ಉಜಿರೆ ಮಾರ್ಚ್.16: "ವಿದ್ಯಾರ್ಥಿಗಳು ನಿಲಯಗಳಲ್ಲಿ ವಿದ್ಯಾಭ್ಯಾಸ ಮಾಡುವುದರ ಜೊತೆಗೆ ಬದುಕಿಗೆ ಅಗತ್ಯವಿರುವ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು. ಪ್ರಸ್ತುತ ದಿನಗಳಲ್ಲಿ ಪರೀಕ್ಷೆಗಳಲ್ಲಿ (Ujire SDM) ಅಂಕ ಗಳಿಸುವುದು ಮಾತ್ರವಲ್ಲದೆ, ಸಾಮಾಜಿಕ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ಅತ್ಯಗತ್ಯ" ಎಂದು ವಕೀಲರು ಹಾಗೂ ಎಸ್ ಡಿ ಎಮ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಡಾ. ಬಿ ಧನಂಜಯ ರಾವ್ ಹೇಳಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಧೀಮಂತ್ ಹಾಗೂ ಧೀಮಹಿ ವಿದ್ಯಾರ್ಥಿ ನಿಲಯಗಳು ಜಂಟಿಯಾಗಿ ಮಾರ್ಚ್ 16 ರಂದು ಹಾಸ್ಟೆಲ್ ಆವರಣದಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಕಾರ್ಯಕ್ರಮ 'ಧೀಮ್ ಬೀಟ್ಸ್ 2026' ನ್ನು ಉದ್ಘಾಟಿಸಿ ಮಾತನಾಡಿದರು.
"ಭವಿಷ್ಯದಲ್ಲಿ ಉಜ್ವಲ ಬದುಕು ರೂಪಿಸಿಕೊಳ್ಳಬೇಕಾದರೆ ವಿದ್ಯಾರ್ಥಿ ದೆಸೆಯಲ್ಲಿ ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಳಬೇಕು. ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದರೆ ಮಾತ್ರ ಉಜ್ವಲ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಜೊತೆಗೆ ನಿಮ್ಮ ನಿಮ್ಮ ಆಸಕ್ತ ಕ್ಷೇತ್ರಗಳಲ್ಲಿ ಕೌಶಲಗಳನ್ನು ರೂಢಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಸಿಗುವ ಎಲ್ಲಾ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡಾಗ ಮಾತ್ರ ವಿದ್ಯಾರ್ಥಿ ಜೀವನ ಸಾರ್ಥಕ ಮತ್ತು ಸಾಧಕವಾಗುತ್ತದೆ" ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಬಳಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಮ್ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ ಮಾತನಾಡಿ, "ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಶ್ರದ್ಧೆ ಮತ್ತು ಪರಿಶ್ರಮ ತುಂಬಾ ಮುಖ್ಯ. ಈ ನಿಟ್ಟಿನಲ್ಲಿ ನಮ್ಮ ವಿದ್ಯಾರ್ಥಿ ನಿಲಯಗಳು ಕಾರ್ಯ ನಿರ್ವಹಿಸುತ್ತಿವೆ. ಇನ್ನೂ, ನಮ್ಮ ಸಂಸ್ಥೆಲ್ಲಿ ಶಿಕ್ಷಣವನ್ನು ಕೇವಲ ಪಠ್ಯಕ್ಕೆ ಸೀಮಿತಗೊಳಿಸದೆ, ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚು ಹೊತ್ತು ನೀಡುತ್ತಿದ್ದೇವೆ. ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಪೂರಕವಾದ ಚಟುವಟಿಕೆಗಳನ್ನು ನಿರಂತರವಾಗಿ ಆಯೋಜಿಸುತ್ತಿದ್ದೇವೆ. ವಿದ್ಯಾರ್ಥಿಗಳು ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಉಪಯೋಗ ಪಡಿಸಿಕೊಂಡು ವೃತ್ತಿ ಬದುಕಿಗೆ ಅಗತ್ಯವಿರುವ ಕೌಶಳಗಳನ್ನು ವೃದ್ಧಿಸಿಕೊಳ್ಳಬೇಕು" ಎಂದು ಹೇಳಿದರು.
ದೆಹಲಿಯಲ್ಲಿ ನಡೆದ ಈ ಬಾರಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ ಎನ್ ಸಿ ಸಿ ಕ್ಯಾಡೇಟ್ ಮೋಹನ್ ಬಿ ಆರ್, ಮಹಾರಾಷ್ಟ್ರದಲ್ಲಿ ನಡೆದ ಆಲ್ ಇಂಡಿಯಾ ನವ ಸೈನಿಕ್ ಶಿಬಿರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ, ಚಿನ್ನದ ಪದಕ ಪಡೆದ ವರುಣ್ ಕೋಟ್ಯಾನ್ ಅವರಗೆ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಹಾಸ್ಟೆಲ್ ವಾರ್ಷಿಕೋತ್ಸವದ ಹಿನ್ನೆಲೆ ಆಯೋಜಿಸಲಾಗಿದ್ದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ಸ್ನಾತಕೋತರ ಕೇಂದ್ರದ ಡೀನ್ ಡಾ. ಸೌಮ್ಯ ಬಿ ಪಿ, ಎಸ್ ಡಿ ಎಮ್ ಕಾಲೇಜಿನ ಆಡಳಿತ ಕುಲಸಚಿವ ಶ್ರೀಧರ ಎನ್ ಭಟ್ಟ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ. ಸುರೇಶ್ ಬಾಬು ಕೆ ಎನ್, ನಟರಾಜ್ ಹೆಚ್ ಕೆ, ಡಾ. ನವೀನ್ ಕುಮಾರ್ ಜೈನ್, ಮನು ಎ ಆರ್, ಧೀಮಂತ್ ಹಾಗೂ ಧೀಮಹಿ ಹಾಸ್ಟೆಲ್ ನಿಲಯ ಪಾಲಕರು, ವಿದ್ಯಾರ್ಥಿಪ್ರತಿನಿಧಿಗಳು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.