ಬೆಂಗಳೂರು, ಜು. 9: ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಡಿ. ವೇದವ್ಯಾಸ್ ಕಾಮತ್ (Vedavyas Kamath) ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅವರು ಮತ್ತು ಅವರ ಬೆಂಬಲಿಗರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ (Karnataka High Court) ರದ್ದುಪಡಿಸಿದೆ. ರಾಜಕೀಯ ವೈಷಮ್ಯ ಹಾಗೂ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನಡೆದ ಮಾತಿನ ಚಕಮಕಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿತ್ತು. ಇದೀಗ ಹೈಕೋರ್ಟ್ ಎಫ್‌ಐಆರ್ ರದ್ದು ಪಡಿಸುವ ಮೂಲಕ ಮಹತ್ವದ ತೀರ್ಪು ನೀಡಿದೆ.
ತಮ್ಮ ವಿರುದ್ಧ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಮತ್ತು ಜನಪ್ರತಿನಿಧಿಗಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಪ್ರಶ್ನಿಸಿ ವೇದವ್ಯಾಸ ಕಾಮತ್ ಹಾಗೂ ಇತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು.
ಕೋಮುಗಲಭೆ ಸೇರಿ 52 ಕ್ರಿಮಿನಲ್ ಪ್ರಕರಣ ವಾಪಸಾತಿ ನಿರ್ಧಾರಕ್ಕೆ ಮಧ್ಯಂತರ ತಡೆ
“ಪ್ರಕರಣಕ್ಕೆ ಸಂಬಂಧಿಸಿದ ದೂರಿಗೆ ಪ್ರತಿ ದೂರು ದಾಖಲಾಗಿದೆ. ಪ್ರತಿ ದೂರಿಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಯಾವುದೇ ಸಾಕ್ಷ್ಯಾಧಾರಗಳಿಲ್ಲದ ಕಾರಣ 'ಬಿ' ರಿಪೋರ್ಟ್ ಸಲ್ಲಿಸಿದ್ದಾರೆ. ಕೇವಲ ರಾಜಕೀಯ ದ್ವೇಷಕ್ಕಾಗಿ ಈ ದೂರನ್ನು ದಾಖಲಿಸಲಾಗಿದೆ ಮತ್ತು ಇದರಲ್ಲಿ ಯಾವುದೇ ಕ್ರಿಮಿನಲ್ ಅಪರಾಧದ ಅಂಶಗಳಿಲ್ಲ. ಇಂತಹ ಪ್ರಕರಣದ ತನಿಖೆ ಮುಂದುವರೆಸುವುದಕ್ಕೆ ಅನುಮತಿ ನೀಡುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗಲಿದೆ” ಎಂದು ಪೀಠ ಹೇಳಿದೆ.
ಏನಿದು ಪ್ರಕರಣ?
2025ರ ಮಾರ್ಚ್ 2ರಂದು ನಡೆದ ಮಂಗಳೂರಿನ ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದ ಬ್ರಹ್ಮಕಲಶೋತ್ಸವದಲ್ಲಿನ ಘಟನೆಗೆ ಸಂಬಂಧಿಸಿ ಪ್ರಕರಣ ಇದು. ಈ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್ ಆಡಿದ್ದರು ಎನ್ನಲಾದ ಮಾತುಗಳಿಗೆ ದೂರು ನೀಡಲಾಗಿತ್ತು. ಈ ಸಂಬಂಧ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು.
ವಿದ್ಯಾರ್ಥಿಗಳು ಕೃಷಿ ಕ್ಷೇತ್ರದ ಬಗ್ಗೆ ತಿಳಿದುಕೊಳ್ಳಬೇಕು: ವೇದವ್ಯಾಸ್ ಕಾಮತ್
ಹೈಕೋರ್ಟ್ ತೀರ್ಪಿಗೆ ಪ್ರತಿಕ್ರಿಯೆ ನೀಡಿ ಶಾಸಕ ವೇದವ್ಯಾಸ ಕಾಮತ್ ಸತ್ಯಕ್ಕೆ ಸಂದ ಜಯ ಎಂದು ಬಣ್ಣಿಸಿದ್ದಾರೆ. "ಇದೊಂದು ರಾಜಕೀಯ ಪ್ರೇರಿತ ಹಾಗೂ ದುರುದ್ದೇಶದಿಂದ ಕೂಡಿದ ಸುಳ್ಳು ಪ್ರಕರಣವಾಗಿತ್ತು. ಹೈಕೋರ್ಟ್ ನೀಡಿರುವ ಈ ತೀರ್ಪು ನ್ಯಾಯಕ್ಕೆ ಸಿಕ್ಕ ಜಯ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನನ್ನ ಸೇರಿ ಅನೇಕ ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರ ಮೇಲೆ ಸರಣಿ ಸುಳ್ಳು ಮೊಕದ್ದಮೆಗಳನ್ನು ದಾಖಲಿಸಲಾಗುತ್ತಿದೆ. ಆದರೆ ಸುಳ್ಳಿನ ಆಟ ಹೆಚ್ಚು ದಿನ ನಡೆಯುವುದಿಲ್ಲ ಎಂಬುದು ಈ ತೀರ್ಪಿನ ಮೂಲಕ ಮತ್ತೊಮ್ಮೆ ಸಾಬೀತಾಗಿದೆ" ಎಂದು ಹೇಳಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.