ಮಂಗಳೂರು: ಕಳೆದ ಕೆಲವು ತಿಂಗಳ ಹಿಂದೆ ಮಂಗಳೂರಿನಲ್ಲಿ (Mangaluru) ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು (Suhas Shetty murder case) ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಆ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಲ್ಲಿ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಧಿಕಾರಿಗಳು 14 ಕಡೆ ಏಕಕಾಲದಲ್ಲಿ ದಾಳಿ (NIA Raid) ಮಾಡಿದ್ದಾರೆ. ಎನ್‌ಐಎ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜ್ಪೆ ಮತ್ತು ಸುರತ್ಕಲ್ ಪ್ರದೇಶಗಳಲ್ಲಿ ಆರೋಪಿಗಳ ಮನೆ, ಕಚೇರಿ ಮೊದಲಾದ 14 ಕಡೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಕೆಲವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
ಮೇ 1ರಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಸುಹಾಸ್ ಶೆಟ್ಟಿ ಕೊಲೆಗೆ ಮೂರು ತಿಂಗಳ ಹಿಂದೆಯೇ ಸಂಚು ಹೂಡಲಾಗಿತ್ತು. ಜನವರಿಯಲ್ಲೇ ಸಫ್ವಾನ್ ತಂಡಕ್ಕೆ ಫಾಜಿಲ್ (ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಹತ್ಯೆಗೊಳಗಾಗಿದ್ದ ಯುವಕ) ತಮ್ಮ ಆದಿಲ್ 3 ಲಕ್ಷ ರೂಪಾಯಿ ಹಣ ಕೊಟ್ಟಿದ್ದ. ಕೃತ್ಯಕ್ಕಾಗಿ ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರ್ ಬಳಕೆ ಮಾಡಿದ್ದರು.
ಸುಹಾಸ್ ಶೆಟ್ಟಿ ಕೊಲೆಗೆ ಸಂಬಂಧಿಸಿ ಇದುವರೆಗೆ 11 ಆರೋಪಿಗಳನ್ನು ಪೊಲೀಸರು ಆರೆಸ್ಟ್ ಮಾಡಿದ್ದಾರೆ. ಇದಾದ ಬಳಿಕ ಸುಹಾಸ್ ಶೆಟ್ಟ ಕೊಲೆಗೆ ಪ್ರತೀಕಾರವಾಗಿ ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಎನ್ನುವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ: Suhas Shetty Murder Case: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಿದ ಕೇಂದ್ರ ಸರ್ಕಾರ