ಮಂಗಳೂರು: ಧರ್ಮಸ್ಥಳ ವಿಚಾರದಲ್ಲಿ ಮಾತನಾಡುವಾಗ ಬಿಜೆಪಿ ನಾಯಕ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿಯ ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಯವರನ್ನು (Mahesh Shetty Timmarodi) ಬಂಧಿಸಿದ್ದರು. ಈ ಸಂಬಂಧ ಆಗಸ್ಟ್ 21ರಂದು ಸಂಜೆ ಬೇಲ್ ವಿಚಾರಣೆ ನಡೆಸಿದ ಕೋರ್ಟ್ ಬೇಲ್ ನೀಡಲು ನಿರಾಕರಿಸಿತ್ತು. ಆದರೆ ನಿನ್ನೆ ಅವರಿಗೆ ಜಾಮೀನು ಸಿಕ್ಕಿತ್ತು. ಇದೀಗ ತಿಮರೋಡಿ ಅವರಿಗೆ ಮತ್ತೆ ಸಂಕಷ್ಟ ಎದರುರಾಗಿದೆ. ಬೆಳ್ತಂಗಡಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಗೆ ವಿಚಾರಣೆ ನೋಟಿಸ್ ನೀಡಲು ಸಜ್ಜಾಗಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಲು ಹೋದ ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣ ಸಂಬಂಧ ದೂರು ದಾಖಲಾಗಿತ್ತು. ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆಣ್ಣನವರ್, ಜಯಂತ್ ಟಿ ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿತ್ತು. ಈಗಾಗಲೇ ವಿಚಾರಣೆಗೆ ಹಾಜರಾಗಿರುವ ಗಿರೀಶ್ ಮಟ್ಟಣ್ಣನವರ್ ಹೇಳಿಕೆ ದಾಖಲಿಸಿದ್ದಾರೆ. ಇದೀಗ ಮಹೇಶ್ ಶೆಟ್ಟಿ ತಿಮರೋಡಿಗೆ ನೋಟಿಸ್ ನೀಡಲು ಪೊಲೀಸರು ತಯಾರಿ ನಡೆಸಿದ್ದಾರೆ.
ಈ ಸುದ್ದಿಯನ್ನೂ ಓದಿ: Mahesh Shetty Timarodi: ಪೊಲೀಸರ ಕರ್ತವ್ಯಕ್ಕೆ ಅಡ್ಡಿ; ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಎಫ್‌ಐಆರ್
ಏನಿದು ಮಹೇಶ್ ಶೆಟ್ಟಿ ತಿಮರೋಡಿ ಪ್ರಕರಣ?
ಧರ್ಮಸ್ಥಳ ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಅನೇಕ ಹೇಳಿಕೆಗಳನ್ನು ನೀಡಿದ್ದಾರೆ. ಹಲವಾರು ಮಂದಿಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಅವರ ಮೇಲಿದೆ. ಅದೇ ರೀತಿ, ಬಿ ಎಲ್ ಸಂತೋಷ್ ವಿರುದ್ಧವೂ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂಬ ಆರೋಪವಿದೆ. ಈ ಬಗ್ಗೆ ಉಡುಪಿಯ ಬಿಜೆಪಿ ಮುಖಂಡರು ಬ್ರಹ್ಮಾವರ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ, ವಿಚಾರಣೆಗೆ ಹಾಜರಾಗುವಂತೆ ತಿಮರೋಡಿಗೆ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ಗುರುವಾರ ಬೆಳಗ್ಗೆ 9 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು. ಆದರೆ, ಆ ನೋಟಿಸ್ಗೆ, ‘15 ದಿನಗೊಳಗೆ ಹಾಜರಾಗುತ್ತೇನೆ’ ಎಂದು ತಿಮರೋಡಿ ಉತ್ತರಿಸಿದ್ದರು. ಇದಾದ ಬಳಿಕ ಪೊಲೀಸರು ಅವರನ್ನು ಬಂಧಿಸಿದ್ದರು. ಬಂಧಿಸಲು ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ಅಡ್ಡಿಪಡಿಸಿದ್ದಾರೆ ಎಂದು ಅವರ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.