ಮಂಗಳೂರು, ಸೆ. 17: ರಾಜ್ಯ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ಸಭೆಯು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಶುಕ್ರವಾರ (ಸೆಪ್ಟೆಂಬರ್ 18) ನಡೆಯಲಿದೆ (Cabinet meeting in Mangaluru). ಹೀಗಾಗಿ ಕರಾವಳಿಯಲ್ಲಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರೆಯುವ ನಿರೀಕ್ಷೆಯಲ್ಲಿದ್ದಾರೆ ಸ್ಥಳೀಯರು. ಈ ಸಂದರ್ಭದಲ್ಲಿ ಹಲವು ವರ್ಷಗಳ ಬೇಡಿಕೆಯಾದ ತುಳು 2ನೇ ಆಡಳಿತ ಭಾಷೆಯಾಗಿ ಘೋಷಣೆಯಾಗುವ ಸಾಧ್ಯತೆ ಇದೆ. ಇತ್ತೀಚೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ, ಸೆಪ್ಟೆಂಬರ್ 18ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿರುವ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ಕರ್ನಾಟಕದ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಮಹತ್ವದ ತೀರ್ಮಾನ ಹೊರಬೀಳಲಿದೆ ಎಂದಿದ್ದರು.
ಕರ್ನಾಟಕದ ಆಡಳಿತವೇ ಕರಾವಳಿ ಅಂಗಳಕ್ಕೆ ಬರುತ್ತಿರುವ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳು, ಜನಪ್ರತಿನಿಧಿಗಳು, ಧಾರ್ಮಿಕ, ಸಾಮಾಜಿಕ ಸಂಘಟನೆಗಳು ಹಾಗೂ ಕೈಗಾರಿಕಾ ಒಕ್ಕೂಟಗಳು ಈಗಾಗಲೇ ಹಲವು ಪ್ರಸ್ತಾವನೆಗಳನ್ನು ಸರ್ಕಾರದ ಮುಂದಿಟ್ಟಿವೆ.
ಸೆ.18ರ ಸಚಿವ ಸಂಪುಟ ಸಭೆಯಲ್ಲಿ ತುಳು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ: ಶಾಸಕ ಅಶೋಕ್ ಕುಮಾರ್ ರೈ
ರಾಜ್ಯದ 2ನೇ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯನ್ನಾಗಿ ತಕ್ಷಣವೇ ಘೋಷಿಸಬೇಕು ಮತ್ತು ಸಂವಿಧಾನದ 3ನೇ ಅನುಸೂಚಿಗೆ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಪ್ರಬಲ ಶಿಫಾರಸು ಕಳುಹಿಸಬೇಕು ಎಂದು ಜಿಲ್ಲೆಯ ಶಾಸಕರು, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದ ಬಿಜೆಪಿ ನಿಯೋಗ, ವಿಶ್ವ ಹಿಂದೂ ಪರಿಷತ್ ಮುಂತಾದ ಸಂಘಟನೆಗಳು ಆಗ್ರಹಿಸಿವೆ.
ಇದಕ್ಕೆ ಪೂರಕವಾಗಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಾ.ಎಂ. ಮೋಹನ್ ಆಳ್ವ ಸಮಿತಿ ಸಲ್ಲಿಸಿದ ವರದಿಯನ್ನು ಯಥಾವತ್ ಜಾರಿಗೊಳಿಸಲು ಸಂಪುಟ ಸಭೆಯಲ್ಲೇ ಅಧಿಕೃತ ನಿರ್ಣಯ ಕೈಗೊಳ್ಳಬೇಕೆಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ.
ಇನ್ನು ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಉಡುಪಿಯಲ್ಲಿ ಭಾರತ್ ಜೋಡೋ ಕ್ರೀಡಾ ವಿಶ್ವ ವಿದ್ಯಾನಿಲಯ ಆರಂಭಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಒಪ್ಪಿಗೆ ಸಿಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕದ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗೆ ಸಚಿವ ಸಂಪುಟ ಒಪ್ಪಿಗೆ
ಸ್ಥಳೀಯ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯ ಯೋಜನೆಗಳಿಗೆ ತ್ವರಿತ ಹನಕಾಸು ಮತ್ತು ಆಡಳಿತಾತ್ಮಕ ಅನುಮೋದನೆ ದೊರೆಯಲಿದೆ. ದೇಗುಲ ಕಾರಿಡಾರ್‌ಗೂ ಪ್ರಸ್ತಾವನೆ ಸಲ್ಲಿಸಲಾಗಿದೆ. ಇನ್ನು ಕಡಲ್ಕೊರೆತ ತಡೆ ಕಾಮಗಾರಿಗೆ ತಕ್ಷಣ ಅನುದಾನ ಮಂಜೂರಾಗುವ ಸಾಧ್ಯತೆ ಇದೆ. ಕರಾವಳಿಗರ ನಿದ್ದೆಗೆಡಿಸಿದ ಕಸ್ತೂರಿ ರಂಗನ್ ವರದಿಯ ಬಗ್ಗೆ ಚರ್ಚೆ ನಡೆಯಲಿದೆ. ಒಟ್ಟಿನಲ್ಲಿ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಸಾಕಷ್ಟಿ ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದಂತೂ ನಿಜ.
![]()
ತುಳು ಭಾಷೆಯ ಮಾನ್ಯತೆಯಷ್ಟೇ ಅಲ್ಲದೆ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ಪ್ರಸ್ತಾವನೆಗಳನ್ನು ಸರ್ಕಾರದ ಮುಂದಿಡಲಾಗಿದೆ. ಸರ್ಕಾರಿ ಜಾಗದಲ್ಲಿರುವ ಪುರಾತನ ದೇವಸ್ಥಾನಗಳು, ಗರಡಿಗಳು ಹಾಗೂ ದೈವಸ್ಥಾನಗಳ ಭೂಮಿಯನ್ನು ಸಕ್ರಮಗೊಳಿಸುವುದು ಮತ್ತು ಮಠ-ಮಂದಿರಗಳಿಗೆ ಸೂಕ್ತ ಅನುದಾನ ಬಿಡುಗಡೆ ಮಾಡುವುದು ಸೇರಿದೆ. ಜತೆಗೆ 'ದಕ್ಷಿಣ ಕನ್ನಡ' ಜಿಲ್ಲೆಯ ಹೆಸರನ್ನು 'ಮಂಗಳೂರು ಜಿಲ್ಲೆ' ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯೂ ಇರಲಿದ್ದು, ಕರಾವಳಿಯ ಪಾಲಿಗೆ ಸೆಪ್ಟೆಂಬರ್ 18ರ ಸಂಪುಟ ಸಭೆ ಐತಿಹಾಸಿಕ ದಿನವಾಗಲಿದೆ
ಅಶೋಕ್ ಕುಮಾರ್ ರೈ, ಪುತ್ತೂರು ಶಾಸಕ