ದಕ್ಷಿಣ ಕನ್ನಡ: ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ದಕ್ಷಿಣ ಕನ್ನಡ (Dakshina Kannada Rain) ಜಿಲ್ಲೆಯ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಆಗಸ್ಟ್ 8 ರಂದು ರಜೆ (holiday) ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಪುತ್ತೂರು, ಬೆಳ್ತಂಗಡಿ, ಸುಳ್ಯ ಕಡಬ ತಾಲೂಕುಗಳಲ್ಲಿ ಅಂಗನವಾಡಿ ಹಾಗೂ 10ನೇ ತರಗತಿವರೆಗಿನ ಶಾಲೆಳು, ಪಿಯು ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.
ಈಗಾಗಲೇ ನಿಗದಿಯಾಗಿರುವ ವಿಶ್ವವಿದ್ಯಾಲಯ ಹಾಗೂ ಇತರ ಸಾರ್ವಜನಿಕ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ. ಶಾಲೆ-ಕಾಲೇಜುಗಳ ಶಿಕ್ಷಕರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ನದಿ, ಹೊಳೆ, ಕೆರೆ ಹಾಗೂ ಜಲಾಶಯಗಳ ಬಳಿ ಸಾರ್ವಜನಿಕರು ತೆರಳದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ತಗ್ಗು ಪ್ರದೇಶದ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದ್ದು, ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಆ.8ರಂದು ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಆ.8ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಕೆಲವೆಡೆ ನಿರಂತರ ಗಾಳಿಯೊಂದಿಗೆ (30-40 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.