ಉಜಿರೆ, ನ. 16: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸುಧೀರ್ ಕೆ.ವಿ. ಪ್ರತಿಷ್ಠಿತ ಮೌಲಾನಾ ಆಜಾದ್ ಬೋಧನಾ ಶ್ರೇಷ್ಠತಾ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತಮಿಳುನಾಡಿನ ಎ.ಸಿ.ಟಿ. ಅಕಾಡೆಮಿ ವತಿಯಿಂದ 2026ರ ನವೆಂಬರ್ 11ರಂದು ರಾಷ್ಟ್ರೀಯ ಶಿಕ್ಷಣ ದಿನದ ಅಂಗವಾಗಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಶಿಕ್ಷಣ ಕ್ಷೇತ್ರಕ್ಕೆ ಅವರು ಸಲ್ಲಿಸುತ್ತಿರುವ ಗಣನೀಯ ಸೇವೆ, ಬೋಧನಾ ವೃತ್ತಿಯಲ್ಲಿನ ಬದ್ಧತೆಯಂತಹ ಮಹತ್ವದ ಸೇವೆಯನ್ನು ಪರಿಗಣಿಸಿ ಈ ಗೌರವವನ್ನು ನೀಡಲಾಗಿದೆ.
ರಾಷ್ಟ್ರೀಯ ಶಿಕ್ಷಣ ದಿನದ ಅಂಗವಾಗಿ ನಡೆದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದಲ್ಲಿ ಶಿಕ್ಷಣ ಕ್ಷೇತ್ರದ ವಿವಿಧ ಆಯಾಮಗಳ ಕುರಿತು ಚರ್ಚೆ ನಡೆಯಿತು. ಇದೇ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಗೌರವಿಸುವ ನಿಟ್ಟಿನಲ್ಲಿ 2026ರ ಸಾಲಿನ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ಉಜಿರೆಯ ಎಸ್ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ ಮತ್ತೊಮ್ಮೆ ಶ್ರೇಷ್ಠತೆ ಸಾಬೀತು
ಬೋಧನೆ ಎನ್ನುವುದು ಕೇವಲ ಪಠ್ಯಕ್ರಮದ ಜ್ಞಾನವನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಪ್ರಕ್ರಿಯೆಯಷ್ಟೇ ಅಲ್ಲದೆ, ಅವರಲ್ಲಿ ಚಿಂತನಾ ಸಾಮರ್ಥ್ಯ, ವ್ಯಕ್ತಿತ್ವ ವಿಕಸನ, ಮಾನವೀಯ ಮೌಲ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಮಹತ್ವದ ಜವಾಬ್ದಾರಿಯಾಗಿದೆ. ಇಂತಹ ಶೈಕ್ಷಣಿಕ ಆಶಯಗಳಿಗೆ ಪೂರಕವಾಗಿ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ಬೋಧನಾ ವೃತ್ತಿಯಲ್ಲಿನ ಸಮರ್ಪಣೆಯನ್ನು ಗುರುತಿಸಿ ಡಾ. ಸುಧೀರ್ ಕೆ.ವಿ. ಅವರಿಗೆ ಈ ಪ್ರಶಸ್ತಿ ಲಭಿಸಿರುವುದು ಗಮನಾರ್ಹವಾಗಿದೆ.
ಡಾ. ಸುಧೀರ್ ಕೆ.ವಿ. ಅವರ ಈ ಸಾಧನೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಕಾಲೇಜಿನ ಪ್ರಾಂಶುಪಾಲರು, ಮನೋವಿಜ್ಞಾನ ವಿಭಾಗದ ಮುಖ್ಯಸ್ಥರು, ಅಧ್ಯಾಪಕ ವೃಂದ ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.