸ್ ನುಡಿಸಿರಿ 2027ರ ಮುಖ್ಯ ಪರಿಕಲ್ಪನೆ ‘ಕನ್ನಡ ಮನಸ್ಸು: ಭವಿಷ್ಯದ ಕನಸುʼ ಎಂದಾಗಿದ್ದು, ಇದು ಯುವ ಜನತೆಯನ್ನು ಕೇಂದ್ರವಾಗಿಸಿರುವ ಪರಿಕಲ್ಪನೆಯಾಗಿದೆ. ಬದಲಾಗುತ್ತಿರುವ ಸಮಾಜದಲ್ಲಿ ಜ್ಞಾನ, ವಿಜ್ಞಾನ, ತಂತ್ರಜ್ಞಾನಗಳ ಸಮರ್ಪಕ ಬಳಕೆಯೊಂದಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿಗಳನ್ನೊಳಗೊಂಡ ಕನ್ನಡದ ಅಸ್ಮಿತೆಯಿಂದ ಕರ್ನಾಟಕದ ಭವಿಷ್ಯವನ್ನು ಕಟ್ಟುವ ಸಂಕಲ್ಪ ಈ ಪರಿಕಲ್ಪನೆಯದ್ದಾಗಿದೆ. ಕನ್ನಡದ ಪ್ರಮುಖ ವಿಮರ್ಶಕ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಸರ್ವಾಧ್ಯಕ್ಷತೆ ವಹಿಸುವರು. ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ʼಆಳ್ವಾಸ್-ನುಡಿಸಿರಿ 2027ʼ ಅನ್ನು ಉದ್ಘಾಟಿಸುವರು ಎಂದು ಹೇಳಿದರು.

ಆಳ್ವಾಸ್ ವಿರಾಸತ್‌ಗೆ ಭವ್ಯ ಚಾಲನೆ

ಆಳ್ವಾಸ್ ವಿರಾಸತ್ 2027ರ ಉದ್ಘಾಟನಾ ಸಮಾರಂಭ ಜ.6ರಂದು ಸಂಜೆ ವೈಭವಪೂರ್ಣವಾಗಿ ನಡೆಯಲಿದೆ. ವೇದಘೋಷ, ಭಜನೆ, ಪುಷ್ಪಪಲ್ಲಕ್ಕಿ ಹಾಗೂ ಮಂಗಳವಾದ್ಯಗಳ ನಾದದೊಂದಿಗೆ ಸಾಂಸ್ಕೃತಿಕ ರಥದ ಮೆರವಣಿಗೆ ನಡೆಯಲಿದ್ದು, ಭಾರತೀಯ ಸಂಸ್ಕೃತಿಯ ವೈವಿಧ್ಯಮಯ ಪರಂಪರೆಗಳು ಈ ಸಂದರ್ಭ ಅನಾವರಣಗೊಳ್ಳಲಿವೆ.

ಇಬ್ಬರು ಸಾಧಕರಿಗೆ ಪ್ರಶಸ್ತಿ

ಉದ್ಘಾಟನಾ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಹರಿದ್ವಾರದಿಂದ ಆಗಮಿಸುವ ಗಂಗಾರತಿ ತಂಡವು ಮಂತ್ರಘೋಷ ಹಾಗೂ ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ರಥಾರತಿಯನ್ನು ನೆರವೇರಿಸಲಿದೆ. ಇದೇ ಸಂದರ್ಭದಲ್ಲಿ ಶಾಸ್ತ್ರೀಯ ಹಾಗೂ ಜನಪದ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಇಬ್ಬರು ಸಾಧಕರಿಗೆ ಆಳ್ವಾಸ್ ವಿರಾಸತ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು.

ಹಸಿರು ಸಂವಾದ

ಜ. 6 ಮತ್ತು 7ರಂದು ಹಸಿರು ಸಂವಾದ ರಾಷ್ಟ್ರೀಯ ಮಟ್ಟದ ಸಮ್ಮೇಳನ ನಡೆಯಲಿದೆ. ಕರಾವಳಿ ಪರಿಸರ ಸಂರಕ್ಷಣೆ, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಹಾಗೂ ಸಮುದಾಯದ ಸಹಭಾಗಿತ್ವದ ಮೂಲಕ ಸುಸ್ಥಿರ ಪರಿಸರ ವ್ಯವಸ್ಥೆ ರೂಪಿಸುವ ಉದ್ದೇಶ ಹೊಂದಿರುವ ಈ ಕಾರ್ಯಕ್ರಮದಲ್ಲಿ 800ಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ತ್ಯಾಜ್ಯವು ನದಿಗಳ ಮೂಲಕ ಸಮುದ್ರ ಸೇರುವುದನ್ನು ತಡೆಯುವ ಉದ್ದೇಶದಿಂದ ಪಾವಂಜೆ (ಗುರುಪುರ), ನಂದಿನಿ ಹಾಗೂ ಶಾಂಭವಿ ನದಿಗಳ ಜಲಾನಯನ ಪ್ರದೇಶದ 50ಕ್ಕೂ ಅಧಿಕ ಗ್ರಾಮಗಳನ್ನು ಯೋಜನೆಗೆ ಆಯ್ಕೆ ಮಾಡಲಾಗಿದೆ. ಈ ಗ್ರಾಮಗಳಲ್ಲಿ ತ್ಯಾಜ್ಯ ವಿಂಗಡಣೆ, ಸಂಗ್ರಹ, ವೈಜ್ಞಾನಿಕ ಸಂಸ್ಕರಣೆ ಹಾಗೂ ಮರುಬಳಕೆಗೆ ಗ್ರಾಮಮಟ್ಟದಲ್ಲಿಯೇ ವ್ಯವಸ್ಥೆ ರೂಪಿಸುವ ಮೂಲಕ ಪರಿಣಾಮಕಾರಿ ಮತ್ತು ಸುಸ್ಥಿರ ತ್ಯಾಜ್ಯ ನಿರ್ವಹಣೆಯ ಮಾದರಿಯನ್ನು ರೂಪಿಸಲಾಗುತ್ತಿದೆ.

ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಾಂಸ್ಕೃತಿಕ ಜಂಬೂರಿ

ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಜ್ಯಮಟ್ಟದ ಸಾಂಸ್ಕೃತಿಕ ಜಂಬೂರಿ ಆಯೋಜಿಸಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ 5,000ಕ್ಕೂ ಅಧಿಕ ಸ್ಕೌಟ್ಸ್, ಗೈಡ್ಸ್, ರೋವರ್ಸ್ ಹಾಗೂ ರೇಂಜರ್ಸ್‌ಗಳು ಜಂಬೂರಿಯಲ್ಲಿ ಭಾಗವಹಿಸಲಿದ್ದಾರೆ. ಯುವಜನರಲ್ಲಿ ಶಿಸ್ತು, ಸೇವಾ ಮನೋಭಾವ, ನಾಯಕತ್ವ ಗುಣ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ಉದ್ದೇಶದಿಂದ ಜಂಬೂರಿಯಲ್ಲಿ ವಿವಿಧ ತರಬೇತಿ ಹಾಗೂ ಚಟುವಟಿಕೆಗಳನ್ನು ಆಯೋಜಿಸಲಾಗುವುದು.

800 ಕಲಾ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ

ದೇಶೀಯ ಕಲೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ 800 ವಿದ್ಯಾರ್ಥಿ ಕಲಾವಿದರಿಗೆ ಉಚಿತ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ. ವಿಶೇಷವಾಗಿ ಶಾಸ್ತ್ರೀಯ ನೃತ್ಯ, ಸಂಗೀತ, ಪಕ್ಕವಾದ್ಯ ಹಾಗೂ ಏಕವ್ಯಕ್ತಿ ಪ್ರದರ್ಶನ ಸೇರಿದಂತೆ ವಿವಿಧ ಕಲಾ ಪ್ರಕಾರಗಳಲ್ಲಿ ತರಬೇತಿ ಪಡೆಯುತ್ತಿರುವ ಹಾಗೂ ಪರಿಣತಿ ಹೊಂದಿರುವ ಕಲಾವಿದರು ಇದರಲ್ಲಿ ಭಾಗವಹಿಸಬಹುದಾಗಿದೆ. ರಾಜ್ಯಮಟ್ಟದ ಹಿರಿಯ ಹಾಗೂ ಕಿರಿಯ ಹಂತದ ಕಲಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ 30 ವರ್ಷದೊಳಗಿನ ವಿದ್ಯಾರ್ಥಿ ಕಲಾವಿದರು ಹಾಗೂ ಹವ್ಯಾಸಿ ಕಲಾವಿದರಿಗೆ ಈ ಕಾರ್ಯಾಗಾರದಲ್ಲಿ ಭಾಗವಹಿಸಲು ಅವಕಾಶವಿದೆ.

ಜ.8ರಂದು ಆಳ್ವಾಸ್ ವಿದ್ಯಾರ್ಥಿಸಿರಿ

ಈ ಬಾರಿಯೂ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಜ.8ರಂದು ಆಳ್ವಾಸ್ ವಿದ್ಯಾರ್ಥಿಸಿರಿ ಒಂದು ದಿನದ ಸಮ್ಮೇಳನ ನಡೆಯಲಿದೆ. ವಿದ್ಯಾರ್ಥಿಗಳ ಜ್ಞಾನ, ಪ್ರತಿಭೆ ಹಾಗೂ ಸೃಜನಶೀಲತೆಗೆ ವೇದಿಕೆ ಕಲ್ಪಿಸುವುದು ಇದರ ಉದ್ದೇಶವಾಗಿದೆ.

ಜ.9ರಂದು ಮೊದಲ ಬಾರಿಗೆ ಆಳ್ವಾಸ್ ಯುವಸಿರಿ

ಈ ಬಾರಿ ಹೊಸ ಪರಿಕಲ್ಪನೆಯಾಗಿ ಜ.9ರಂದು ಆಳ್ವಾಸ್ ಯುವಸಿರಿ ಆಯೋಜಿಸಲಾಗುತ್ತಿದೆ. ಪದವಿ, ಸ್ನಾತಕೋತ್ತರ ಹಾಗೂ ವಿವಿಧ ಕ್ಷೇತ್ರಗಳ ಯುವಜನರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ, ಅವರ ಚಿಂತನೆ, ಪ್ರತಿಭೆ ಮತ್ತು ಕನಸುಗಳಿಗೆ ಸ್ಪಂದಿಸುವ ಸಮ್ಮೇಳನವಾಗಿ ಇದನ್ನು ರೂಪಿಸಲಾಗಿದೆ.

ನುಡಿಸಿರಿ ವಿರಾಸತ್‌ನ ವಿಶೇಷ ಆಕರ್ಷಣೆಯಾಗಿ ಕೃಷಿಮೇಳ, ವಿಜ್ಞಾನ ಮೇಳ, ಆಹಾರ ಮೇಳ, ಪುಸ್ತಕ ಮೇಳ ಹಾಗೂ ಕಲಾ ಮೇಳಗಳು ನಡೆಯಲಿವೆ.

ಸೋಲೋ ವಿಶ್ವ ಮೋಟಾರ್‌ಸೈಕಲ್ ಯಾತ್ರಿಕ ಗೇಬ್ರಿಯಲ್ ಶರತ್‌ರನ್ನು ಗೌರವಿಸಿದ ಕರ್ನಾಟಕ ಸಂಘ ಕತಾರ್

500 ರೂ. ಪ್ರತಿನಿಧಿ ಶುಲ್ಕ‌

ಆಳ್ವಾಸ್ ನುಡಿಸಿರಿ- ವಿರಾಸತ್ 2027ರಲ್ಲಿ ಪ್ರತಿನಿಧಿಯಾಗಿ ಭಾಗವಹಿಸಲು ಇಚ್ಛಿಸುವವರು ಐದು ದಿನಗಳಿಗಾಗಿ 500 ರೂ. ಪ್ರತಿನಿಧಿ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬಹುದು ಎಂದವರು ಹೇಳಿದರು. ಈ ಸಂದರ್ಭದಲ್ಲಿ ನುಡಿಸಿರಿ ವಿರಾಸತ್ ಕಾರ್ಯದರ್ಶಿ ವೇಣುಗೋಪಾಲ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.