ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Cancer Day Care Centre: ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು ಮಾಡಿದ ಕೇಂದ್ರ ಸರ್ಕಾರ

Cancer Day Care Centre: ದೇಶದಲ್ಲಿ 200 ಕ್ಯಾನ್ಸರ್ ಡೇ ಕೇರ್ ಸೆಂಟರ್‌ಗಳನ್ನು ಸ್ಥಾಪಿಸಲು ಕೇಂದ್ರ ಮುಂದಾಗಿದ್ದು, ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ದತ್ತಾಂಶ ಮತ್ತು ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗಳ ಆಧಾರದ ಮೇಲೆ ದಕ್ಷಿಣ ಕನ್ನಡ ಸೇರಿ ಕರ್ನಾಟಕದ 16 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ.

ದಕ್ಷಿಣ ಕನ್ನಡ: ಕ್ಯಾನ್ಸರ್‌ ರೋಗಿಗಳ ಚಿಕಿತ್ಸೆಗೆ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಸ್ಥಾಪನೆಗೆ (Cancer Day Care Centre) ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ. ಇದಕ್ಕಾಗಿ 1.49 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

ಕ್ಯಾನ್ಸರ್ ರೋಗಿಗಳ ಆರೈಕೆಯಲ್ಲಿ ನಗರ- ಗ್ರಾಮೀಣ ಅಸಮಾನತೆ ಕಡಿಮೆ ಮಾಡಿ, ಪರಿಣಾಮಕಾರಿ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು 2025-26ರ ಕೇಂದ್ರ ಬಜೆಟ್‌ನಲ್ಲಿ ಮುಂದಿನ ಮೂರು ವರ್ಷಗಳಲ್ಲಿ ದೇಶದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಡೇ ಕೇರ್ ಸ್ಥಾಪಿಸುವ ಬಗ್ಗೆ ಘೋಷಣೆ ಮಾಡಿತ್ತು. ಈ ಉಪಕ್ರಮದ ಭಾಗವಾಗಿ ಪ್ರಥಮ ಹಂತದಲ್ಲಿ ದೇಶದಲ್ಲಿ 200 ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರ ಮುಂದಾಗಿದ್ದು, ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ದತ್ತಾಂಶ ಮತ್ತು ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗಳ ಆಧಾರದ ಮೇಲೆ ದಕ್ಷಿಣ ಕನ್ನಡ ಸೇರಿ ಕರ್ನಾಟಕದ 16 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ (NHM) ಅಡಿಯಲ್ಲಿ ಡೇ ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲು ಜಿಲ್ಲೆಗೆ 1.49 ಕೋಟಿ ರೂ. ವರೆಗೆ ಅನುದಾನವನ್ನು ಹಂಚಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಸ್ತಾವಿತ ಕೇಂದ್ರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಕ್ಯಾನ್ಸರ್ ರೋಗನಿರ್ಣಯ, ಕೀಮೋಥೆರಪಿ, ಆರೈಕೆ, ಕ್ಯಾನ್ಸರ್ ತಡೆಗಟ್ಟುವಿಕೆ -ಜಾಗೃತಿ ಕಾರ್ಯಕ್ರಮ ಮತ್ತು ಚಿಕಿತ್ಸಾ ಸೇವೆಗಳ ಜೊತೆಗೆ ಇತರ ಸೇವೆಗಳು ಒದಗಿಸಲಿದೆ. ಜನರಿಗೆ ಗುಣಮಟ್ಟದ ಕ್ಯಾನ್ಸರ್ ಆರೈಕೆಯನ್ನು ಒದಗಿಸುವುದು ಮತ್ತು ತೃತೀಯ ಹಂತದ ಆರೈಕೆ ಕೇಂದ್ರಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ.

ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಇನ್ನಷ್ಟು ಸುಲಭವಾಗಿ ತಲುಪಿಸಲು ಇದು ಒಂದು ಸಕಾಲಿಕ ನಿರ್ಧಾರವಾಗಿದ್ದು ಮಂಗಳೂರಿನಲ್ಲಿ ಡೇ ಕೇರ್ ಕ್ಯಾನ್ಸರ್ ಸೆಂಟರ್ ಸ್ಥಾಪನೆಯು ಶ್ರೇಣಿ 2 ಮತ್ತು 3ನೇ ಹಂತದ ನಗರಗಳಲ್ಲಿ ನಗರಗಳಲ್ಲಿ ಆರೋಗ್ಯ ಸೇವೆಗಳನ್ನು ಬಲಪಡಿಸುವ ಪ್ರಧಾನಮಂತ್ರಿ ಮೋದಿ ಸರ್ಕಾರದ ಬದ್ಧತೆಯನ್ನು ಎತ್ತಿ ತೋರಿಸುತ್ತದೆ.

ಈ ಡೇ ಕೇರ್ ಸೆಂಟರ್ ನಲ್ಲಿ ಕ್ಯಾನ್ಸರ್ ಪೀಡಿತರಿಗೆ ಆರೈಕೆಯನ್ನು ಸ್ಥಳೀಯವಾಗಿಯೇ ಒದಗಿಸುವುದರಿಂದ ರೋಗಿಗಳು ದೂರದ ನಗರಗಳಿಗೆ ಪ್ರಯಾಣಿಸುವ ತೊಂದರೆ ತಪ್ಪುತ್ತದೆ. ಇದು ಅವರ ಚಿಕಿತ್ಸಾ ವೆಚ್ಚ ಮತ್ತು ಸಮಯವನ್ನು ಉಳಿಸುವುದಲ್ಲದೆ, ಚೇತರಿಕೆಗೆ ಅಗತ್ಯವಾದ ಮಾನಸಿಕ ನೆಮ್ಮದಿಯನ್ನೂ ನೀಡುತ್ತದೆ. ಮುಂದಿನ ದಿನಗಳಲ್ಲಿ ಈ ಸೆಂಟರ್ ದಕ್ಷಿಣ ಕನ್ನಡ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ನೂರಾರು ಕ್ಯಾನ್ಸರ್ ರೋಗಿಗಳಿಗೆ ಆಶಾಕಿರಣವಾಗಲಿದೆ ಎಂದು ಅವರು ಶ್ಲಾಘಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | CM Siddaramaiah: ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ- ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಕ್ರಮವನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸ್ವಾಗತಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.