5 ದಶಕಗಳ ರಾಜಕೀಯ ಜೀವನದಲ್ಲಿ ಒಮ್ಮೆ ಮಾತ್ರ ಸೋಲು ಕಂಡಿದ್ದ ಶಾಮನೂರು ಶಿವಶಂಕರಪ್ಪ!
Shamanur Shivashankarappa: ಶಾಮನೂರು ಶಿವಶಂಕರಪ್ಪ ಅವರು ತಮ್ಮ 64ನೇ ವಯಸ್ಸಿಯನಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆ ಚುನಾವಣೆಯಲ್ಲಿ ಗೆಲುವು ಪಡೆದಿದ್ದರು. ದಾವಣಗೆರೆಯ ಬಾಪೂಜಿ ಎಜುಕೇಷನಲ್ ಅಸೋಸಿಯೇಷನ್ ಮೂಲಕ ಅನೇಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.
ಶಾಮನೂರು ಶಿವಶಂಕರಪ್ಪ -
ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಶಾಮನೂರು ಶಿವಶಂಕರಪ್ಪ (94) (Shamanur Shivashankarappa) ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಅಜಾತಶತ್ರು ಎಂದೇ ಗುರುತಿಸಿಕೊಂಡಿದ್ದ ಇವರು, ಐದು ದಶಕಗಳ ರಾಜಕೀಯ ಜೀವನದಲ್ಲಿ ಒಮ್ಮೆ ಮಾತ್ರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅವರ ರಾಜಕೀಯ ಜೀವನದ ಕುರಿತ ಮಾಹಿತಿ ಇಲ್ಲಿದೆ.
ದಾವಣಗೆರೆಯ ಬಾಪೂಜಿ ಎಜುಕೇಷನಲ್ ಅಸೋಸಿಯೇಷನ್ ಮೂಲಕ ಅನೇಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಅಲ್ಲದೇ ಆರೋಗ್ಯ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಮಹತ್ವದ ಕಾರ್ಯಗಳನ್ನು ಮಾಡಿದ್ದಾರೆ.
1931ರ ಜೂನ್ 16ರಂದು ದಾವಣಗೆರೆಯ ಶಾಮನೂರು ಗ್ರಾಮದಲ್ಲಿ ಜನಿಸಿದ ಶಾಮನೂರು ಶಿವಶಂಕರಪ್ಪ ಅವರು, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಸ್ಥಳೀಯ ಸರ್ಕಾರಿ ಶಾಲೆಯಲ್ಲಿ ಪಡೆದರು. ಡಿಆರ್ಎಂ ಸೈನ್ಸ್ ಕಾಲೇಜಿನಲ್ಲಿ ವಿಜ್ಞಾನ ಪದವಿ ಪೂರೈಸಿದರು. ಅಕ್ಕಿ ವ್ಯಾಪಾರ ಮಾಡುತ್ತಾ ರಾಜಕೀಯಕ್ಕೆ ಪ್ರವೇಶ ಮಾಡಿದ ಅವರು, ಮೊದಲ ಬಾರಿಗೆ ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಭಾಗವಾಗಿದ್ದ ದಾವಣಗೆರೆ ನಗರಸಭೆಯ ಸದಸ್ಯರಾಗಿ, ಬಳಿಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
1994ರಲ್ಲಿ ವಿಧಾನಸಭೆಗೆ ಪ್ರವೇಶ
ಈ ಹಿಂದೆ ದಾವಣಗೆರೆ ಕ್ಷೇತ್ರದಲ್ಲಿ ವೀರಶೈವ ಪಂಚಮಸಾಲಿ ಸಮಾಜದ ಹಾಗೂ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಸಂಬಂಧಿಯೂ ಆಗಿದ್ದ ಯಜಮಾನ್ ಮೋತಿ ವೀರಣ್ಣ ಅವರು ಈ ಕ್ಷೇತ್ರದಿಂದ ಶಾಸಕರಾಗಿದ್ದರು. ಬಳಿಕ ಈ ಕ್ಷೇತ್ರ ಶಾಮನೂರು ಶಿವಶಂಕರಪ್ಪ ಅವರ ಭದ್ರಕೋಟೆಯಾಗಿಯಿತು. 1994, 2004, 2008, 2013 ಹಾಗೂ 2018, 2023 ಹೀಗೆ... ಆರು ಬಾರಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಹೊರಹೊಮ್ಮಿದ್ದಾರೆ. ಅಲ್ಲದೇ 1997ರಲ್ಲಿ ಸಂಸದರಾಗಿ ಆಯ್ಕೆಯಾಗಿದ್ದರು.
1997ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲುವು
ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅವರು, ಅಚ್ಚರಿಯಂತೆ 1997ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಬಳಿಕ 1999ರಲ್ಲಿ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.
ತಮ್ಮ 64ನೇ ವಯಸ್ಸಿಯನಲ್ಲಿ ಮೊದಲ ಬಾರಿಗೆ 1994ರಲ್ಲಿ ದಾವಣಗೆರೆ ನಗರಸಭೆ ಅಧ್ಯಕ್ಷರಾದರು. ಬಳಿಕ ಅದೇ ವರ್ಷ ದಾವಣಗೆರೆ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದರು. ನಂತರ 2004ರಲ್ಲಿ ಮತ್ತೇ ಅದೇ ಕ್ಷೇತ್ರದಿಂದ ಆಯ್ಕೆಯಾದ ಬಳಿಕ 2008ರಲ್ಲಿ ಕ್ಷೇತ್ರ ವಿಂಗಡಣೆಯಾದಾಗ 2008, 2013 ಹಾಗೂ 2018, 2023 ದಾವಣಗೆರೆ ದಕ್ಷಿಣ ಮತಕ್ಷೇತ್ರದಿಂದ ಶಾಸಕರಾಗಿ ಒಟ್ಟು ಆರು ಬಾರಿ ಆಯ್ಕೆಯಾಗಿದ್ದಾರೆ. ಇನ್ನು 2013ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ತೋಟಗಾರಿಕೆ ಸಚಿವರಾಗಿ ಕೆಲಸ ಮಾಡಿದ್ದಾರೆ.
ಕಳಚಿದ ಕಾಂಗ್ರೆಸ್‌ನ ಹಿರಿಯ ಕೊಂಡಿ; ಶಾಮನೂರು ಶಿವಶಂಕರಪ್ಪ ನಿಧನಕ್ಕೆ ವಿವಿಧ ರಾಜಕೀಯ ನಾಯಕರಿಂದ ಸಂತಾಪ
2023ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಜಯ ಗಳಿಸಿದ್ದರು. ಆಗ ಅವರಿಗೆ 92 ವರ್ಷ ವಯಸ್ಸಾಗಿತ್ತು.